ವಸತಿ ಶಾಲೆಗಳಿಗೆ ಸರ್ಕಾರ ಆದೇಶ ಹೊರಡಿಸಿದೆ
ಬೆಳಗಾವಿ: ಕರ್ನಾಟಕ ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಸ್ಥಳೀಯ ಪ್ರದೇಶದಲ್ಲಿ ವಾಸಿಸುತ್ತಿರುವ, ಆಯಾ ತಾಲ್ಲೂಕಿನ ವಿದ್ಯಾರ್ಥಿಗಳಿಗೆ ಶೇ.60 ರಷ್ಟು ಸ್ಥಾನಗಳನ್ನು ಮೀಸಲಿರಿಸಲು ಸರ್ಕಾರ ಆದೇಶ ಹೊರಡಿಸಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಬುಧವಾರ ವಿಧಾನಸಭಾ ಅಧಿವೇಶನದಲ್ಲಿ ಶಾಸಕ ಶಿವಲಿಂಗೇಗೌಡ.ಕೆ.ಎಂ ಅವರ ಪ್ರಶ್ನೆಗೆ ಸಮಾಜ ಕಲ್ಯಾಣ ಇಲಾಖೆ ಸಚಿವರ ಪರವಾಗಿ ಅವರು ಉತ್ತರಿಸಿದರು.
ವಸತಿ ಶಾಲೆಗಳ ಶೇ.60ರಷ್ಟು ಮೀಸಲಾತಿಯು 2024-25ನೇ ಸಾಲಿನಿಂದ ಅನುಷ್ಠಾನಕ್ಕೆ ಬರಲಿದೆ. ಉಳಿದ ಶೇ.40 ರಷ್ಟು ಸ್ಥಾನಗಳನ್ನು ಅಂತರ್ ತಾಲ್ಲೂಕು, ಜಿಲ್ಲೆ, ಹಾಗೂ ರಾಜ್ಯದ ಮೂಲಕ ಭರ್ತಿ ಮಾಡಲಾಗುವುದು ಎಂದು ತಿಳಿಸಿದರು.
ಶಾಸಕ ಶಿವಲಿಂಗೇಗೌಡ ಮಾತನಾಡಿ, ವಸತಿ ಶಾಲೆಗಳ ಪ್ರವೇಶಕ್ಕೆ ಪರೀಕ್ಷೆ ಅಂಕಗಳನ್ನು ಮಾತ್ರ ಪರಿಗಣಿಸಬೇಡಿ. ಬಡತನ ರೇಖೆ ಹಾಗೂ ಓದಿಸಲು ಶಕ್ತರಿಲ್ಲದ ಪೋಷಕರ ಮಕ್ಕಳಿಗೆ ಅವಕಾಶ ನೀಡಬೇಕು. ಸ್ಥಳೀಯ ವಿದ್ಯಾರ್ಥಿಗಳಿಗೆ ಪ್ರವೇಶ ಮೀಸಲಾತಿಯನ್ನು ಶೇ.60 ರಿಂದ ಶೇ.75ಕ್ಕೆ ಹೆಚ್ಚಿಸಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದರು.