ಡಿಸಿ, ಸಿಇಓ, ಎಸ್ಪಿಗಳಿಗೆ ಕೇಂದ್ರ ಸ್ಥಾನದಲ್ಲಿರಲು ಸೂಚನೆ
ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವೆಂಬರ್ 27 ರಂದು ಬೆಳಿಗ್ಗೆ 9.30 ರಿಂದ ಗೃಹ ಕಚೇರಿ ಕೃಷ್ಣಾದಲ್ಲಿ ಜನತಾ ದರ್ಶನ ನಡೆಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ.
ಜನರ ಬಳಿಗೇ ಆಡಳಿತ ಕೊಂಡೊಯ್ಯುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳು ಪ್ರತಿ ತಿಂಗಳು ಜನತಾ ದರ್ಶನ ನಡೆಸುವಂತೆ ಸೂಚಿಸಿದ್ದರು. ಇದೀಗ ಸ್ವತಃ ಮುಖ್ಯಮಂತ್ರಿಯವರು ಬೆಂಗಳೂರಿನಲ್ಲಿ ಜನತಾ ದರ್ಶನ ನಡೆಸಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ಬಗೆಹರಿಸಲು ಕ್ರಮ ಕೈಗೊಳ್ಳಲಿದ್ದಾರೆ.
ನವೆಂಬರ್ 27 ರಂದು ರಾಜ್ಯದ ವಿವಿದ ಸ್ಥಳಗಳಿಂದ ಅಹವಾಲುಗಳೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸುತ್ತಿದ್ದು, ಈ ಸಂದರ್ಭದಲ್ಲಿ ಮುಖ್ಯಮಂತ್ರಿಯವರು ಜಿಲ್ಲಾ/ತಾಲ್ಲೂಕು ಮಟ್ಟದ ಅಧಿಕಾರಿಗಳನ್ನು ನೇರವಾಗಿ ಸಂಪರ್ಕಿಸಿ ಅಹವಾಲುಗಳ ಕುರಿತು ಸೂಕ್ತ ಪರಿಹಾರೋಪಾಯಗಳನ್ನು ಒದಗಿಸುವ ನಿಟ್ಟಿನಲ್ಲಿ ನಿರ್ದೇಶನ ನೀಡಲಿದ್ದಾರೆ.
ಈ ಹಿನ್ನೆಲೆಯಲ್ಲಿ ಅಂದು ರಾಜ್ಯದ ಎಲ್ಲಾ ಜಿಲ್ಲೆಗಳ
ಜಿಲ್ಲಾಧಿಕಾರಿಗಳು/ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು/ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳು/ಎಲ್ಲಾ ಜಿಲ್ಲಾ/ಉಪವಿಭಾಗ/ತಾಲ್ಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿ ಹಾಜರಿದ್ದು ಮುಖ್ಯಮಂತ್ರಿಯವರ ಕಛೇರಿಯಿಂದ ಮಾಡುವ ಕರೆಗಳನ್ನು ಸ್ವೀಕರಿಸಿ, ಅಹವಾಲುಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವ ಕುರಿತು ಅಗತ್ಯ ಕ್ರಮವಹಿಸುವಂತೆ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಸೂಚಿಸಿದ್ದಾರೆ.