4,000 ನಿವೇಶನಗಳಿಗೆ ಅಂಗನವಾಡಿ ಹೆಸರು: ಲಕ್ಷ್ಮೀ ಹೆಬ್ಬಾಳ್ಕರ್
ಬೆಳಗಾವಿ: ರಾಜ್ಯದಲ್ಲಿ ಸಾಧ್ಯವಾದಷ್ಟು ಕಡೆಗಳಲ್ಲಿ ಅಂಗನವಾಡಿಗಳಿಗೆ ಸ್ವಂತ ಕಟ್ಟಡ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಧಾನಸಭೆಗಿಂದು ತಿಳಿಸಿದ್ದಾರೆ.
ಪ್ರಶ್ನೋತ್ತರ ವೇಳೆಯಲ್ಲಿ ಷಡಕ್ಷರಿ.ಕೆ ಅವರ ಪ್ರಸ್ತಾವಕ್ಕೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ 4 ಸಾವಿರ ಸರ್ಕಾರಿ ನಿವೇಶನಗಳಿಗೆ ಅಂಗನವಾಡಿ ಹೆಸರು ಹಾಕಿಸಲಾಗಿದೆ, ನಿವೇಶನ ದೊರೆತ ತಕ್ಷಣ ಅಗತ್ಯವಿರುವೆಡೆ ಸ್ವಂತ ಕಟ್ಟಡ ನಿರ್ಮಾಣ ಮಾಡಲಾಗುವುದು ಎಂದರು.
ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ
ಸಾರ್ವಜನಿಕ ಸೌಲಭ್ಯಕ್ಕೆ ಮೀಸಲಿಟ್ಟಿರುವ ನಿವೇಶನಗಳನ್ನು ಅಂಗನವಾಡಿ ಕಟ್ಟಡಕ್ಕೆ ಬಳಸುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.
ಶರಣಗೌಡ ಕಂದಕೂರು ಅವರ ಪ್ರತ್ಯೇಕ ಪ್ರಸ್ತಾವಕ್ಕೆ ಉತ್ತರಿಸಿದ ಸಚಿವರು, ಬಾಲ್ಯವಿವಾಹ ಪದ್ಧತಿಯನ್ನು ಬೇರು ಸಮೇತ ಕಿತ್ತು ಹಾಕಲು ಇಲಾಖೆ ಸನ್ನದ್ಧವಾಗಿದೆ ಎಂದರು.
ಬಾಲ್ಯವಿವಾಹ ಪ್ರಕರಣ ಮುಚ್ಚಿಹಾಕಲು ಸಾಧ್ಯವಿಲ್ಲ
ಬಾಲ್ಯವಿವಾಹ ಪ್ರಕರಣಗಳನ್ನು ಮುಚ್ಚಿಹಾಕಲು ಯಾರಿಂದಲೂ ಸಾಧ್ಯವಿಲ್ಲ, ರಾಜ್ಯದಲ್ಲಿ ಈಗ ಅತ್ಯಂತ ಪ್ರಬಲವಾದ ಕಾನೂನು ಇದೆ, ನಿರ್ದಿಷ್ಟ ಪ್ರಕರಣಗಳನ್ನು ಗಮನಕ್ಕೆ ತಂದರೆ ತಕ್ಷಣ ಕ್ರಮ ಕೈಗೊಳ್ಳಲಾಗುವುದು.
ಮಕ್ಕಳ ಹಕ್ಕುಗಳ ರಕ್ಷಣೆಗೆ ವಿವಿಧ ನಿಯಮಗಳಡಿ ಕೆಲಸ ಮಾಡಲಾಗುತ್ತಿದೆ, ಅನುಷ್ಠಾನದಲ್ಲಿನ ಕೊರತೆಗಳನ್ನು ಸರ್ಕಾರ ಗಮನಿಸಿದೆ, ಅವುಗಳನ್ನು ಪರಿಹರಿಸಿ ಮಕ್ಕಳ ಹಕ್ಕುಗಳನ್ನು ಸಂರಕ್ಷಿಸಲು ಇಲಾಖೆ ಮುಂದಾಗಿದೆ.
ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗವು ದಾಖಲಾಗುವ ನಿರ್ದಿಷ್ಟ ಪ್ರಕರಣಗಳಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳುತ್ತದೆ ಎಂದರು.