ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಕುರಿತು ಸರ್ಕಾರಕ್ಕೆ ತರಾಟೆ
ಬೆಂಗಳೂರು: ಬೆಳಗಾವಿಯಲ್ಲಿ ನಡೆಯಲಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ಆಡಳಿತ-ಪ್ರತಿಪಕ್ಷಗಳ ನಡುವೆ ಭಾರೀ ಸಂಘರ್ಷಕ್ಕೆ ವೇದಿಕೆಯಾಗುವ ಸಾಧ್ಯತೆ ಇದೆ.
ಜೆಡಿಎಸ್ ಜತೆಗಿನ ಬಿಜೆಪಿ ಮೈತ್ರಿಯಿಂದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಜತೆ ಸೇರಿ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಹಾಗೂ ಪ್ರತಿಪಕ್ಷದ ಸದಸ್ಯರು ಸರ್ಕಾರದ ವಿರುದ್ಧ ಮುಗಿಬೀಳಲಿದ್ದಾರೆ.
ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಡುವ ಸಂಬಂಧ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಎರಡೂ ಪಕ್ಷಗಳ ನಾಯಕರು ಸುದೀರ್ಘ ಚರ್ಚೆ ನಡೆಸಿದ್ದಾರೆ.
ಐದು ಗ್ಯಾರೆಂಟಿ ಯೋಜನೆಗಳ ಅನುಷ್ಠಾನದಲ್ಲಿ ಲೋಪ
ಸರ್ಕಾರದ ಐದು ಗ್ಯಾರೆಂಟಿ ಯೋಜನೆಗಳ ಅನುಷ್ಠಾನದಲ್ಲಿ ಆಗುತ್ತಿರುವ ಲೋಪಗಳ ಬಗ್ಗೆ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಸದನಗಳಲ್ಲಿ ವಿವರವಾಗಿ ಪ್ರಸ್ತಾಪಿಸಲಿದ್ದು, ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲಿದ್ದಾರೆ.
ಉಚಿತ ವಿದ್ಯುತ್ ನೀಡುತ್ತಿರುವುದರಿಂದ ಕರ್ನಾಟಕ ಪವರ್ ಕಾರ್ಪೊರೇಷನ್ ಎದುರಿಸುತ್ತಿರುವ ಆರ್ಥಿಕ ದುಸ್ಥಿತಿ ಹಾಗೂ ನಿಗಮಕ್ಕೆ ಪಾವತಿಸಬೇಕಾದ ಇಪ್ಪತ್ತೊಂದು ಸಾವಿರ ಕೋಟಿ ರೂ. ಬಾಕಿ ವಿಷಯ ಚರ್ಚೆಗೆ ಬರಲಿದೆ.
ಸರ್ಕಾರದ ವಿರುದ್ಧ ಬ್ರಹ್ಮಾಸ್ತ್ರ ಬಳಕೆ
ವಿದ್ಯುತ್ ಉತ್ಪಾದನಾ ಆಣೆಕಟ್ಟುಗಳನ್ನು ಅಡವಿಟ್ಟು ಸಾಲ ಪಡೆದಿದೆ ಎಂಬ ಸುದ್ದಿ ರಾಜ್ಯಾದ್ಯಂತ ಕಾಳ್ಗಿಚ್ಚಿನಂತೆ ಹರಡಿದ್ದು, ಸರ್ಕಾರದ ವಿರುದ್ಧ ಬ್ರಹ್ಮಾಸ್ತ್ರವಾಗಿ ಬಳಕೆಯಾಗುವುದು ನಿಶ್ಚಿತವಾಗಿದೆ.
ಸರ್ಕಾರಿ ಕಾಮಗಾರಿಗಳ ಗುತ್ತಿಗೆದಾರರ ಬಳಿ ಕಮಿಷನ್ ಪಡೆಯುವ ಚಾಳಿ ಅವ್ಯಾಹತವಾಗಿ ನಡೆದಿದ್ದು, ಈ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳುವಂತೆ ಪ್ರತಿಪಕ್ಷಗಳು ಸರ್ಕಾರವನ್ನು ಒತ್ತಾಯ ಮಾಡಲಿವೆ.
ಹೊಸ ಯೋಜನೆಗಳನ್ನು ಜಾರಿ ಮಾಡುವುದಿರಲಿ, ಈಗಾಗಲೇ ಮಂಜೂರಾಗಿರುವ ಯೋಜನೆಗಳನ್ನೂ ಕೈಗೆತ್ತಿಕೊಳ್ಳಲು ಸರ್ಕಾರ ಹಿಂಜರಿಯುತ್ತಿದ್ದು, ರಾಜ್ಯದ ಅಭಿವೃದ್ಧಿಗೆ ಮಾರಕವಾದ ಬೆಳವಣಿಗೆ ಎಂಬುದು ಪ್ರತಿಪಕ್ಷಗಳ ನೇರ ಆರೋಪವಾಗಿರಲಿದೆ.
ಶಾಸಕರಿಗೆ ಸೂಕ್ತ ಅನುದಾನ ಮಂಜೂರು ವಿಷಯದಲ್ಲಿ ಸರ್ಕಾರ ಆಸಕ್ತಿ ತೋರದ ಪರಿಣಾಮ ಆಡಳಿತ ಮತ್ತು ಪ್ರತಿಪಕ್ಷಗಳ ಶಾಸಕರು ಅಸಮಾಧಾನಗೊಂಡಿದ್ದು, ತಮ್ಮ ಕ್ಷೇತ್ರಗಳ ಮತದಾರರ ಬಳಿ ಹೋಗಲು ಹಿಂಜರಿಯುವಂತಾಗಿರುವುದು ಸದನದಲ್ಲಿ ಪ್ರತಿಧ್ವನಿಸಲಿದೆ.
ಸರ್ಕಾರ ಬರಗಾಲ ಎದುರಿಸಲು ಕ್ರಿಯಾ ಯೋಜನೆ ಸಿದ್ಧಪಡಿಸಿಕೊಂಡಿಲ್ಲ
ಬರಗಾಲದಿಂದ ರಾಜ್ಯದ ಬಹುತೇಕ ಎಲ್ಲ ತಾಲ್ಲೂಕುಗಳು ಸಂಕಷ್ಟಕ್ಕೀಡಾಗಿದ್ದು, ಮುಂದಿನ ದಿನಗಳಲ್ಲಿ ಪರಿಸ್ಥಿತಿ ವಿಕೋಪಕ್ಕೆ ಹೋಗುವ ಸಾಧ್ಯತೆ ಹಿನ್ನೆಲೆಯಲ್ಲಿ ಸರ್ಕಾರ, ಬರಗಾಲ ಎದುರಿಸಲು ಕ್ರಿಯಾ ಯೋಜನೆ ಸಿದ್ಧಪಡಿಸಿಕೊಂಡಿಲ್ಲ ಎಂಬ ಆರೋಪ ಕೇಳಿಬರಲಿದೆ.
ಕರ್ನಾಟಕದ ಇತಿಹಾಸದಲ್ಲೇ ಹಿಂದೆಂದೂ ಈ ಮಟ್ಟದ ಬರಗಾಲದ ಭೀತಿ ಆವರಿಸಿರಲಿಲ್ಲ, ಮುಂಗಾರು ಮಾತ್ರವಲ್ಲ, ಹಿಂಗಾರು ಕೂಡಾ ವಿಫಲಗೊಂಡಿರುವ ಪರಿಣಾಮ ಆಹಾರಧಾನ್ಯಗಳ ಉತ್ಪಾದನೆ ಕುಂಠಿತಗೊಂಡಿದೆ.
ಆಹಾರ ಧಾನ್ಯಗಳ ಭಾರೀ ಬೆಲೆ ಏರಿಕೆ ಬಿಸಿ
ಇದರ ಪರಿಣಾಮವಾಗಿ ಜನ ಆಹಾರಧಾನ್ಯಗಳ ಭಾರೀ ಬೆಲೆ ಏರಿಕೆಯ ಬಿಸಿಗೆ ತತ್ತರಿಸಿದ್ದು, ಜನತೆಯ ಹಿತ ಕಾಯಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ರಾಜ್ಯ ಸರ್ಕಾರ ಇನ್ನೂ ಚಿಂತಿಸಿಲ್ಲ ಎಂಬುದು ಪ್ರತಿಪಕ್ಷಗಳ ಸ್ಪಷ್ಟ ಆರೋಪವಾಗಿದೆ.
ರಾಜ್ಯದ ಬರ ಪರಿಸ್ಥಿತಿ ಅಧಿವೇಶನದಲ್ಲಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ಯತ್ನ ನಡೆಯಲಿದೆ.
ಪ್ರತಿಪಕ್ಷಗಳ ದಾಳಿ ಎದುರಿಸಲು ಸರ್ಕಾರ ಕೂಡಾ ಸಜ್ಜಾಗಿದ್ದು, ಹಿಂದಿನ ಸರ್ಕಾರಗಳ ಅವಧಿಯಲ್ಲಾದ ಲೋಪಗಳ ಕುರಿತು ಪ್ರಸ್ತಾಪಿಸಲಿದೆ.
ವಸತಿ ಸಚಿವ ಜಮೀರ್ ಅಹ್ಮದ್, ತೆಲಂಗಾಣ ವಿಧಾನಸಭಾ ಚುನಾವಣಾ ಪ್ರಚಾರದ ವೇಳೆ ಪ್ರಸ್ತಾಪಿಸಿದ ಕರ್ನಾಟಕ ವಿಧಾನಸಭೆಯಲ್ಲಿ ಅಲ್ಪಸಂಖ್ಯಾತ ಸ್ಪೀಕರ್ ವಿಷಯವೂ ವಿಧಾನಮಂಡಲ ಅಧಿವೇಶನದಲ್ಲಿ ಪ್ರತಿಧ್ವನಿಸಲಿದೆ.
ಸರ್ಕಾರದ ಪ್ರಮುಖರ ವಿರುದ್ಧದ ಭ್ರಷ್ಟಾಚಾರ ಆರೋಪ
ಸರ್ಕಾರದ ಪ್ರಮುಖರ ವಿರುದ್ಧದ ಭ್ರಷ್ಟಾಚಾರದ ಆರೋಪಗಳನ್ನು ಸದನದಲ್ಲಿ ಎತ್ತಲು ಬಿಜೆಪಿ-ಜೆಡಿಎಸ್ ನಾಯಕರು ಸಜ್ಜಾಗಿದ್ದು, ದೊಡ್ಡ ಕೋಲಾಹಲಕ್ಕೆ ಕಾರಣವಾಗುವ ಸಾಧ್ಯತೆ ಇದೆ.
ಸರ್ಕಾರಿ ನೌಕರರ ವರ್ಗಾವಣೆ ಪ್ರಕರಣಗಳಲ್ಲಿ ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆದಿದೆ ಎಂಬ ಕುಮಾರಸ್ವಾಮಿ ಆರೋಪಕ್ಕೆ ವಿಧಾನಮಂಡಲದ ಅಧಿವೇಶನದಲ್ಲಿ ಪ್ರತಿಪಕ್ಷ ಬಿಜೆಪಿ ಬೆಂಬಲ ನೀಡುವುದರಿಂದ ಕಲಾಪ ರಂಗೇರಲಿದೆ.