ಸಂವಿಧಾನದ ಆಶಯಗಳನ್ನು ಸರ್ಕಾರ ಎತ್ತಿಹಿಡಿಯುತ್ತದೆ
ಬೆಂಗಳೂರು:ಕಥೆ, ಕಾವ್ಯ, ನಾಟಕ, ಸಂಗೀತ ಮುಂತಾದ ಸೃಜನಶೀಲ ಅಭಿವ್ಯಕ್ತಿಯನ್ನು ಯಾವುದೇ ಕಾರಣಕ್ಕೂ ತಡೆಯುವ ಕೆಲಸ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಸ್ಪಷ್ಟಪಡಿಸಿದ್ದಾರೆ.
ಈ ಸಂಬಂಧ ಪ್ರಕಟಣೆ ನೀಡಿರುವ ಅವರು, ಸಂವಿಧಾನದ ಮೂಲ ಸ್ಫೂರ್ತಿಗೆ ವಿರುದ್ಧವಾಗದಂತೆ ನಡೆಯುವ ಎಲ್ಲಾ ಅಭಿವ್ಯಕ್ತಿಗಳ ಪರವಾಗಿದ್ದೇವೆ, ಕೆಳಹಂತದ ಪೊಲೀಸ್ ಅಧಿಕಾರಿಗಳ ತಪ್ಪು ತಿಳುವಳಿಕೆಯಿಂದಾಗಿ ಒಂದೆರಡು ಅನಾವಶ್ಯಕ ಗೊಂದಲಗಳು ನಿರ್ಮಾಣವಾಗಿದೆ ಎಂಬುದು ತಮ್ಮ ಗಮನಕ್ಕೆ ಬಂದಿದ್ದು, ಈ ಬಗ್ಗೆ ಯಾವುದೇ ಗೊಂದಲಗಳು ಸೃಷ್ಟಿಯಾಗದಂತೆ ಗಮನ ಹರಿಸುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ಸೂಕ್ತ ಸೂಚನೆಗಳನ್ನು ನೀಡಿರುವುದಾಗಿ ತಿಳಿಸಿದ್ದಾರೆ.
ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವ ಕೆಲಸಗಳ ಜೊತೆ ಸರ್ಕಾರ ಸದಾ ನಿಲ್ಲುತ್ತದೆ, ಅಭಿವ್ಯಕ್ತಿ ಸ್ವಾತಂತ್ರ್ಯದ ವಿಚಾರದಲ್ಲಿ ಆತಂಕಿತರಾಗಬಾರದೆಂದು ನಾಡ ಜನತೆಯಲ್ಲಿ ಮುಖ್ಯಮಂತ್ರಿ ಮನವಿ ಮಾಡಿದ್ದಾರೆ.
