ಬೆಂಗಳೂರು:ಹಳೇ ಮೈಸೂರು ಭಾಗದಲ್ಲಿ ಹೆಚ್ಚು ಲೋಕಸಭಾ ಸ್ಥಾನಗಳನ್ನು ಗೆಲ್ಲಬೇಕೆಂದು ಪಣತೊಟ್ಟಿರುವ ಬಿಜೆಪಿ ತಮ್ಮ ಎನ್ಡಿಎ ಅಭ್ಯರ್ಥಿಗಳ ಪರ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ರಾಷ್ಟ್ರೀಯ ನಾಯಕರು ರಾಜ್ಯದಲ್ಲಿ ಬಿರುಸಿನ ಪ್ರವಾಸ ಕೈಗೊಂಡು ಸರಣಿ ರ್ಯಾಲಿ ಮತ್ತು ಬೃಹತ್ ಸಮಾವೇಶಗಳನ್ನು ನಡೆಸುತ್ತಿದ್ದಾರೆ.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಈಗಾಗಲೇ ಎರಡು ಬಾರಿ ರಾಜ್ಯ ಪ್ರವಾಸ ಕೈಗೊಂಡಿರುವ ಪ್ರಧಾನಿ ಅವರು, ಇದೇ 20 ರಂದು ಬೆಂಗಳೂರು ಮತ್ತು ಚಿಕ್ಕಬಳ್ಳಾಪುರದಲ್ಲಿ ಏಳು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪರ ಮತ ಯಾಚನೆ ಮಾಡಲಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಪಕ್ಷದ ವಕ್ತಾರ ಹಾಗೂ ಮಾಜಿ ಸಚಿವ ಸುನೀಲ್ ಕುಮಾರ್, ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಭೆ ಏರ್ಪಡಿಸಲಾಗುತ್ತದೆ. ಬೆಂಗಳೂರು ದಕ್ಷಿಣ, ಮಧ್ಯ, ಉತ್ತರ, ಗ್ರಾಮಾಂತರ ಕ್ಷೇತ್ರಗಳ ಅಭ್ಯರ್ಥಿಗಳ ಪರ ಮತ ಯಾಚಿಸಲಿದ್ದಾರೆ ಎಂದರು.
ಚಿಕ್ಕಬಳ್ಳಾಪುರದಲ್ಲಿ ರೋಡ್ ಶೋ
ಇದಕ್ಕೂ ಮುನ್ನ ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಅಭ್ಯರ್ಥಿಗಳ ಪರ ಚಿಕ್ಕಬಳ್ಳಾಪುರದಲ್ಲಿ ಬೃಹತ್ ಸಮಾವೇಶ ಹಾಗೂ ರೋಡ್ ಶೋ ನಡೆಸಲಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಷಾ ಇದೇ 23 ಮತ್ತು24ರಂದು ಕರ್ನಾಟಕದಲ್ಲಿ ವಿವಿಧ ಚುನಾವಣಾ ಪ್ರಚಾರ ಸಭೆಗಳಲ್ಲಿ ಭಾಗವಹಿಸುತ್ತಾರೆ.
23ರಂದು ಬೆಳಗ್ಗೆ ಯಶವಂತಪುರದಲ್ಲಿ ರೋಡ್ ಶೋ, ಬಳಿಕ ಯಲಹಂಕದಲ್ಲಿ ಸಾರ್ವಜನಿಕ ಸಭೆ ಇರುತ್ತದೆ. ಸಂಜೆ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರೋಡ್ ಶೋ ಇರುತ್ತದೆ. ನಂತರ ಮಹದೇವಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರೋಡ್ ಶೋ ಇರಲಿದೆ ಎಂದು ವಿವರಿಸಿದರು.
ಚಿಕ್ಕಮಗಳೂರಿನಲ್ಲಿ ಸಾರ್ವಜನಿಕ ಸಭೆ
24ರಂದು ಬೆಳಗ್ಗೆ ಚಿಕ್ಕಮಗಳೂರಿನಲ್ಲಿ ಸಾರ್ವಜನಿಕ ಸಭೆ, ಮಧ್ಯಾಹ್ನ ತುಮಕೂರಿನಲ್ಲಿ ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಸಂಜೆ ಹುಬ್ಬಳ್ಳಿ ರೋಡ್ ಶೋದಲ್ಲಿ ಪಾಲ್ಗೊಳ್ಳುತ್ತಾರೆ.
ಇದೇ 24ರಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕರ್ನಾಟಕದಲ್ಲಿ ಪ್ರಚಾರ ಸಭೆಗಳಲ್ಲಿ ಭಾಗವಹಿಸುತ್ತಾರೆ. ಬೆಳಗ್ಗೆ ಆರ್.ಆರ್.ನಗರ ವಿಧಾನಸಭಾ ಕ್ಷೇತ್ರದಲ್ಲಿ ರೋಡ್ ಶೋ, ಮಧ್ಯಾಹ್ನ ಮಡಿಕೇರಿಯಲ್ಲಿ ಸಾರ್ವಜನಿಕ ಸಭೆ, ಸಂಜೆ ಉಡುಪಿಯ ಮಲ್ಪೆಯಲ್ಲಿ ಸಾರ್ವಜನಿಕ ಸಭೆ ಇರುತ್ತದೆ ಎಂದು ವಿವರಿಸಿದರು.
ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು 21ರಂದು, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು 24ರಂದು ರಾಜ್ಯ ಪ್ರವಾಸ ಮಾಡಲಿದ್ದಾರೆ ಎಂದರು.