ಗೌರವಧನ 8,000ಕ್ಕೆ ಹೆಚ್ಚಳ
ಬೆಂಗಳೂರು: ಅತಿಥಿ ಉಪನ್ಯಾಸಕರಿಗೆ ಸೇವಾನುಭವ ಆಧಾರದ ಮೇಲೆ ಗೌರವ ಧನವನ್ನು 5 ರಿಂದ 8,000 ರೂ.ಗೆ ಹೆಚ್ಚಳ ಮಾಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಘೋಷಿಸಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಉನ್ನತ ಶಿಕ್ಷಣ ಸಚಿವರೂ ಹಾಗೂ ಅತಿಥಿ ಉಪನ್ಯಾಸಕರ ನಿಯೋಗದ ಜೊತೆ ಚರ್ಚೆ ಮಾಡಿದ ನಂತರ ಸರ್ಕಾರದ ನಿರ್ಧಾರವನ್ನು ಪ್ರಕಟಿಸಿದರು.
ಸಭೆಯ ನಂತರ ಸುದ್ದಿಗಾರರಿಗೆ ವಿಷಯ ತಿಳಿಸಿದ ಮುಖ್ಯಮಂತ್ರಿ ಅವರು, ಅತಿಥಿ ಉಪನ್ಯಾಸಕರ ಬಗ್ಗೆ ಸರ್ಕಾರ ಮಾನವೀಯ ಕಾಳಜಿ ಹೊಂದಿದೆ, ಸೇವಾ ಭದ್ರತೆ ನೀಡಲು ಕಾನೂನು ತೊಡಕು ಇರುವುದರಿಂದ ಸಾಧ್ಯವಾಗುವುದಿಲ್ಲ ಎಂದರು.
ಸರ್ಕಾರ ವೇತನ ಹೆಚ್ಚಳಕ್ಕೆ ಮುಂದಾಗಿದೆ
ವಿರೋಧ ಪಕ್ಷದ ನಾಯಕನಾಗಿದ್ದಾಗಲೂ ಅತಿಥಿ ಉಪನ್ಯಾಸಕರ ಪರವಾಗಿ ತಾವು ದನಿ ಎತ್ತಿ ವೇತನ ಹೆಚ್ಚಳಕ್ಕೆ ಒತ್ತಾಯಿಸಿದ್ದನ್ನು ಸ್ಮರಿಸಿಕೊಂಡ ಮುಖ್ಯಮಂತ್ರಿಗಳು, ಇದೀಗ ಎರಡೇ ವರ್ಷದೊಳಗೆ ನಮ್ಮ ಸರ್ಕಾರ ಮತ್ತೆ ನಿಮ್ಮ ವೇತನ ಹೆಚ್ಚಳಕ್ಕೆ ಮುಂದಾಗಿದೆ, ಸರ್ಕಾರ ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಅತ್ಯಂತ ಸಹಾನುಭೂತಿಯಿಂದ ಪರಿಗಣಿಸಿದೆ.
ಐದು ವರ್ಷಕ್ಕಿಂತ ಕಡಿಮೆ ಸೇವಾನುಭವ ಹೊಂದಿದವರಿಗೆ 5 ಸಾವಿರ ರೂ., 5 ರಿಂದ 10 ವರ್ಷದ ಸೇವಾನುಭವ ಹೊಂದಿದವರಿಗೆ 6 ಸಾವಿರ ರೂ., 10 ರಿಂದ 15 ವರ್ಷದ ಸೇವಾನುಭವ ಹೊಂದಿದವರಿಗೆ 7 ಸಾವಿರ ರೂ. ಹಾಗೂ 15 ವರ್ಷಕ್ಕಿಂತ ಹೆಚ್ಚಿನ ಸೇವಾನುಭವ ಹೊಂದಿದವರಿಗೆ 8 ಸಾವಿರ ರೂ.ಗಳಷ್ಟು ಗೌರವಧನ ಹೆಚ್ಚಳ ಮಾಡಲು ಸರ್ಕಾರ ಸಿದ್ಧವಿದೆ.
5 ಲಕ್ಷ ರೂ. ಆರೋಗ್ಯ ವಿಮಾ ಸೌಲಭ್ಯ
ಇದರೊಂದಿಗೆ ಅತಿಥಿ ಉಪನ್ಯಾಸಕರ ಆರೋಗ್ಯದ ದೃಷ್ಟಿಯಿಂದ ವಾರ್ಷಿಕ 5 ಲಕ್ಷ ರೂ.ಗಳ ಆರೋಗ್ಯ ವಿಮಾ ಸೌಲಭ್ಯ ಅನುಷ್ಠಾನ, ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ, 60 ವರ್ಷ ಮೀರಿದ ನಂತರದಲ್ಲಿ ಭದ್ರತೆ ರೂಪದಲ್ಲಿ ಗರಿಷ್ಠ 5 ಲಕ್ಷ ರೂ. ಇಡುಗಂಟು ನೀಡುವುದು, ವಾರಕ್ಕೆ 15 ಗಂಟೆಗೂ ಹೆಚ್ಚಿನ ಕಾರ್ಯಭಾರ ಹೊಂದಿರುವ ಅತಿಥಿ ಉಪನ್ಯಾಸಕರಿಗೆ ಮಾಸಿಕ ಒಂದು ದಿನ ವೇತನ ಸಹಿತ ರಜೆ ನೀಡುವುದು ಹಾಗೂ 3 ತಿಂಗಳ ವೇತನ ಸಹಿತ ಮಾತೃತ್ವ ರಜೆ ನೀಡಲು ಮುಖ್ಯಮಂತ್ರಿಗಳು ಒಪ್ಪಿಗೆ ಸೂಚಿಸಿದರು.
ಇದರೊಂದಿಗೆ ನೇಮಕಾತಿಯಲ್ಲಿ ಸೇವಾನುಭವ ಆಧರಿಸಿ, ವೇಟೇಜ್ ನೀಡುವುದು, ಅತಿಥಿ ಉಪನ್ಯಾಸಕರು ಕಾರ್ಯನಿರ್ವಹಿಸುತ್ತಿದ್ದ ಸ್ಥಳದಲ್ಲಿಯೇ ಕಾರ್ಯಭಾರವಿದ್ದಲ್ಲಿ, ನಂತರದ ವರ್ಷವೂ ಅಲ್ಲಿಯೇ ಅವರ ಸೇವೆಯನ್ನು ಮುಂದುವರೆಸುವುದು ಸೇರಿದಂತೆ ಕೌನ್ಸೆಲಿಂಗ್ ಪ್ರಕ್ರಿಯೆ ಸರಳೀಕರಣಗೊಳಿಸಲು ಸಹ ಸಮ್ಮತಿಸಿ, ಕೂಡಲೇ ಪ್ರತಿಭಟನೆಯನ್ನು ಹಿಂದಕ್ಕೆ ಪಡೆದು ಕರ್ತವ್ಯಕ್ಕೆ ಹಾಜರಾಗುವಂತೆ ಪ್ರತಿಭಟನಾನಿರತ ಅತಿಥಿ ಉಪನ್ಯಾಸಕರಿಗೆ ಮುಖ್ಯಮಂತ್ರಿ ಮನವಿ ಮಾಡಿದರು.