ಸಾರ್ವಜನಿಕರಿಗೆ ಅಡ್ಡಿ ಮಾಡಿದ ಆರೋಪ
ಬೆಂಗಳೂರು: ಪ್ರತಿಭಟನೆ ಸಂದರ್ಭದಲ್ಲಿ ಸಾರ್ವಜನಿಕರಿಗೆ ತೊಂದರೆ ನೀಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೈಕೋರ್ಟ್ 10 ಸಾವಿರ ರೂ. ದಂಡ ವಿಧಿಸಿದೆ.
ಅಷ್ಟೇ ಅಲ್ಲ, ಅವರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರದ್ದು ಮಾಡಲು ನ್ಯಾಯಾಲಯ ನಿರಾಕರಿಸಿದೆ.
ಕೆ.ಎಸ್.ಈಶ್ವರಪ್ಪ ಅವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ 2022 ರಲ್ಲಿ ಪ್ರತಿಭಟನೆ ನಡೆಸಿ, ರಸ್ತೆ ತಡೆ ಮಾಡಿ ಸಾರ್ವಜನಿಕರಿಗೆ ಅಡ್ಡಿಪಡಿಸಿದ ಆರೋಪ, ಇವರೂ ಸೇರಿದಂತೆ ಕೆಲವು ಕಾಂಗ್ರೆಸ್ ಮುಖಂಡರ ಮೇಲಿತ್ತು.
ತಮ್ಮ ವಿರುದ್ಧದ ಪ್ರಕರಣ ರದ್ದು ಕೋರಿ ಸಿದ್ದರಾಮಯ್ಯ, ಸಚಿವರಾದ ಎಂ.ಬಿ. ಪಾಟೀಲ್, ರಾಮಲಿಂಗಾ ರೆಡ್ಡಿ, ರಾಜ್ಯ ಉಸ್ತುವಾರಿ ಹೊಣೆ ಹೊತ್ತ ಎಐಸಿಸಿ ಪ್ರಧಾನಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ನ್ಯಾಯಪೀಠ ಈ ತೀರ್ಪು ನೀಡಿದೆ.
ವಿಶೇಷ ಕೋರ್ಟ್‌ಗೆ ಹಾಜರಾಗಲು ಸೂಚನೆ
ದಂಡ ವಿಧಿಸಿದ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸುವವರೆಗೆ ಆದೇಶಕ್ಕೆ ತಡೆ ನೀಡಬೇಕೆಂದು ಸಿದ್ದರಾಮಯ್ಯ ಪರ ವಕೀಲರು ಮಾಡಿದ ಮನವಿಯನ್ನೂ ಪೀಠ ತಿರಸ್ಕರಿಸಿದೆ. ಅಷ್ಟೇ ಅಲ್ಲ, ಮಾರ್ಚ್ 6ರಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ಗೆ ಹಾಜರಾಗಲು ಸೂಚನೆ ನೀಡಿದೆ.
ಜನಪ್ರತಿನಿಧಿಗಳ ಕೋರ್ಟ್ ಮುಂದೆ ಮಾರ್ಚ್ 7 ರಂದು ರಾಮಲಿಂಗಾ ರೆಡ್ಡಿ, 11 ರಂದು ರಣದೀಪ್ ಸಿಂಗ್ ಸುರ್ಜೇವಾಲ, 15 ಕ್ಕೆ ಎಂ.ಬಿ. ಪಾಟೀಲ್ ಹಾಜರಾಗಬೇಕೆಂದು ನ್ಯಾಯಪೀಠ ಆದೇಶಿಸಿದೆ.
ಒಂದೇ ದಿನ ಎಲ್ಲರಿಗೂ ಅವಕಾಶ ಮಾಡಿಕೊಟ್ಟರೆ ನ್ಯಾಯಾಲಯದ ಸಭಾಂಗಣದಲ್ಲಿ ಗದ್ದಲ ಉಂಟಾಗುತ್ತದೆ ಎಂದು ಬೇರೆ ಬೇರೆ ದಿನಗಳನ್ನು ನಿಗದಿ ಮಾಡಲಾಗಿದೆ ಎಂದಿದೆ.
ಮುಖ್ಯಮಂತ್ರಿ ಸೇರಿ ನಾಲ್ವರಿಗೂ ತಲಾ 10,000 ರೂ. ದಂಡ
ಪ್ರತಿಭಟನಾನಿರತರ ವಿರುದ್ಧ ದೂರು ದಾಖಲಿಸಿದ ಪೊಲೀಸ್ ಅಧಿಕಾರಿಯನ್ನು ಪ್ರತಿವಾದಿ ಆಗಿಸಿದ ಕಾರಣಕ್ಕೆ ಮುಖ್ಯಮಂತ್ರಿ ಸೇರಿ ನಾಲ್ವರಿಗೂ ತಲಾ 10,000 ರೂ. ದಂಡ ವಿಧಿಸಿದೆ. ದಂಡದ ಹಣವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಜಮೆ ಮಾಡಿ ಎಂದು ತಿಳಿಸಿದೆ.
ಜನ ಪ್ರತಿನಿಧಿಗಳಿಗೆ ಕಿವಿಮಾತು ಹೇಳಿರುವ ಪೀಠ, ಸಾರ್ವಜನಿಕ ಜೀವನದಲ್ಲಿ ಇರುವವರೇ ಕಾನೂನನ್ನು ಪಾಲಿಸದಿದ್ದರೆ, ಪ್ರಜೆಗಳು ಪಾಲಿಸುತ್ತಾರೆಯೇ ಎಂದು ಪ್ರಶ್ನಿಸಿದೆ.
ರಸ್ತೆಗಳಲ್ಲಿ ಪ್ರತಿಭಟನೆ ನಡೆಸಿದರೆ ಜನರಿಗೆ ತೊಂದರೆ, ಜನ ಪ್ರತಿನಿಧಿಯಾದ ಕಾರಣಕ್ಕೆ ರಸ್ತೆ ಅಡ್ಡಗಟ್ಟುವುದು ಸರಿಯಲ್ಲ, ಮೊದಲು ನೀವು ಕಾನೂನು ಪಾಲಿಸಿ ಎಂದು ಪೀಠ ಸೂಚಿಸಿದೆ.
1 comment
[…] ರಾಜಕೀಯ […]