ಬೆಂಗಳೂರಿನಲ್ಲಿ ನಿರಂತರ ಮಳೆ
ಬೆಂಗಳೂರು: ನಗರದ ವಿವಿಧೆಡೆ ನಿನ್ನೆ ರಾತ್ರಿ ನಿರಂತರವಾಗಿ ಸುರಿದ ಮಳೆಯಿಂದ ಉಂಟಾಗಿರುವ ಅನಾಹುತಗಳ ಬಗ್ಗೆ ಅರಿಯಲು ಬೆಂಗಳೂರು ನಗರಾಭಿವೃದ್ಧಿ ಖಾತೆಯನ್ನೂ ಹೊಂದಿರುವ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಬಿಬಿಎಂಪಿಯ ವಾರ್ ರೂಂಗೆ ಭೇಟಿ ನೀಡಿ ಮಾಹಿತಿ ಪಡೆದರು.
ನಗರದ ವಿವಿಧ ಭಾಗಗಳಲ್ಲಿ ಉಂಟಾಗಿರುವ ಸಮಸ್ಯೆಗಳನ್ನು ಪರಿಶೀಲಿಸಿ, ವಾರ್ ರೂಮ್‌ಗೆ ಬಂದ ದೂರವಾಣಿ ಕರೆಗಳನ್ನು ಸ್ವೀಕರಿಸಿ ಅಹವಾಲುಗಳಿಗೆ ಸ್ಪಂದಿಸಿದರು.
ಬಿಬಿಎಂಪಿ ಕೇಂದ್ರ ಕಚೇರಿಯ ಕಂಟ್ರೋಲ್ ರೂಂ, ಇಂಟಿಗ್ರೇಟೆಡ್ ಕಮಾಂಡ್ ಸೆಂಟರ್‌ಗೆ ಭೇಟಿ ನೀಡಿ ಮಳೆಯಿಂದ ಉಂಟಾದ ಅನಾಹುತಗಳ ಪರಿವೀಕ್ಷಣೆ ನಡೆಸಿದರು.

ಈ ಸಂದರ್ಭದಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಪಾಲಿಕೆಯ ಹಿರಿಯ ಅಧಿಕಾರಿಗಳು, ವಿಪತ್ತು ನಿರ್ವಹಣಾ ಕೇಂದ್ರದ ಅಧಿಕಾರಿಗಳು ಉಪಸ್ಥಿತರಿದ್ದು ಸಾರ್ವಜನಿಕರ ದೂರುಗಳಿಗೆ ಸ್ಪಂದಿಸಿದರು.
ಬಿಬಿಎಂಪಿಯ ಎಲ್ಲಾ ೮ ವಲಯಗಳ ಆಯುಕ್ತರು, ಜಂಟಿ ಆಯುಕ್ತರು, ಮುಖ್ಯ ಅಭಿಯಂತರರು ಆಯಾ ವಲಯಗಳಲ್ಲಿ ನಿನ್ನೆ ರಾತ್ರಿಯಿಂದ ಇಂದು ಬೆಳಗಿನವರೆಗೆ ಕಾರ್ಯನಿರ್ವಹಿಸಿ, ಮಳೆಯಿಂದಾದ ಅನಾಹುತಗಳನ್ನು ಪರಿಶೀಲಿಸಿದರು.
ವಿಪತ್ತು ನಿರ್ವಹಣಾ ಕೋಶದ ಅಧಿಕಾರಿಗಳು ಅನಾಹುತ ಸಂಭವಿಸಿದ ಸ್ಥಳಗಳಲ್ಲಿ ನೀರನ್ನು ತೆರವು ಗೊಳಿಸುತ್ತಿದ್ದಾರೆ.