ಮಡಿಕೇರಿ: ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ಅವರು ಮಡಿಕೇರಿಯ ಕೊಡಗು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೃಷಿ ಇಲಾಖೆ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ಸಭೆ ನಡೆಸಿದರು.
ನಿಗದಿತ ಕಾಲ ಮಿತಿಯಲ್ಲಿ ಆರ್ಥಿಕ ಹಾಗೂ ಭೌತಿಕ ಗುರಿ ಸಾಧನೆ ಮಾಡುವಂತೆ ಸಚಿವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಕೊಡಗು ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆಪ್ರದೇಶ ಹೆಚ್ಚಾಗಿದ್ದರೂ ಮುಂದಿನ ದಿನಗಳಲ್ಲಿ ಕೃಷಿ ಪ್ರದೇಶ ವಿಸ್ತರಣೆಗೂ ಆದ್ಯತೆ ನೀಡುವಂತೆ ಸೂಚಿಸಿದರು.
ರಸಗೊಬ್ಬರ ಪೂರೈಕೆಯಲ್ಲಿ ಯಾವುದೇ ಕೊರತೆಯಾಗದಂತೆ ನಿಗಾವಹಿಸಿ, ಕೆ.ವೈ ಸಿ ನೊಂದಣೆ ಶೇ.100 ರಷ್ಟು ಸಾಧನೆ ಮಾಡುವಂತೆ ನಿರ್ದೇಶನ ನೀಡಿದರು. ಅಂತರ್ಜಲ ಸಂರಕ್ಷಣೆಗೆ ಗಮನ ಹರಿಸಿ, ಜಲಾನಯನ ಇಲಾಖೆ ಯೋಜನೆಗಳ ಅನುಷ್ಠಾನವನ್ನು ಚುರುಕುಗೊಳಿಸಿ ಎಂದು ಹೇಳಿದರು.
ಕೊಡಗು ಜಿಲ್ಲೆಯ 5 ತಾಲ್ಲೂಕು ಸೇರಿದಂತೆ ಈಗಾಗಗಲೇ ರಾಜ್ಯದ 216 ತಾಲ್ಲೂಕುಗಳಲ್ಲಿ ಬರ ಘೋಷಣೆ ಮಾಡಲಾಗಿದೆ. ಕೇಂದ್ರದ ತಂಡ ಬರ ಪರಿಶೀಲನೆ ನಡೆಸಿ ತೆರಳಿದರೂ ಈವರಗೆ ಪರಿಹಾರ ಧನ ಬಿಡುಗಡೆಯಾಗಿಲ್ಲ. ಮೊನ್ನೆಯೂ ಕೇಂದ್ರದ ಅಧಿಕಾರಿಗಳನ್ನು ಭೇಟಿ ಮಾಡಿ ಮನವಿ ಮಾಡಲಾಗಿದೆ ಎಂದು ಸಚಿವರು ಹೇಳಿದರು.