ಬೆಳೆ ಪರಿಹಾರಕ್ಕೆ ಫ್ರೂಟ್ಸ್ ದತ್ತಾಂಶ ಪರಿಗಣಿಸಿ
ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಇಂದಿಲ್ಲಿ ಭೇಟಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕರ್ನಾಟಕಕ್ಕೆ ಬರ ಪರಿಹಾರ ಬಿಡುಗಡೆ ಮಾಡುವಲ್ಲಿ ಪ್ರಕೃತಿ ವಿಕೋಪ ಕುರಿತ ಉನ್ನತ ಮಟ್ಟದ ಸಮಿತಿ ಸಭೆಯನ್ನು ಕೂಡಲೇ ಕರೆದು, ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.
ಆಸ್ತಿ ವಿಭಜನೆಯಿಂದ ಸಣ್ಣ-ಅತಿ ಸಣ್ಣ ರೈತರ ಸಂಖ್ಯೆ ಹೆಚ್ಚಿದೆ
ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ತಲೆದೋರಿದ್ದು, ರೈತರು, ಅದರಲ್ಲೂ ಸಣ್ಣ ಮತ್ತು ಅತಿ ಸಣ್ಣ ಕೃಷಿಕರು ತೀವ್ರ ಸಂಕಷ್ಟದಲ್ಲಿದ್ದಾರೆ. ಆಸ್ತಿ ವಿಭಜನೆ ಮತ್ತಿತರ ಕಾರಣಗಳಿಂದ ಸಣ್ಣ ಮತ್ತು ಅತಿ ಸಣ್ಣ ರೈತರ ಸಂಖ್ಯೆ 83 ಲಕ್ಷಕ್ಕೂ ಹೆಚ್ಚಿದೆ. 236 ತಾಲ್ಲೂಕುಗಳ ಪೈಕಿ 223 ತಾಲ್ಲೂಕುಗಳು ಬರ ಪೀಡಿತವಾಗಿವೆ.
ಸುಮಾರು 48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿದೆ. ಕೂಡಲೇ ಉನ್ನತ ಮಟ್ಟದ ಸಮಿತಿ ಸಭೆ ನಡೆಸಿ, 18,177.44 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.
ಪಿಎಂ-ಕಿಸಾನ್ ಯೋಜನೆಯಡಿ ಬೆಳೆ ಪರಿಹಾರ ವಿತರಣೆಗೆ ಫ್ರೂಟ್ಸ್‌ನಲ್ಲಿನ ದತ್ತಾಂಶ ಪರಿಗಣಿಸುವಂತೆ ಮುಖ್ಯಮಂತ್ರಿ ಮನವಿ ಮಾಡಿದ್ದಾರೆ.
ಪೂರಕ ಪರಿಹಾರಕ್ಕೆ ಪ್ರಸ್ತಾವನೆ
ತುರ್ತು ಪರಿಹಾರದ ಮೊತ್ತ 12,577.86 ಕೋಟಿ ರೂ. ಆಗಿದ್ದು, ನವೆಂಬರ್ 4 ರಂದು ಹೆಚ್ಚುವರಿಯಾಗಿ 7 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪೂರಕ ಮನವಿಯೊಂದಿಗೆ ಕೇಂದ್ರದಿಂದ 18,177.44 ಕೋಟಿ ರೂ. ಪರಿಹಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದಿದ್ದಾರೆ.
ಈ ಸಂದರ್ಭದಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಉಪಸ್ಥಿತರಿದ್ದರು.