ಬೆಂಗಳೂರು:ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಏಪ್ರಿಲ್ 26ರಂದು ನಡೆಯುತ್ತಿರುವ ಚುನಾವಣೆಗೆ ಕಾಂಗ್ರೆಸ್ ಹಾಗೂ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳ ಎನ್‌ಡಿಎ ಮೈತ್ರಿಕೂಟದ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ.
ಮೈಸೂರು-ಕೊಡಗು, ಚಾಮರಾಜನಗರ, ಮಂಡ್ಯ, ಹಾಸನ, ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ಹಾಗೂ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರಗಳಿಗೆ ನಾಮಪತ್ರ ಹಿಂತೆಗೆದುಕೊಳ್ಳಲು ಕಡೆಯ ದಿನವಾದ ಇಂದು ಮೂರೂ ಪ್ರಮುಖ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ.
ಪ್ರಮುಖ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು
ಮೊದಲ ಹಂತದಲ್ಲಿ ಚುನಾವಣೆಯ ನಡೆಯಲಿರುವ ಕ್ಷೇತ್ರಗಳಲ್ಲಿ ಪ್ರಮುಖ ಮೂರು ರಾಜಕೀಯ ಪಕ್ಷಗಳ ಅಭ್ಯರ್ಥಿಗಳನ್ನು ಹೊರತುಪಡಿಸಿ ಉಳಿದ ಅಭ್ಯರ್ಥಿಗಳು ಪ್ರಬಲ ಪೈಪೋಟಿ ನೀಡುವ ಸ್ಥಿತಿಯಲ್ಲಿಲ್ಲ.
ಕಾಂಗ್ರೆಸ್ 14 ಕ್ಷೇತ್ರಗಳಲ್ಲೂ ತನ್ನ ಉಮೇದುವಾರರನ್ನು ನಿಲ್ಲಿಸಿದ್ದರೆ, ಎನ್‌ಡಿಎ ಮೈತ್ರಿಕೂಟದ ಬಿಜೆಪಿ 11 ಕ್ಷೇತ್ರಗಳಲ್ಲಿ ಸ್ಪರ್ಧಿಸಿ, ಮೂರು ಕ್ಷೇತ್ರಗಳನ್ನು ಮಿತ್ರ ಪಕ್ಷ ಜೆಡಿಎಸ್‌ಗೆ ಬಿಟ್ಟುಕೊಟ್ಟಿದೆ. ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಗಳ ವಿರುದ್ಧ ಕಾಂಗ್ರೆಸ್ ನೇರ ಹಣಾಹಣಿ ನಡೆಸಲಿದೆ.
ಬಿರುಸಿನ ಪ್ರಚಾರ
ಈಗಾಗಲೇ ಮೂರೂ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ.
ಇವರುಗಳಿಗೆ ಬೆನ್ನೆಲುಬಾಗಿ ಪಕ್ಷದ ಮುಖಂಡರು ತಮ್ಮ ಅಭ್ಯರ್ಥಿಗಳ ಪರ ರೋಡ್ ಶೋ ಮತ್ತು ಸಭೆಗಳನ್ನು ನಡೆಸಿ ಮತದಾರರನ್ನು ಓಲೈಸುವ ಕೆಲಸ ಮಾಡುತ್ತಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಷಾ ಮಾತ್ರ ಬೆಂಗಳೂರು ಗ್ರಾಮಾಂತರದಲ್ಲಿ ಸ್ಫರ್ಧಿಸಿರುವ ಅಭ್ಯರ್ಥಿ ಡಾ.ಮಂಜುನಾಥ್ ಪರ ಬೃಹತ್ ರೋಡ್ ಶೋ ನಡೆಸಿದ್ದನ್ನು ಹೊರತುಪಡಿಸಿದರೆ, ಉಳಿದ ಯಾವುದೇ ರಾಷ್ಟ್ರೀಯ ನಾಯಕರು ರಾಜ್ಯದಲ್ಲಿ ಇನ್ನೂ ಚುನಾವಣಾ ಪ್ರಚಾರ ಕೈಗೊಂಡಿಲ್ಲ.
ಮೈಸೂರು-ಕೊಡಗು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ರಾಜವಂಶದ ಯದುವೀರ್ ಕೃಷ್ಣದತ್ತ ಒಡೆಯರ್, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಬೆಂಗಳೂರು ಗ್ರಾಮಾಂತರದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಹೋದರ ಹಾಗೂ ಸಂಸದ ಡಿ.ಕೆ.ಸುರೇಶ್ ಅವರ ವಿರುದ್ಧ ಬಿಜೆಪಿಯಿಂದ ಡಾ.ಮಂಜುನಾಥ್ ಕಣಕ್ಕಿಳಿದಿರುವುದರಿಂದ ಇವುಗಳು ಮೊದಲ ಹಂತದ ಚುನಾವಣೆಯ ಪ್ರತಿಷ್ಠೆಯ ಕ್ಷೇತ್ರಗಳಾಗಿವೆ.
11 ಸಾಮಾನ್ಯ ಕ್ಷೇತ್ರಗಳು
ಚಾಮರಾಜನಗರ, ಕೋಲಾರ ಹಾಗೂ ಚಿತ್ರದುರ್ಗ ಮೀಸಲು ಕ್ಷೇತ್ರಗಳಾಗಿದ್ದು, ಉಳಿದ 11 ಸಾಮಾನ್ಯ ಕ್ಷೇತ್ರಗಳಾಗಿವೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅವರ ಸಂಪುಟದಲ್ಲಿರುವ ಪ್ರಭಾವೀ ಮಂತ್ರಿಗಳು ಪ್ರತಿನಿಧಿಸುವ ವಿಧಾನಸಭಾ ಕ್ಷೇತ್ರಗಳು ಈ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಗೆ ಒಳಪಟ್ಟಿವೆ.
ಸಿದ್ದರಾಮಯ್ಯ ಅವರಿಗೆ ತಮ್ಮ ವರುಣ ಕ್ಷೇತ್ರ ಚಾಮರಾಜನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಬಂದರೂ ಅವರು ಮೈಸೂರು-ಕೊಡಗು ಕ್ಷೇತ್ರವನ್ನೂ ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ.
ಬಿರುಸಿನ ರೋಡ್ ಶೋ
ಈಗಾಗಲೇ ಅವರು ಈ ಕ್ಷೇತ್ರಗಳಲ್ಲಿ ಬಿರುಸಿನ ಪ್ರಚಾರ ನಡೆಸಿ ಬಿಜೆಪಿ ಮುಷ್ಠಿಯಲ್ಲಿರುವ ಬೆಂಗಳೂರು ಕ್ಷೇತ್ರಗಳನ್ನೂ ತಮ್ಮದಾಗಿಸಿಕೊಳ್ಳಲು ಕಳೆದ ಎರಡು ದಿನಗಳಿಂದ ಬಿರುಸಿನ ರೋಡ್ ಶೋ ನಡೆಸಿದ್ದಾರೆ.
ಮತದಾನಕ್ಕೆ ಇನ್ನು ಕೇವಲ 20 ದಿನ, ಆದರೆ ಪ್ರಚಾರಕ್ಕೆ ಉಳಿದಿರುವುದೇ 18 ದಿನಗಳು. ಇಷ್ಟರಲ್ಲಿ ಮತದಾರರನ್ನು ಯಾರು ಓಲೈಸಿಕೊಳ್ಳುವರೋ ಅವರು ಜಯದ ಮಾಲೆ ಧರಿಸುತ್ತಾರೆ.
ರಾಜ್ಯದ ಉಳಿದ 14 ಕ್ಷೇತ್ರಗಳಿಗೆ ಮೇ 7ರಂದು ಚುನಾವಣೆ ನಡೆಯಲಿದ್ದು, ಅತ್ತ ಕಡೆಗೆ ಪಕ್ಷದ ಮುಖಂಡರುಗಳು ಇನ್ನೂ ಗಮನ ಹರಿಸಿಲ್ಲ, ಎಲ್ಲರೂ ಮೊದಲ ಹಂತದ ಕಡೆಯೇ ಹೆಚ್ಚು ಗಮನ ಕೇಂದ್ರೀಕರಿಸಿದ್ದಾರೆ.