ಶಕ್ತಿ ಯೋಜನೆಯಡಿ 120 ಕೋಟಿ ಮಹಿಳೆಯರ ಉಚಿತ ಪ್ರಯಾಣ
ಬೆಂಗಳೂರು: ಬರುವ ಏಪ್ರಿಲ್ ವೇಳೆಗೆ 1400 ಹೊಸ ಎಲೆಕ್ಟ್ರಿಕ್ ಬಸ್‌ಗಳು ಬೆಂಗಳೂರು ಮಹಾನಗರ ನಗರ ಸಾರಿಗೆ (ಬಿಎಂಟಿಸಿ)ಗೆ ಸೇರ್ಪಡೆ ಆಗಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ತಿಳಿಸಿದ್ದಾರೆ.
ಬಿಎಂಟಿಸಿಗೆ ಅತ್ಯಾಧುನಿಕ ಸೌಲಭ್ಯ ಒಳಗೊಂಡ 100 ವಿದ್ಯುತ್ ಚಾಲಿತ ಬಸ್‌ಗಳನ್ನು ಸೇರ್ಪಡೆಗೊಳಿಸಿ ಮಾತನಾಡಿದ ಅವರು, ಶಕ್ತಿ ಯೋಜನೆಯಡಿ ಇದುವರೆಗೆ ರಾಜ್ಯ ಸಾರಿಗೆ ಸಂಸ್ಥೆಗಳ ಬಸ್‌ಗಳಲ್ಲಿ 120 ಕೋಟಿ ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದಾರೆ, ಬಿಎಂಟಿಸಿ ಬಸ್‌ಗಳಲ್ಲಿ ನಿತ್ಯ 40 ಲಕ್ಷ ಜನ ಪ್ರಯಾಣಿಸುತ್ತಿದ್ದಾರೆ ಎಂದರು.
ಎಲ್ಲ ಜಾತಿ, ಧರ್ಮ, ಅಂತಸ್ತಿನ ಮಹಿಳೆಯರಿಗೆ ಯೋಜನೆ ಲಾಭ
ಯೋಜನೆಯಡಿ ಎಲ್ಲ ಜಾತಿ, ಧರ್ಮದ, ಅಂತಸ್ತಿನ ಮಹಿಳೆಯರು ಉಚಿತ ಪ್ರಯಾಣ ಮಾಡುತ್ತಿದ್ದಾರೆ.
ಕಾರ್ಮಿಕರು, ರೈತ ಹಾಗೂ ದುಡಿಯುವ ವರ್ಗದ ಮಹಿಳೆಯರಿಗೆ ಶಕ್ತಿ ಯೋಜನೆಯಿಂದ ಸಾಕಷ್ಟು ಹಣ ಉಳಿತಾಯವಾಗಿದೆ. ಆ ಹಣವನ್ನು ತಮ್ಮ ಕುಟುಂಬದ ಇತರೆ ಅಗತ್ಯಗಳಿಗೆ ಬಳಸುತ್ತಿದ್ದಾರೆ. ಇದರಿಂದ ಲಕ್ಷಾಂತರ ಕುಟುಂಬಗಳ ಆರ್ಥಿಕ ಶಕ್ತಿಯೂ ಹೆಚ್ಚುತ್ತಿದೆ ಎಂದರು.
4.30 ಕೋಟಿ ಮಂದಿಗೆ ಗ್ಯಾರಂಟಿ ಯೋಜನೆಗಳ ಪ್ರಯೋಜನ
ರಾಜ್ಯದ 4 ಕೋಟಿ 30 ಲಕ್ಷ ಮಂದಿ ನೇರವಾಗಿ ಸರ್ಕಾರದ ಗ್ಯಾರಂಟಿ ಯೋಜನೆಗಳ ಪ್ರಯೋಜನ ಪಡೆಯುತ್ತಿದ್ದಾರೆ. ಬಡವರು ಮತ್ತು ದುಡಿಯುವ ವರ್ಗಗಳನ್ನು ಆರ್ಥಿಕ ಪ್ರಗತಿಯ ಮುಖ್ಯವಾಹಿನಿಗೆ ತರಲಾಗುತ್ತಿದೆ ಎಂದರು.