ಹೈಕೋರ್ಟ್ ದ್ವಿಸದಸ್ಯ ಪೀಠ ಅನುಮತಿ
ಬೆಂಗಳೂರು:ರಾಜ್ಯ ಪಠ್ಯಕ್ರಮ ಬೋಧಿಸುವ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳಲ್ಲಿ 5, 8, 9 ಮತ್ತು 11 ನೇ ತರಗತಿಗಳಿಗೆ ಮೌಲ್ಯಾಂಕನ ಪರೀಕ್ಷೆಗಳನ್ನು ನಡೆಸುವಂತೆ ಕರ್ನಾಟಕ ಹೈಕೋರ್ಟ್ ಇಂದು ಅನುಮತಿ ನೀಡಿದೆ.
ನ್ಯಾಯಮೂರ್ತಿ ಸೋಮಶೇಖರ್ ಹಾಗೂ ನ್ಯಾಯಮೂರ್ತಿ ರಾಜೇಶ್ ರೈ ಅವರನ್ನು ಒಳಗೊಂಡ ದ್ವಿಸದಸ್ಯ ವಿಭಾಗೀಯ ಪೀಠ ಈ ತೀರ್ಪು ನೀಡಿದ್ದು, ರಾಜ್ಯ ಸರ್ಕಾರವು ಬೋರ್ಡ್ ಪರೀಕ್ಷೆಗಳನ್ನು ನಡೆಸಬಹುದು ಹಾಗೂ ಪರೀಕ್ಷೆ ಪ್ರಕ್ರಿಯೆ ಸ್ಥಗಿತಗೊಂಡ ಹಂತದಿಂದಲೇ ಮುಂದುವರೆಯಬೇಕು, ಉಳಿದ ವಿಷಯಗಳ ಪರೀಕ್ಷೆ ನಡೆಸಲು ಸೂಕ್ತ ಮತ್ತು ತುರ್ತು ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರಕ್ಕೆ ಸೂಚಿಸಿದೆ.
ಸಮಾಲೋಚಿಸಿ ತೀರ್ಮಾನ
ಮುಂದಿನ ಶೈಕ್ಷಣಿಕ ವರ್ಷದಲ್ಲಿ ಈ ಪರೀಕ್ಷೆಗಳನ್ನು ನಡೆಸುವ ಕುರಿತು ಸಂಬಂಧಪಟ್ಟವರೊಂದಿಗೆ ಸಮಾಲೋಚಿಸಿ ತೀರ್ಮಾನ ಕೈಗೊಳ್ಳಬೇಕು ಎಂದು ನ್ಯಾಯಪೀಠ ಸೂಚಿಸಿದೆ.
ಬೋರ್ಡ್ ಪರೀಕ್ಷೆಗಳಿಗೆ ತಡೆಯಾಜ್ಞೆ ನೀಡಬೇಕೆಂಬ ಖಾಸಗಿ ಶಾಲಾ ಒಕ್ಕೂಟ (ರೂಪ್ಸಾ) ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ.
ಸೋಮವಾರದಿಂದಲೇ ಪರೀಕ್ಷೆ
ಈ ಮಧ್ಯೆ ರಾಜ್ಯ ಸರ್ಕಾರ ಕೋರ್ಟ್ಗೆ ಮಾಹಿತಿ ನೀಡಿ, 5, 8 ಮತ್ತು 9 ನೇ ತರಗತಿಯ ಉಳಿದ ಪರೀಕ್ಷೆಗಳನ್ನು ಸೋಮವಾರದಿಂದಲೇ ನಡೆಸಲಿದ್ದು, ಐದನೇ ತರಗತಿಯ ನಾಲ್ಕು ವಿಷಯಗಳ ಪರೀಕ್ಷೆಗಳು ಈಗಾಗಲೇ ಮುಗಿದಿವೆ, 8 ಹಾಗೂ 9 ತರಗತಿಗಳ ತಲಾ ಎರಡು ವಿಷಯಗಳ ಪರೀಕ್ಷೆಯೂ ಪೂರ್ಣಗೊಂಡಿವೆ, 11 ನೇ ತರಗತಿಯ ಎಲ್ಲಾ ವಿಷಯಗಳ ಪರೀಕ್ಷೆ ಮುಕ್ತಾಯವಾಗಿದ್ದು ಫಲಿತಾಂಶ ಹೊರ ಬರಬೇಕಿದೆ ಎಂದಿದೆ.
ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಸರ್ಕಾರ, 5, 8, 9 ಮತ್ತು 11 ನೇ ತರಗತಿಗೆ ಈ ಬಾರಿ ಬೋರ್ಡ್ ಪರೀಕ್ಷೆ ನಡೆಸಲು 2023 ರ ಡಿಸೆಂಬರ್ನಲ್ಲಿ ಸುತ್ತೋಲೆ ಹೊರಡಿಸಿತ್ತು.
ರಾಜ್ಯ ಸರ್ಕಾರದ ಸುತ್ತೋಲೆ ಪ್ರಶ್ನಿಸಿ ಕರ್ನಾಟಕ ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ಸಂಘ (ರುಪ್ಸಾ) ಹೈಕೋರ್ಟ್ ಮೆಟ್ಟಿಲೇರಿತ್ತು.
ರುಪ್ಸಾ ವಾದ ಆಲಿಸಿದ ಹೈಕೋರ್ಟ್ನ ಏಕಸದಸ್ಯ ಪೀಠ, ಸರ್ಕಾರದ ಸುತ್ತೋಲೆಗಳನ್ನು ರದ್ದುಗೊಳಿಸಿ, ಪಬ್ಲಿಕ್ ಪರೀಕ್ಷೆ ನಡೆಸದಂತೆ 2024ರ ಮಾರ್ಚ್ 5 ರಂದು ಸೂಚನೆ ನೀಡಿತ್ತು.
ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಮತ್ತು ಶಿಕ್ಷಣ ಇಲಾಖೆ ಹೈಕೋರ್ಟ್ನ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತು. ಮೇಲ್ಮನವಿ ವಿಚಾರಣೆ ನಡೆಸಿದ ವಿಭಾಗೀಯ ಪೀಠವು ಏಕಸದಸ್ಯ ಪೀಠ ವಿಧಿಸಿದ್ದ ತಡೆಯಾಜ್ಞೆ ತೆರವುಗೊಳಿಸಿತು.
ಈ ಆದೇಶ ಪ್ರಶ್ನಿಸಿ, ಮಾರ್ಚ್ 13 ರಂದು ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಲಾಗಿತ್ತು, ಸುಪ್ರೀಂ ಕೋರ್ಟ್ನ ಆದೇಶದಂತೆ ಪುನಃ ಹೈಕೋರ್ಟ್ನಲ್ಲಿ ವಿಚಾರಣೆ ನಡೆದು ಇಂದು ತೀರ್ಪು ಪ್ರಕಟಿಸಲಾಯಿತು.
1 comment
[…] ರಾಜ್ಯ […]