ಬೆಂಗಳೂರು:ನೇಹಾ ಹಿರೇಮಠ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೀಡಿದ ಹೇಳಿಕೆಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಕ್ಷಮೆ ಯಾಚಿಸಿದ್ದಾರೆ.
ಇಂದಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೇಹಾ ಕೊಲೆಯನ್ನು ತೀವ್ರವಾಗಿ ಖಂಡಿಸುತ್ತೇನೆ, ಕೊಲೆಗಾರನನ್ನು ಬಂಧಿಸಿದ್ದು ವಿಚಾರಣೆ ನಡೆಸಲಾಗುತ್ತಿದೆ ಎಂದಿದ್ದಾರೆ.
ಕೊಲೆಗಾರನಿಗೆ ಉಗ್ರ ಶಿಕ್ಷೆ
ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಈ ಪ್ರಕರಣವನ್ನು ಪ್ರತಿಪಕ್ಷಗಳು ರಾಜಕೀಯವಾಗಿ ಬಳಸುತ್ತಿದ್ದಾರೆ ಎಂದು ಕಿಡಿಕಾರಿದ ಪರಮೇಶ್ವರ್, ಇದು ಲವ್ ಜಿಹಾದ್ ಪ್ರಕರಣವಲ್ಲ, ನಾವು ತನಿಖೆಯನ್ನು ಗಂಭೀರವಾಗಿ ಕೈಗೊಂಡಿದ್ದು ಕೊಲೆಗಾರನಿಗೆ ಉಗ್ರ ಶಿಕ್ಷೆ ನೀಡಲಾಗುವುದು ಎಂದರು.
ಒಬ್ಬರ ಸಾವನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿರುವುದು ದುರ್ದೈವ ಮತ್ತು ಖಂಡನೀಯ, ನೇಹಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು, ಈ ಮೊದಲು ನೀಡಿದ ಹೇಳಿಕೆಯಿಂದ ನೇಹಾ ಕುಟುಂಬದವರಿಗೆ ನೋವಾಗಿದ್ದರೆ ವಿಷಾದಿಸುತ್ತೇನೆ ಎಂದರು.
ಗೃಹ ಸಚಿವರ ಹೇಳಿಕೆಗೆ ಪ್ರತಿ ಪಕ್ಷದ ನಾಯಕರು ಖಾರವಾಗಿ ಪ್ರತಿಕ್ರಿಯಿಸಿದರೆ, ಎಬಿವಿಪಿ ಮತ್ತು ಹಿಂದೂ ಪರ ಸಂಘಟನೆಗಳು ಪರಮೇಶ್ವರ್ ನಿವಾಸಕ್ಕೆ ಮುತ್ತಿಗೆ ಹಾಕುವ ಯತ್ನ ಘಟನೆಯೂ ನಡೆಯಿತು.
ಕುಮಾರಸ್ವಾಮಿ ಟೀಕೆ
ಪರಮೇಶ್ವರ್ ಹೇಳಿಕೆಗೆ ಟ್ವೀಟ್ ಮೂಲಕ ಖಂಡಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಅವರು ಸುಶಿಕ್ಷಿತರು, ವಿದೇಶದಲ್ಲಿ ಓದಿದವರು, ಗೃಹ ಮಂತ್ರಿಯಾಗಿರುವವರು, ವಿಕೃತ ಪ್ರೇಮಿಗೆ ಬಲಿಯಾದ ವಿದ್ಯಾರ್ಥಿನಿ ಬಗ್ಗೆ ಬೇಜವಾಬ್ದಾರಿತನದಿಂದ ನಾಲಿಗೆ ಜಾರಿಬಿಟ್ಟು, ಕಾಂಗ್ರೆಸ್ ಸಂಸ್ಕೃತಿಯನ್ನು ಜಗಜ್ಜಾಹೀರು ಮಾಡಿದ್ದಾರೆ ಎಂದಿದ್ದಾರೆ.
ಕೊಲೆಯಾದ ನತದೃಷ್ಟ ಯುವತಿ ಹಾಗೂ ಕೊಲೆಗಾರ ಫಯಾಜ್ ಪರಸ್ಪರ ಪ್ರೀತಿಸುತ್ತಿದ್ದರು ಎಂದು ಕೊಲೆ ಪ್ರಕರಣದ ತನಿಖೆಯ ದಿಕ್ಕು ತಪ್ಪಿಸಲೆತ್ನಿಸಿದ ಮಂತ್ರಿಗಳು ಅತ್ಯಂತ ಅಸೂಕ್ಷ್ಮವಾಗಿ ಹೇಳಿಕೆ ನೀಡಿದ್ದಾರೆ, ಇದು ಖಂಡನೀಯ.
ಇಂತಹ ಕೊಲೆಗಳು ಆಕಸ್ಮಿಕವಾಗಿ ನಡೆಯುತ್ತವೆ ಎಂದು ಹೇಳಿರುವ ಸಚಿವರ ಅಸಲಿ ಉದ್ದೇಶ ಏನು ಎಂದು ಪ್ರಶ್ನಿಸಿರುವ ಕುಮಾರಸ್ವಾಮಿ, ಕಾಂಗ್ರೆಸ್ ಸರ್ಕಾರ ಹೇಗೆ ಕೆಲಸ ಮಾಡುತ್ತದೆ, ಯಾವ ದಿಕ್ಕಿನಲ್ಲಿ ಸಾಗುತ್ತದೆ ಎಂಬುದಕ್ಕೆ ಇದು ಜೀವಂತ ಸಾಕ್ಷಿ ಎಂದಿದ್ದಾರೆ.