ಮುದ್ರಾ, ಜನ-ಧನ್, ಪಿಎಂ ವಿಶ್ವಕರ್ಮ, ಉಜ್ವಲ ಜನಪರ ಕಾರ್ಯಕ್ರಮಗಳು
ಬೆಂಗಳೂರು: ಕೇಂದ್ರದ ಮುದ್ರಾ, ಜನ-ಧನ್, ಪಿಎಂ ವಿಶ್ವಕರ್ಮ, ಉಜ್ವಲ ಸೇರಿದಂತೆ ಪ್ರಧಾನಿ ನರೇಂದ್ರ ಮೋದಿ ಜಾರಿಗೆ ತಂದಿರುವ ಕಾರ್ಯಕ್ರಮಗಳನ್ನು ಗ್ರಾಮೀಣ ಭಾಗದ ಅರ್ಹರು ಸದುಪಯೋಗ ಪಡಿಸಿಕೊಳ್ಳಬೇಕೆಂದು ಕೇಂದ್ರ ಸಚಿವ ಜ್ಯೋತಿರಾಧಿತ್ಯ ಸಿಂಧ್ಯಾ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಇಂದಿಲ್ಲಿ ಕರೆ ನೀಡಿದರು.
ನಗರದ ಹೊರ ವಲಯದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಅವರು, ದೇಶದ ಜನರ ಆರ್ಥಿಕ ಸ್ಥಿತಿ ಸುಧಾರಿಸುವ ಸದುದ್ದೇಶದಿಂದ ಪ್ರಧಾನಿ ಅವರು ಈ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ ಎಂದರು.
ವಿವಿಧ ಯೋಜನೆಗಳ ಮಾಹಿತಿಯನ್ನು ಒಳಗೊಂಡ ಎಲ್‌ಇಡಿ ವಾಹನಗಳ ಸಂಚಾರದಿಂದ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ನಗರ ಪ್ರದೇಶದ ವಾರ್ಡ್‌ಗಳ ಜನರಲ್ಲಿ ಜಾಗೃತಿ ಮೂಡಿಸಿ ಸರ್ಕಾರದ ಯೋಜನೆಗಳ ಲಾಭ ಫಲಾನುಭವಿಗಳಿಗೆ ಧಕ್ಕಬೇಕು ಎಂಬ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದರು.
ಯೋಜನೆಗಳಿಂದ ವಂಚಿತರಾದವರಿಗೆ ಇದರ ಸದುಪಯೋಗ ಸಿಗುವಂತೆ ಮಾಡಲಾಗುತ್ತಿದೆ. ಸಾರ್ವಜನಿಕರು ಸಂಬಂಧಪಟ್ಟ ಅಧಿಕಾರಿಗಳ ಬಳಿ ತೆರಳಿ ಯೋಜನೆಗಳ ಲಾಭ ಪಡೆದುಕೊಳ್ಳಬೇಕು ಎಂದರು.