ಕ್ರಿಸ್‌ಮಸ್-ಹೊಸ ವರ್ಷ ಆಚರಣೆ ಸಂದರ್ಭದಲ್ಲಿ ಜಾಗೃತರಾಗಿರಿ
ಬೆಂಗಳೂರು: ಗಡಿಯ ತಮಿಳುನಾಡು ಮತ್ತು ಕೇರಳ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಳವಾಗುತ್ತಿರುವುದರಿಂದ ಕ್ರಿಸ್‌ಮಸ್ ಮತ್ತು ಹೊಸ ವರ್ಷ ಆಚರಣೆ ಸಂದರ್ಭದಲ್ಲಿ ಎಚ್ಚರಿಕೆ ವಹಿಸಿ ಎಂದು ರಾಜ್ಯ ಸರ್ಕಾರ ಸಾರ್ವಜನಿಕರಲ್ಲಿ ಮನವಿ ಮಾಡಿದೆ.
ಎಲ್ಲಾ ಹಿರಿಯ ನಾಗರಿಕರು, ಗರ್ಭಿಣಿಯರು ಹಾಗೂ ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಸೂಚಿಸಿದೆ.
ರಾಜ್ಯ ಸರ್ಕಾರದ ಮಾರ್ಗಸೂಚಿ
ಹೊಸ ವರ್ಷ ಆಚರಣೆ ಹಿನ್ನೆಲೆಯಲ್ಲಿ ಕೋವಿಡ್ ಹರಡುವಿಕೆ ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ರಾಜ್ಯ ಸರ್ಕಾರ ಇಂದಿಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಿ ಸಾರ್ವಜನಿಕರಿಗೆ ತಿಳುವಳಿಕೆ ನೀಡಿದೆ.
ಗಡಿ ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವುದರಿಂದ ತಾಂತ್ರಿಕ ಸಲಹಾ ಸಮಿತಿ ನೀಡಿರುವ ಶಿಫಾರಸುಗಳನ್ನು ರಾಜ್ಯ ಸರ್ಕಾರ ಇಂದು ಆದೇಶದ ಮೂಲಕ ಹೊರಡಿಸಿ ಸಾರ್ವಜನಿಕರು ಕಟ್ಟುನಿಟ್ಟಾಗಿ ಪಾಲಿಸುವಂತೆ ಮನವಿ ಮಾಡಿದೆ.
೬೦ ವರ್ಷ ಹಾಗೂ ಅದಕ್ಕೂ ಮೇಲ್ಪಟ್ಟವರು, ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು, ಗರ್ಭಿಣಿಯರು, ಎದೆ ಹಾಲುಣಿಸುವ ತಾಯಂದಿರು, ಹೊರಾಂಗಣ ಪ್ರದೇಶಗಳಿಗೆ ತೆರಳುವಾಗ ಮಾಸ್ಕ್ ಧರಿಸಬೇಕು.
ಅಗತ್ಯ ಗಾಳಿ-ಬೆಳಕಿನ ವ್ಯವಸ್ಥೆ ಇಲ್ಲದ ಹಾಗೂ ಹೆಚ್ಚು ಜನಸಂದಣಿ ಇರುವ ಪ್ರದೇಶಗಳಿಗೆ ತೆರಳದಂತೆ ಸಲಹೆ ಮಾಡಿದೆ.
ವೈದ್ಯಕೀಯ ಸಲಹೆ ಪಡೆಯಿರಿ
ಜ್ವರ, ಕೆಮ್ಮು, ನೆಗಡಿ, ಉಸಿರಾಟದ ತೊಂದರೆ ಇತ್ಯಾದಿ ಲಕ್ಷಣಗಳು ಕಂಡುಬಂದರೆ ತಕ್ಷಣವೇ ವೈದ್ಯಕೀಯ ಸಲಹೆ ಪಡೆಯಬೇಕು ಮತ್ತು ಮಾಸ್ಕ್ ಧರಿಸಬೇಕು.
ವೈಯಕ್ತಿಕ ಸ್ವಚ್ಛತೆ, ಕೈಗಳನ್ನು ಆಗಾಗ್ಯೆ ಸೋಪಿನಿಂದ ತೊಳೆಯವ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.
ಆರೋಗ್ಯ ಸಮಸ್ಯೆಗಳು ಕಂಡುಬಂದರೆ ಮನೆಯಲ್ಲಿರುವುದು ಸೂಕ್ತ, ಅದಲ್ಲೂ ಮಕ್ಕಳು ಮತ್ತು ಹಿರಿಯರನ್ನು ಇಂತಹ ಸಮಯದಲ್ಲಿ ಭೇಟಿ ಮಾಡಬೇಡಿ.
ಅಗತ್ಯ ಮುಂಜಾಗ್ರತಾ ಕ್ರಮ ವಹಿಸಿ
ಅಂತಾರಾಷ್ಟ್ರೀಯ ಪ್ರಯಾಣ ಸಂದರ್ಭದಲ್ಲಿ ಎಚ್ಚರಿಕೆಯಿಂದಿದ್ದು, ವಿಮಾನ ನಿಲ್ದಾಣದಲ್ಲಿ ಹಾಗೂ ವಿಮಾನದ ಒಳಗೆ ಮಾಸ್ಕ್ ಧರಿಸುವುದು, ಹೆಚ್ಚಿನ ಗಾಳಿ-ಬೆಳಕು ಇಲ್ಲದ ಮತ್ತು ಜನದಟ್ಟಣೆ ಸ್ಥಳಗಳಿಗೆ ತೆರಳದಿರುವುದು ಸೇರಿದಂತೆ ಇತರ ಅಗತ್ಯ ಮುಂಜಾಗ್ರತಾ ಕ್ರಮ ವಹಿಸುವಂತೆ ಸಲಹೆ ಮಾಡಿದೆ.
ತಜ್ಞರ ಸಲಹೆಯಂತೆ ಇಂದು ಆರೋಗ್ಯ ಇಲಾಖೆ ಅಧಿಕಾರಿಗಳು ನಗರಪಾಲಿಕೆ ಮತ್ತು ಜಿಲ್ಲಾ ಆರೋಗ್ಯಾಧಿಕಾರಿಗಳ ಜೊತೆ ವಿಡಿಯೊ ಸಂವಾದ ನಡೆಸಿ ಕೋವಿಡ್ ಬಗ್ಗೆ ಮಾಹಿತಿ ಮತ್ತು ಸಲಹೆ ಸೂಚನೆಗಳನ್ನು ನೀಡಿದೆ.
ಕೋವಿಡ್ ರೋಗಿಗಳಿಗೆ ವಿಶೇಷ ವಾರ್ಡ್ ಹಾಗೂ ಮೂಲಸೌಕರ್ಯಗಳನ್ನು ಸಿದ್ಧಪಡಿಸಿಕೊಳ್ಳಿ, ಮಿಗಿಲಾಗಿ ಆಕ್ಸಿಜನ್ ಕೊರತೆ ಆಗದಂತೆ ನೋಡಿಕೊಳ್ಳಿ ಹಾಗೂ ಸರ್ಕಾರದ ಮಾರ್ಗಸೂಚಿಯಂತೆ ಪರೀಕ್ಷಾ ಕಿಟ್‌ಗಳನ್ನು ಖರೀದಿಸುವಂತೆ ತಿಳಿಸಿದೆ.
4 comments
[…] ರಾಜ್ಯ […]
[…] ರಾಜ್ಯ […]
[…] ರಾಜ್ಯ […]
[…] ರಾಜ್ಯ […]