ದಸರಾ ಅಂಬಾರಿ ಹೊತ್ತು ಸಾಗಿದ್ದ ಅರ್ಜುನ
ಬೆಂಗಳೂರು: ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಯಸಳೂರು ಬಳಿ ಕಾಡಾನೆಗಳ ಸೆರೆಗೆ ನಡೆಸಿದ ಕಾರ್ಯಾಚರಣೆ ವೇಳೆ ಒಂಟಿ ಸಲಗದ ದಾಳಿಗೆ ತುತ್ತಾಗಿ ಸಾಕಾನೆ ಅರ್ಜುನ ವೀರಮರಣ ಹೊಂದಿದ ಘಟನೆ ತಿಳಿದು ಬಹಳ ನೋವುಂಟಾಯಿತು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಈ ಸಂಬಂಧ ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ದಸರಾ ಅಂಬಾರಿಯನ್ನು ಹೊತ್ತು ಸಾಗಿದ್ದ ಅರ್ಜುನ ಇನ್ನು ನೆನಪಷ್ಟೇ ಎಂದು ವಿಷಾದಿಸಿದ್ದಾರೆ.
ಸ್ಥಳಾಂತರ ಕಾರ್ಯಾಚರಣೆ ವೇಳೆ ಸಾಕಾನೆಗಳು-ಕಾಡಾನೆಗಳ ನಡುವಿನ ಭೀಕರ ಕಾಳಗದ ವೇಳೆ ಇತರೆ ಸಾಕಾನೆಗಳು ಪಲಾಯನ ಮಾಡಿದರೆ, ಅರ್ಜುನ ಮಾತ್ರ ಒಂಟಿ ಸಲಗದ ಜತೆ ವಿರೋಚಿತವಾಗಿ ಸೆಣಸಾಡಿತ್ತು. ಇಂಥ ವಿರೋಚಿತ ಆನೆ ಸಾವನ್ನಪ್ಪಿರುವುದು ಅತ್ಯಂತ ದುಃಖದ ಸಂಗತಿ ಎಂದಿದ್ದಾರೆ.
ಕಾಡಾನೆಗಳನ್ನು ಸೆರೆ ಹಿಡಿಯುವಾಗ ತಮ್ಮ ಪ್ರಾಣ ರಕ್ಷಣೆಯ ಜತೆಗೆ ವನ್ಯಮೃಗಗಳ ಜೀವಕ್ಕೆ ಹಾನಿ ಆಗದಂತೆ ಅರಣ್ಯ ಸಿಬ್ಬಂದಿ ಮುನ್ನೆಚ್ಚರಿಕೆ ವಹಿಸಲಿ. ಅರ್ಜುನನ ಆತ್ಮಕ್ಕೆ ಚಿರಶಾಂತಿ ಸಿಗಲಿ. ಆ ತಾಯಿ ಚಾಮುಂಡೇಶ್ವರಿ ಸದ್ಗತಿ ಕರುಣಿಸಲಿ ಎಂದು ಅವರು ಪ್ರಾರ್ಥಿಸಿದ್ದಾರೆ.
