ಕೇಂದ್ರ ಪುರಸ್ಕೃತ ಯೋಜನೆಗಳ ಅನುದಾನ ಬಿಡುಗಡೆಗೆ ಕೋರಿಕೆ
ದೆಹಲಿ: ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ನವದೆಹಲಿಯಲ್ಲಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿಯವರನ್ನು ಭೇಟಿ ಮಾಡಿ, ಕೇಂದ್ರ ಪುರಸ್ಕೃತ ಯೋಜನೆಗಳ ಅನುದಾನ ಬಿಡುಗಡೆ ಕುರಿತಂತೆ ಸುದೀರ್ಘವಾಗಿ ಮಾತುಕತೆ ನಡೆಸಿದರು.
ಕೇಂದ್ರ ಪುರಸ್ಕೃತ ಯೋಜನೆಗಳಾದ ಸಖಿ ಒನ್ ಸ್ಟಾಪ್ ಸೆಂಟರ್, ಸಖಿ ನಿವಾಸ್, ಶಕ್ತಿ ಸದನ್, ಉಜ್ವಲ್ ಹಾಗೂ ಸ್ವಾಧಾರ ಗೃಹ ಯೋಜನೆಗಳ ಅನುದಾನ ಬಿಡುಗಡೆಗೊಳಿಸುವಂತೆ ವಿನಂತಿಸಿದರು.
ಐಸಿಡಿಎಸ್ ಯೋಜನೆಯಡಿ ಅಂಗನವಾಡಿಗಳಿಗೆ ನೀಡಬೇಕಿರುವ ಅಕ್ಕಿ ಮತ್ತು ಗೋಧಿ ಕಳೆದ ಒಂದು ವರ್ಷದಿಂದ ಬಿಡುಗಡೆಯಾಗದೆ ಬಾಕಿ ಉಳಿದಿರುವ ಕುರಿತು ಸಹ ಕೇಂದ್ರ ಸಚಿವರ ಗಮನ ಸೆಳೆದ ಲಕ್ಷ್ಮೀ ಹೆಬ್ಬಾಳಕರ್, ಕೂಡಲೆ ಬಿಡುಗಡೆಗೊಳಿಸಲು ಕ್ರಮ ತೆಗೆದುಕೊಳ್ಳುವಂತೆ ಕೋರಿದರು.
51 ತಾಲೂಕುಗಳಿಗೆ ಶಿಶು ಅಭಿವೃದ್ಧಿ ಕಚೇರಿ ಮಂಜೂರು
ಜೊತೆಗೆ, ರಾಜ್ಯದಲ್ಲಿ ಹೊಸದಾಗಿ ರಚನೆಯಾಗಿರುವ 51 ತಾಲೂಕುಗಳಿಗೆ ಶಿಶು ಅಭಿವೃದ್ಧಿ ಕಚೇರಿ ಮಂಜೂರು ಮಾಡುವಂತೆ ಮತ್ತು ಸಿಬ್ಬಂದಿ ನೀಡುವಂತೆ ಹಾಗೂ ಸಕ್ಷಮ್ ಯೋಜನೆಯಡಿಯ ಅಂಗನವಾಡಿ ಕೇಂದ್ರಗಳನ್ನು ಸ್ಮಾರ್ಟ್ ಕ್ಲಾಸ್ ರೂಂ ಆಗಿ ಪರಿವರ್ತಿಸಲು ಅವರು ಸ್ಮೃತಿ ಇರಾನಿ ಬಳಿ ಅವರು ಮನವಿ ಮಾಡಿದರು.
ಲಕ್ಷ್ಮೀ ಹೆಬ್ಬಾಳಕರ್ ಅವರ ಮನವಿಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸ್ಮೃತಿ ಇರಾನಿ ಅವರು ತಕ್ಷಣ ಎಲ್ಲವುಗಳಿಗೆ ಸಂಬಂಧಿಸಿದಂತೆ ಸಮಗ್ರ ವರದಿ ನೀಡುವಂತೆ ಮತ್ತು ಅನುದಾನ ಬಿಡುಗಡೆಗೆ ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸ್ಥಳದಲ್ಲೇ ಸೂಚನೆ ನೀಡಿದರು.