ಬೆಂಗಳೂರಿನಲ್ಲಿ ಜನವರಿ 5,6,7 ರಂದು ಸಿರಿಧಾನ್ಯ ಮೇಳ
ಬೆಳಗಾವಿ: ಸಿರಿಧಾನ್ಯ ಬೆಳೆಯಲ್ಲಿ ಕರ್ನಾಟಕ ದೇಶದಲ್ಲಿ 4ನೇ ಸ್ಥಾನದಲ್ಲಿದೆ, ದೇಶದಲ್ಲಿಯೇ ಅತಿಹೆಚ್ಚು ಸಿರಿಧಾನ್ಯ ಬೆಳೆಯುವ ರಾಜ್ಯವಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸಿರಿಧಾನ್ಯ ಮತ್ತು ಸಾವಯವ ಅಂತಾರಾಷ್ಟ್ರೀಯ ದಿನ-2023 ಮತ್ತು ಮೇಳದ ಪೂರ್ವಭಾವಿ ಕಾರ್ಯಕ್ರಮ ಉದ್ಗಾಟಿಸಿ ಮಾತನಾಡಿದ ಅವರು, ಸಿರಿಧಾನ್ಯಗಳ ಬಳಕೆ ಲಾಭಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವಲ್ಲಿ ಇಂತಹ ಮೇಳಗಳು ಸಹಕಾರಿಯಾಗಿವೆ ಎಂದರು.
ಸಾವಯವ ಕೃಷಿಯತ್ತ ರೈತರು ಮುಖ ಮಾಡಿದ್ದು, ಸಾವಯವ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದೆ, ಇಂದು ವಿಶ್ವದಲ್ಲಿ ಸಿರಿಧಾನ್ಯ ದಿನವನ್ನು ಆಚರಿಸಲಾಗುತ್ತಿದೆ, ಜನರಲ್ಲಿ ಹಾಗೂ ರೈತರಲ್ಲಿ ಸಿರಿಧಾನ್ಯಗಳ ಬಗ್ಗೆ ಜಾಗೃತಿ ಮೂಡಿಸಲು ಹಾಗೂ ಇವುಗಳಿಗೆ ಮಾರುಕಟ್ಟೆ ಒದಗಿಸಬೇಕು.
ಸಿರಿಧಾನ್ಯ ಆರೋಗ್ಯಕ್ಕೆ ಒಳ್ಳೆಯದು
ಸಾವಯವ ಕೃಷಿ ಪದ್ಧತಿ, ಸಿರಿಧಾನ್ಯಗಳ ಬಗ್ಗೆ ಜಾಗೃತಿ ಮೂಡಿಸಲು ಬೆಂಗಳೂರಿನಲ್ಲಿ ಜನವರಿ 5 ,6 ,7 ರಂದು ಸಿರಿಧಾನ್ಯ ಮೇಳ ಏರ್ಪಡಿಸಲಾಗಿದೆ ಎಂದರು.
ಮೊದಲು ರಾಗಿ, ಜೋಳ, ನವಣೆ, ಸಾಮೆ, ಆರ್ಕವನ್ನು ಬೆಳೆಯುತ್ತಿದ್ದೆವು, ಮಳೆ ಕಡಿಮೆಯಾಗುವ ಪ್ರದೇಶಗಳಲ್ಲಿ ಸಿರಿಧಾನ್ಯಗಳನ್ನು ಬೆಳೆಯಲಾಗುತ್ತದೆ.
ಸಿರಿಧಾನ್ಯಗಳು ಆರೋಗ್ಯಕ್ಕೆ ಒಳ್ಳೆಯದೆಂದು ಅರಿತಿರುವ ಜನ ಹೆಚ್ಚೆಚ್ಚು ಬಳಕೆ ಮಾಡುತ್ತಿದ್ದಾರೆ, ಇದರಲ್ಲಿ ಕಾರ್ಬೊಹೈಡ್ರೇಟ್ಸ್ ಕಡಿಮೆಯಿದ್ದು, ಲವಣಾಂಶ ಮತ್ತು ನಾರಿನಂಶ ಹೇರಳವಾಗಿದ್ದು, ಆರೋಗ್ಯಕ್ಕೆ ಉತ್ತಮವಾಗಿದೆ ಎಂದರು.
ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನಪರಿಷತ್ ಉಪಸಭಾಪತಿ ಪ್ರಾಣೇಶ್, ವಿಧಾನಸಭಾಧ್ಯಕ್ಷ ಯು.ಟಿ.ಖಾದರ್, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೃಷಿ ಸಚಿವ ಚೆಲುವರಾಯಸ್ವಾಮಿ, ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಉಪಸ್ಥಿತರಿದ್ದರು.