ವಾಟರ್ ಅಡಿಟ್ ಕಮಿಟಿ ರಚನೆ : ಪ್ರಿಯಾಂಕ್ ಖರ್ಗೆ
ಬೆಳಗಾವಿ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅಂತರ್ಜಲಮಟ್ಟ ಕುಸಿತವಾಗಿರುವ ಕುರಿತು ಅಧ್ಯಯನ ಮಾಡಿ ಸೂಕ್ತ ಶಿಪಾರಸ್ಸು ಮಾಡಲು ತಜ್ಞರೊಳಗೊಂಡ ವಾಟರ್ ಅಡಿಟ್ ಕಮಿಟಿಯನ್ನು ರಚಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರು ಹೇಳಿದರು.
ವಿಧಾನಸಭೆಯಲ್ಲಿ ನಡೆದ ಬರ ವಿಷಯದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿ ಬರ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸಲು ರಾಜ್ಯ ಸರಕಾರವು ಎಲ್ಲಾ ರೀತಿಯ ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದೆ. ಎಲ್ಲಾ ಜಿಲ್ಲಾ ಪಂಚಾಯತ್‌ಗಳ ಮುಖಾಂತರ ಪ್ರತಿ ಜಿಲ್ಲೆಯಲ್ಲಿ ಕಂಟಿಜೆನ್ಸಿ ಪ್ಲಾನ್ ತಯಾರಿಸಲಾಗಿದೆ. ಪ್ರತಿ ತಿಂಗಳು ತಾವು ವಿಡಿಯೊ ಕಾನ್ಪರೆನ್ಸ್ ಮೂಲಕ ಸಭೆ ಜರುಗಿಸಿ ಪ್ರಗತಿ ಪರಿಶೀಲನೆ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದರು.
ಬರ ನಿರ್ವಹಣೆಯಲ್ಲಿ ಲೋಪವಾಗದಂತೆ, ಮುಂದಿನ ದಿನಗಳಲ್ಲಿ ಉದ್ಭವಿಸಬಹುದಾದ ಬರ ಹಿನ್ನೆಲೆಯ ಸಮಸ್ಯೆಗಳ ಬಗ್ಗೆ ಸರಕಾರವು ಮುನ್ನೆಚ್ಚರಿಕೆ ವಹಿಸಿದೆ.
ಪ್ರತಿ ಜಿಲ್ಲಾ ಪಂಚಾಯತಿಯ ಗ್ರಾಮೀಣ ಕುಡಿಯುವ ನೀರು ಸರಬರಾಜು ವಿಭಾಗದಲ್ಲಿ ಕುಡಿಯುವ ನೀರಿಗಾಗಿ 1 ಕೋಟಿ ರೂ.ಗಳ ಹಣವನ್ನು ಪ್ರತ್ಯೇಕವಾಗಿ ಬಿಡುಗಡೆ ಮಾಡಲಾಗಿದೆ. ಸದನ ಸದಸ್ಯರ ಸಲಹೆ ಮೇರೆಗೆ ಅಗತ್ಯವಿರುವ ಕ್ರಮವಹಿಸುವುದಾಗಿ ಅವರು ತಿಳಿಸಿದರು.