ಟೀಕೆಗಳಿಗೆ ತಲೆ ಕೆಡಿಸಿಕೊಳ್ಳುವುದಿಲ್ಲ: ಸಿದ್ದರಾಮಯ್ಯ
ಬೆಂಗಳೂರು:ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಜಾರಿ ಆಗೋದಿಲ್ಲ, ಜಾರಿ ಆದರೆ ರಾಜ್ಯ ಆರ್ಥಿಕ ದಿವಾಳಿ ಆಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ನಾಯಕರು ಟೀಕಿಸಿದ್ದರು, ಆದರೆ, ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆ ಶತಕೋಟಿ ಸಂಭ್ರಮ ಆಚರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ತಿಳಿಸಿದ್ದಾರೆ.
ಶಕ್ತಿ ಯೋಜನೆಯ ಶತಕೋಟಿ ಸಂಭ್ರಮ ಕಾರ್ಯಕಮ ಉದ್ಘಾಟಿಸಿ ಮಾತನಾಡಿದ ಅವರು, ದೇಶದ ಯಾವ ಸರ್ಕಾರಗಳೂ ಹಿಂದೆಂದೂ ಮಾಡದ ಸಾಧನೆಯನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ಮಾಡಿ ತೋರಿಸಿದೆ, ಬಿಜೆಪಿಯವರು ಸುಳ್ಳು ಹೇಳುವುದನ್ನು ನಿಲ್ಲಿಸಬೇಕು ಎಂದರು.
ಜೂನ್ 11ಕ್ಕೆ ಶಕ್ತಿ ಯೋಜನೆ ಜಾರಿಯಾಗಿದ್ದು, ಈ ತಿಂಗಳ 23ರ ವರೆಗೆ ರಾಜ್ಯಾದ್ಯಂತ ಸಾರಿಗೆ ಸಂಸ್ಥೆ ಬಸ್ಗಳಲ್ಲಿ 100 ಕೋಟಿ 47 ಲಕ್ಷ ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದಾರೆ.
ಒಟ್ಟು ಬಸ್ ಪ್ರಯಾಣಿಕರ ಪೈಕಿ ಉಚಿತ ಪ್ರಯಾಣ ಮಾಡಿದವರಲ್ಲಿ ಶೇಕಡಾ 55 ರಷ್ಟು ಮಹಿಳೆಯರೇ ಸೇರಿದ್ದಾರೆ, ಮಹಿಳೆಯರಿಗೆ ಆರ್ಥಿಕವಾಗಿ ಶಕ್ತಿ ತುಂಬುವುದು ಸರ್ಕಾರದ ಗುರಿ, ಟೀಕೆಗಳಿಗೆ ತಲೆ ಕೆಡಿಸಿಕೊಳ್ಳುವುದಿಲ್ಲ.
ಒಂದು ಕೋಟಿ 17 ಲಕ್ಷ ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ನೋಂದಾಯಿಸಿಕೊಂಡು ಇವರಲ್ಲಿ ಒಂದು ಕೋಟಿ 10 ಲಕ್ಷ ಮಹಿಳೆಯರಿಗೆ ತಿಂಗಳಿಗೆ 2 ಸಾವಿರ ರೂಪಾಯಿ ತಲುಪುತ್ತಿದೆ.
ಎಲ್ಲಾ ವರ್ಗದವರ ಮಹಿಳೆಯರಿಗೆ ಸೌಲಭ್ಯ ತಲುಪುತ್ತಿದೆ
ಎಲ್ಲಾ ಜಾತಿ-ಧರ್ಮದ ಬಡವರು ಮಧ್ಯಮ ವರ್ಗದವರ ಮಹಿಳೆಯರಿಗೆ ಈ ಸೌಲಭ್ಯ ತಲುಪುತ್ತಿದೆ ಎಂದು ವಿವರಿಸಿದರು.
ಮಹಿಳೆಯರಿಗೆ ಆರ್ಥಿಕ ಶಕ್ತಿ ಕೊಡುವ ಜತೆಗೆ ಸಮಾಜದ ಎಲ್ಲಾ ವರ್ಗದ ಬಡವರಿಗೆ-ಮಧ್ಯಮ ವರ್ಗದವರಿಗೆ ಶಕ್ತಿ ತುಂಬುವಲ್ಲಿ ಇಟ್ಟ ಹೆಜ್ಜೆ ಹಿಂದಿಡುವುದಿಲ್ಲ.
ಕೋಟಿ-ಕೋಟಿ ಮನೆಗಳಿಗೆ ಉಚಿತ ವಿದ್ಯುತ್ ಮತ್ತು ಬಿಪಿಎಲ್ ಕುಟುಂಬಗಳಿಗೆ ಅಕ್ಕಿ ಹಾಗೂ ಅಕ್ಕಿಯ ಹಣವನ್ನು ಬ್ಯಾಂಕ್ ಖಾತೆಗೆ ಹಾಕುತ್ತಿದ್ದೇವೆ.
ಬಡವರ ಕೈಯಲ್ಲಿ ಹಣ ಇದ್ದರೆ ಆರ್ಥಿಕತೆಗೆ ಚೈತನ್ಯ ಬರುತ್ತದೆ, ಇದನ್ನು ಸಾಧಿಸಿ ತೋರಿಸಿದ್ದೇವೆ, ಜನರಿಗೆ ಕೊಟ್ಟ ಹಣ ವಾಪಾಸ್ ಸರ್ಕಾರಕ್ಕೇ ಬರುತ್ತದೆ, ಅದೇ ಹಣವನ್ನು ಪುನಃ ಜನರ ಜೇಬಿಗೆ ಹಾಕುತ್ತೇವೆ, ಇದರಿಂದ ಜಿಡಿಪಿ, ಆರ್ಥಿಕ ಚಟುವಟಿಕೆ ವೃದ್ಧಿಯಾಗುತ್ತದೆ ಎಂದರು.