ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಜಮೆ ಭರವಸೆ
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ’ಯುವನಿಧಿ’ ಯೋಜನೆಯ ಫಲಾನುಭವಿಗಳ ನೋಂದಣಿ ಪ್ರಕ್ರಿಯೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಚಾಲನೆ ನೀಡಿದರು.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿ ಮಾತನಾಡಿದ ಅವರು, ಯುವನಿಧಿ ಜತೆಗೆ ಉಚಿತ ತರಬೇತಿ, ಅರ್ಜಿ ಶುಲ್ಕವೂ ಉಚಿತ, ಸ್ವಾಮಿ ವಿವೇಕಾನಂದರ ಜಯಂತಿಯಂದು ಲಕ್ಷಾಂತರ ಯುವಜನರ ಸಮ್ಮುಖದಲ್ಲಿ ಯುವನಿಧಿ ಯೋಜನೆಯ ಹಣವನ್ನು ನೇರವಾಗಿ ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುವುದು ಎಂದರು.
ಖಾಲಿ ಉದ್ಯೋಗಗಳನ್ನೂ ಭರ್ತಿ ಮಾಡಲಾಗುವುದು
ರಾಜ್ಯದಲ್ಲಿ ಖಾಲಿ ಇರುವ ಉದ್ಯೋಗಗಳನ್ನೂ ಭರ್ತಿ ಮಾಡಲಾಗುವುದು ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ತಿಳಿಸಿದರು.
ಸರ್ಕಾರದ ಐದೂ ಗ್ಯಾರಂಟಿ ಯೋಜನೆಗಳು ಜಾರಿಯಾದ ನಂತರವೂ ರಾಜ್ಯದ ಆರ್ಥಿಕ ಸ್ಥಿತಿ ಸದೃಢವಾಗಿರಲಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ ಎಂದರು.
ಪ್ರಧಾನಿ ಮಾತು ಸುಳ್ಳಾಗಿದೆ
ಗ್ಯಾರಂಟಿ ಯೋಜನೆಗಳನ್ನು ಕೊಟ್ಟರೆ ರಾಜ್ಯ ದಿವಾಳಿ ಆಗುತ್ತದೆ ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದ್ದರು, ಅವರ ಮಾತು ಸುಳ್ಳಾಗಿದೆ.
ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡುವುದಾಗಿ ಪ್ರಧಾನಿ ಅವರು ಹೇಳಿದ್ದರು, ಕಳೆದ 10 ವರ್ಷಗಳಲ್ಲಿ 20 ಕೋಟಿ ಉದ್ಯೋಗ ಸೃಷ್ಟಿಯಾಗಿದೆಯೇ ಎಂದು ಪ್ರಶ್ನಿಸಿದರು.