ಕರ್ನಾಟಕದ ಮೊದಲ ಹಂತದ ಲೋಕಸಭಾ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ
ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿರುವ ಹಳೇ ಮೈಸೂರು ಭಾಗದ 14 ಲೋಕಸಭಾ ಕ್ಷೇತ್ರಗಳ ಅಬ್ಬರದ ಪ್ರಚಾರಕ್ಕೆ ಬುಧವಾರ ಸಂಜೆ ತೆರೆಬೀಳಲಿದೆ. ಮತದಾನ ಮುಕ್ತಾಯವಾಗುವ ಅವಧಿಯ 48 ಗಂಟೆಗಳ ಮೊದಲು ಬಹಿರಂಗ ಪ್ರಚಾರದ ಸಮಯ ಅಂತ್ಯಗೊಳ್ಳುತ್ತಿದ್ದಂತೆ ಕ್ಷೇತ್ರದವರಲ್ಲದ ಕಾರ್ಯಕರ್ತರು, ಮುಖಂಡರು, ರಾಜಕಾರಣಿಗಳು ಕ್ಷೇತ್ರ ತೊರೆಯಬೇಕಾಗುತ್ತದೆ.
ಅಭ್ಯರ್ಥಿಗಳು ಮನೆ ಮನೆಗೆ ತೆರಳಿ ಮತ ಯಾಚನೆ ಮಾಡಲು ಅವಕಾಶ ಇರುತ್ತದೆ. ಆದರೆ, ಅವರು ಗುಂಪು ಕಟ್ಟಿಕೊಂಡು ಪ್ರಚಾರ ನಡೆಸುವಂತಿಲ್ಲ. ಕ್ಷೇತ್ರ ವ್ಯಾಪ್ತಿಯ ಎಲ್ಲಾ ತೆರೆನಾದ ಮದ್ಯದ ಅಂಗಡಿಗಳು ಮತ್ತು ಬಾರ್ ಅಂಡ್ ರೆಸ್ಟೋರೆಂಟ್‌ಗಳು ಶುಕ್ರವಾರ ಮಧ್ಯರಾತ್ರಿವರೆಗೆ ವಹಿವಾಟು ನಡೆಸುವಂತಿಲ್ಲ.
ಮೊದಲ ಹಂತದಲ್ಲಿ ಮಂಡ್ಯ, ಮೈಸೂರು-ಕೊಡಗು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಚಿತ್ರದುರ್ಗ, ತುಮಕೂರು, ಹಾಸನ, ಚಿಕ್ಕಬಳ್ಳಾಪುರ, ಕೋಲಾರ, ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 26 ರಂದು ಮತದಾನ ನಡೆಯಲಿದೆ.
ಅಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೂ ಮತದಾರರು ಮತದಾನ ಮಾಡಲು ಭಾರತದ ಚುನಾವಣಾ ಆಯೋಗ ಅವಕಾಶ ಮಾಡಿಕೊಟ್ಟಿದೆ. ಬಹಿರಂಗ ಪ್ರಚಾರ ಅಂತ್ಯಗೊಳ್ಳಲು ಒಂದು ದಿನ ಬಾಕಿ ಇರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ, ಕಾಂಗ್ರೆಸ್ ಅಧಿನಾಯಕಿ ಪ್ರಿಯಾಂಕ ಗಾಂಧಿ ವಾದ್ರಾ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಬಿರುಸಿನ ಪ್ರಚಾರ ನಡೆಸಿದರು.
ಮೊದಲ ಹಂತದ ಎಲ್ಲಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೆ, ಎನ್‌ಡಿಎ ಮೈತ್ರಿಕೂಟದ ಬಿಜೆಪಿ 11 ಕ್ಷೇತ್ರಗಳಲ್ಲಿ ಮಿತ್ರ ಪಕ್ಷ ಜೆಡಿಎಸ್ 3 ಕ್ಷೇತ್ರಗಳಲ್ಲೂ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿಗೆ ಮೊದಲ ಹಂತದ ಕ್ಷೇತ್ರಗಳು ಪ್ರತಿಷ್ಠೆಯ ಕಣಗಳಾಗಿವೆ.
ಮುಖ್ಯಮಂತ್ರಿ ಅವರು ಪ್ರತಿನಿಧಿಸುವ ಮೈಸೂರು-ಕೊಡಗು ಹಾಗೂ ಚಾಮರಾಜನಗರ ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿರುವುದರಿಂದ ಎರಡೂ ಕ್ಷೇತ್ರಗಳನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ. ಅದರಲ್ಲೂ ಬಿಜೆಪಿ, ರಾಜವಂಶಸ್ಥ ಯದುವೀರ ಕೃಷ್ಣದತ್ತ ಒಡೆಯರ್ ಅವರನ್ನು ಮುಖ್ಯಮಂತ್ರಿ ಅವರ ತವರು ಕ್ಷೇತ್ರದಲ್ಲಿ ಕಣಕ್ಕಿಳಿಸಿ ಆ ಕ್ಷೇತ್ರವನ್ನು ಉಳಿಸಿಕೊಳ್ಳಲು ಹೋರಾಟ ನಡೆಸಿದೆ.
ಕುಮಾರಸ್ವಾಮಿ ಸ್ವತಃ ಮಂಡ್ಯ ಕ್ಷೇತ್ರದಲ್ಲಿ ಎನ್‌ಡಿಎ ಕೂಟದ ಅಭ್ಯರ್ಥಿ ಆಗಿರುವುದರಿಂದ ಅದು ಪ್ರತಿಷ್ಠಿತ ಕ್ಷೇತ್ರವಾಗಿ ಮಾರ್ಪಟ್ಟಿದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಹೋದರ ಡಿ.ಕೆ.ಸುರೇಶ್ ಬೆಂಗಳೂರು ಗ್ರಾಮಾಂತರದಲ್ಲಿ ನಾಲ್ಕನೇ ಬಾರಿಗೆ ಮರು ಆಯ್ಕೆ ಬಯಸಿ ಕಣಕ್ಕಿಳಿದಿದ್ದಾರೆ, ಅವರ ಪ್ರತಿ ಸ್ಪರ್ಧಿ ದೇವೇಗೌಡರ ಅಳಿಯ ಹೃದಯ ತಜ್ಞ ಡಾ.ಮಂಜುನಾಥ್ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವುದರಿಂದ ಈ ಕ್ಷೇತ್ರದ ಬಗ್ಗೆ ಜನತೆ ಕುತೂಹಲದಿಂದ ನೋಡುತ್ತಿದ್ದಾರೆ.
ಕಳೆದ 2019 ರಲ್ಲಿ ಈ 14 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 11 ರಲ್ಲೂ, ಕಾಂಗ್ರೆಸ್, ಜೆಡಿಎಸ್ ಹಾಗೂ ಪಕ್ಷೇತರರು ತಲಾ ಒಂದು ಸ್ಥಾನದಲ್ಲಿ ಗೆಲುವು ಗಳಿಸಿದ್ದರು. ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಜೆಡಿಎಸ್, ಬಿಜೆಪಿ ಜೊತೆ ಕೈಜೋಡಿಸಿ ಕಾಂಗ್ರೆಸ್ ವಿರುದ್ಧ ಕಣಕ್ಕಳಿದಿದೆ, ಎಲ್ಲಾ ಕ್ಷೇತ್ರಗಳನ್ನು ಎನ್‌ಡಿಎ ಒಕ್ಕೂಟ ತಮ್ಮದಾಗಿಸಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಷಾ ಅವರು ಈ ಕ್ಷೇತ್ರಗಳಲ್ಲಿ ಎರಡು ಬಾರಿ ಚುನಾವಣಾ ಪ್ರಚಾರ ಕೈಗೊಂಡಿದ್ದರು.
ಕೊನೆಯ ಎರಡು ದಿನಗಳಲ್ಲಿ ಮತದಾರರಿಗೆ ಆಮಿಷಗಳ ಮಹಾಪೂರವೇ ಹರಿದು ಬರುವ ಸಾಧ್ಯತೆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದ ವೀಕ್ಷಕರು ತೀವ್ರ ನಿಗಾ ಇಟ್ಟಿದ್ದು, ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದೆ.
ಪ್ರತಿಯೊಂದು ಕ್ಷೇತ್ರಗಳ ಗಡಿ ಭಾಗಗಳಲ್ಲಿ ಸಂಚರಿಸುವ ವಾಹನಗಳ ಮೇಲೆ ತೀವ್ರ ನಿಗಾ ಇಡಲಾಗಿದ್ದು, ಸೂಕ್ತ ದಾಖಲೆಗಳಿಲ್ಲದ ಹಣ, ಬೆಲೆ ಬಾಳುವ ವಸ್ತುಗಳ ಸಾಗಾಣಿಕೆ ತಡೆಗೆ ಅಲ್ಲಲ್ಲಿ ತಪಾಸಣೆ ನಡೆಸಲಾಗುತ್ತಿದೆ.