ಕೋಲಾರ:ಇಪ್ಪತ್ತು ಲೋಕಸಭಾ ಕ್ಷೇತ್ರಗಳನ್ನು ಗೆಲ್ಲುವ ಗುರಿಯೊಂದಿಗೆ ಕಾಂಗ್ರೆಸ್ ಚುನಾವಣಾ ಪ್ರಚಾರಕ್ಕೆ ಭರ್ಜರಿ ಚಾಲನೆ ನೀಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮೂಡಣ ಬಾಗಿಲು, ದೇವರ ಮೂಲೆಯೆಂದೇ ಪ್ರಸಿದ್ಧಿ ಪಡೆದಿರುವ ಕೋಲಾರದ ಮುಳುಬಾಗಿಲಿನ ಕುರುಡುಮಲೆ ಗಣೇಶನಿಗೆ ಪೂಜೆ ಸಲ್ಲಿಸುವ ಮೂಲಕ ಪ್ರಜಾಧ್ವನಿ-2 ಯಾತ್ರೆ ಮತ್ತು ಲೋಕಸಭಾ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದರು.
ಗಣೇಶನಿಗೆ ಪೂಜೆ ಸಲ್ಲಿಸುವುದಕ್ಕೂ ಮುನ್ನ ಸಿದ್ದರಾಮಯ್ಯ, ಸ್ಥಳೀಯ ದರ್ಗಾಕ್ಕೆ ತೆರಳಿ ಪುಷ್ಪಾರ್ಚನೆ ಮಾಡಿ ಪೂಜೆ ಸಲ್ಲಿಸಿದರು.
ಏಪ್ರಿಲ್ 26ರಂದು ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ನಡೆಯುತ್ತಿರುವ ಚುನಾವಣೆಗೆ ಇಂದಿನಿಂದಲೇ ಪ್ರಚಾರ ಆರಂಭಿಸಿದ್ದಾರೆ.
ಉಭಯ ನಾಯಕರ ಜಂಟಿ ಪ್ರಚಾರ
ಉಭಯ ನಾಯಕರು ಕೆಲವೆಡೆ ಜಂಟಿ ಪ್ರಚಾರ ಕೈಗೊಂಡರೆ, ಉಳಿದಂತೆ ಸಿದ್ದರಾಮಯ್ಯ ಹಾಗೂ ಶಿವಕುಮಾರ್ ಪ್ರತ್ಯೇಕವಾಗಿ ಸಭೆ ಮತ್ತು ರ‍್ಯಾಲಿಗಳಲ್ಲಿ ಪ್ರಚಾರ ಕೈಗೊಳ್ಳಲಿದ್ದಾರೆ.
ಈಗಾಗಲೇ ಕಾರ್ಯಕರ್ತರು ಮತ್ತು ಮುಖಂಡರ ಜೊತೆ ಒಂದು ಸುತ್ತಿನ ಸಭೆ ಮುಗಿಸಿದ್ದು, ಈಗ ರೋಡ್ ಶೋ ಮತ್ತು ಸಮಾವೇಶಗಳ ಮೂಲಕ ಮತದಾರರ ಓಲೈಕೆಗೆ ಮುಂದಾಗಿದ್ದಾರೆ.
ಪ್ರಚಾರ ಭಾಷಣಕ್ಕೆ ಚಾಲನೆ ನೀಡಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ನಾವು ಕೊಟ್ಟ ಮಾತಿನಂತೆ ನಡೆದುಕೊಂಡು, ನಿಮ್ಮ ಮತಕ್ಕೆ ಘನತೆ ತಂದಿದ್ದೇವೆ, ನಮ್ಮ ಐದು ಗ್ಯಾರಂಟಿಗಳಿಗೂ ಐದು ವರ್ಷ ವಾರೆಂಟಿ ಇದೆ ಎಂದು ಸಮರ್ಥಿಸಿಕೊಂಡರು.
ನಾಡಿನ ಕುಟುಂಬಗಳು ಸಂಕಷ್ಟಕ್ಕೆ
ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸಿಲಿಂಡರ್, ರಸಗೊಬ್ಬರ, ಅಡುಗೆ ಎಣ್ಣೆ, ಬೇಳೆ-ಕಾಳು, ತರಕಾರಿ ಸೇರಿದಂತೆ ಎಲ್ಲ ಅಗತ್ಯ ವಸ್ತುಗಳ ಬೆಲೆಯಲ್ಲಿ ಭಾರೀ ಏರಿಕೆ ಮಾಡಿದ್ದರಿಂದ ನಾಡಿನ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿದ್ದವು ಎಂದರು.
ಕೇಂದ್ರ ಸರ್ಕಾರದ ಇಂಧನ ದರ ಏರಿಕೆಯಿಂದಾಗಿ ಅಗತ್ಯ ವಸ್ತುಗಳ ಧಾರಣೆ ಹೆಚ್ಚಳದಿಂದ ಸಂಕಷ್ಟಕ್ಕೆ ಸಿಲುಕಿದ ಕುಟುಂಬಗಳಿಗೆ ಸ್ಪಂದಿಸಲು ಐದು ಗ್ಯಾರಂಟಿಗಳನ್ನು ಘೋಷಿಸಿ, ಜಾರಿ ಮಾಡಿದೆವು.
ಗ್ಯಾರಂಟಿಗಳ ಜಾರಿ ಸಾಧ್ಯವೇ ಇಲ್ಲ ಎನ್ನುವ ಸುಳ್ಳನ್ನು ಬಿಜೆಪಿ ಮೊದಲು ಹುಟ್ಟಿಸಿತು, ಗ್ಯಾರಂಟಿಗಳು ಜಾರಿಯಾದ ನಂತರ ಗ್ಯಾರಂಟಿಗಳು ನಿಂತು ಹೋಗುತ್ತವೆ ಎನ್ನುತ್ತಿದೆ.
ಸೋಲುವ ಭೀತಿಯಿಂದ ಬಿಜೆಪಿ ಸೃಷ್ಟಿಸುವ ಸುಳ್ಳುಗಳನ್ನು ನಂಬಬೇಡಿ, ಬಿಜೆಪಿ ಸುಳ್ಳಿನ ಕಾರ್ಖಾನೆ, ಲೋಕಸಭಾ ಚುನಾವಣೆಯಲ್ಲೂ ಕಾಂಗ್ರೆಸ್ ಗೆಲ್ಲಿಸಿ ನಿಮ್ಮ ಮತಕ್ಕೆ ಮೌಲ್ಯ ತಂದು ಕೊಡುವ ರೀತಿಯಲ್ಲಿ ಸರ್ಕಾರ ಕೆಲಸ ಮಾಡುತ್ತದೆ ಎಂದರು.
ಗ್ಯಾರಂಟಿ ಚೆಕ್‌ಗೆ ಸಹಿ
ಇದೇ ಸಂದರ್ಭದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಈಗ ನಡೆಯುತ್ತಿರುವುದು ಲೋಕಸಭೆ ಚುನಾವಣೆ, ನಿನ್ನೆ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಅವರು ಸಹಾ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 5 ನ್ಯಾಯ ಯೋಜನೆಗಳ ಮೂಲಕ 25 ಗ್ಯಾರಂಟಿ ಯೋಜನೆಗಳನ್ನು ಪ್ರಕಟಿಸಿ, ಗ್ಯಾರಂಟಿ ಚೆಕ್‌ಗೆ ಸಹಿ ಹಾಕಿದ್ದಾರೆ ಎಂದರು.
ಗೃಹಲಕ್ಷ್ಮಿ ಮಾದರಿಯಲ್ಲಿ ಮಹಾಲಕ್ಷ್ಮಿ ಯೋಜನೆ ಮೂಲಕ ವರ್ಷಕ್ಕೆ ಒಂದು ಲಕ್ಷ ಹಣವನ್ನು ಬಡ ಕುಟುಂಬದ ಮಹಿಳೆಯೊಬ್ಬರಿಗೆ ನೀಡಲಾಗುವುದು, ಯುವಜನರಿಗೆ ವಾರ್ಷಿಕ ಒಂದು ಲಕ್ಷ ರೂ. ಶಿಷ್ಯ ವೇತನ ನೀಡಲಾಗುವುದು, ರೈತರ ಸಾಲ ಮನ್ನಾ, ರೈತರ ಬೆಳೆಗೆ ಬೆಂಬಲ ಬೆಲೆ ನಿಗದಿ, ನರೇಗಾ ಕೂಲಿ 400 ರೂ.ಕ್ಕೆ ಹೆಚ್ಚಳ, 25 ಲಕ್ಷ ರೂ.ವರೆಗೆ ಆರೋಗ್ಯ ವಿಮೆ ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳಾಗಿವೆ.
ಹುಟ್ಟಿದ ಸೂರ್ಯ ಮುಳುಗುವಂತೆ, ಅರಳಿದ ಕಮಲ ಬಾಡುತ್ತಿದೆ, ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ, ದಾನ-ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚೆಂದ, ಕೈ ಅಧಿಕಾರಕ್ಕೆ ಬಂದಿದ್ದರಿಂದ ಗ್ಯಾರಂಟಿ ಯೋಜನೆಗಳು ಜಾರಿಯಾಗಿವೆ.
ಸಾಮಾಜಿಕ ನ್ಯಾಯ
ಐದು ಬೆರಳು ಸೇರಿ ಕೈ ಮುಷ್ಟಿಯಾಯಿತು, ಐದು ಗ್ಯಾರಂಟಿ ಸೇರಿ ಕೈ ಗಟ್ಟಿಯಾಯಿತು, ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಸಾಮಾಜಿಕ ನ್ಯಾಯ ನೀಡಲಿದೆ, ಎಲ್ಲಾ ವರ್ಗದವರಿಗೆ ಸಾಮಾಜಿಕ ಭದ್ರತೆ ದೊರೆಯಲಿದೆ.
ಸೋಲಿನ ಭೀತಿಯಿಂದ ಬಿಜೆಪಿಯ ಅರ್ಧದಷ್ಟು ಹಾಲಿ ಸಂಸದರಿಗೆ ಟಿಕೆಟ್ ನೀಡಿಲ್ಲ, ಬಿಜೆಪಿ ದೇಶದಲ್ಲಿ 200ಕ್ಕೂ ಹೆಚ್ಚು ಕ್ಷೇತ್ರ ಗೆಲ್ಲುವುದಿಲ್ಲ, ಈ ಬಾರಿ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ, ಎಲ್ಲರಿಗೂ ಅನುಕೂಲವಾಗಲಿದೆ.
ಕುರುಡುಮಲೆಯಲ್ಲಿ ವಿನಾಯಕನಿಗೆ ಪೂಜೆ ಮಾಡಿ ರಾಜ್ಯದ ಕಷ್ಟ ನಿವಾರಣೆ ಮಾಡಲು ಪ್ರಾರ್ಥಿಸಿ ಪ್ರಚಾರ ಆರಂಭಿಸಿದ್ದೇವೆ, ಕಳೆದ ಚುನಾವಣೆಯಲ್ಲಿ ನುಡಿದಂತೆ ನಡೆದಿದ್ದೇವೆ, ಈಗ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರು ದೇಶಕ್ಕೆ ಶಕ್ತಿ ತುಂಬಲು ಮುಂದಾಗಿದ್ದಾರೆ, ನೀವು ನಮ್ಮೆಲ್ಲರ ಕೈ ಬಲಪಡಿಸಬೇಕು ಎಂದು ಮನವಿ ಮಾಡಿದರು.