ಬೆಂಗಳೂರು:ಕೇರಳದಲ್ಲಿ ಕುರಿ, ಕೋಳಿ, ಮೇಕೆ, ಎಮ್ಮೆ ಬಲಿಯ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ಇನ್ನೊಂದು ವಿಶೇಷ ತನಿಖಾ ತಂಡ (ಎಸ್ಐಟಿ) ರಚನೆ ಮಾಡಲಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ವ್ಯಂಗ್ಯವಾಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಪ್ರತಿಯೊಂದಕ್ಕೂ ಎಸ್ಐಟಿ ರಚನೆ ಮಾಡಿ ತನಿಖೆ ಮಾಡಿಸುತ್ತದೆ, ಬಲಿ ವಿಷಯಕ್ಕೂ ತನಿಖೆ ಮಾಡಿಸಲಿ ಎಂದರು.
ವಾಮಾಚಾರ ಎಂದರೆ ಸಾಮಾನ್ಯವೇ
ಇದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆ ಅಲ್ಲವೇ, ನಾನು ಮಾಧ್ಯಮಗಳ ಮೂಲಕವೇ ಗಮನಿಸಿದೆ, ಮುಖ್ಯಮಂತ್ರಿ ಮತ್ತು ನನ್ನ ವಿರುದ್ಧ ಮಾಡಿಸುತ್ತಿರುವ ಶತ್ರು ಭೈರವಿ ಯಾಗ ಎಂದು ಹೇಳಿದ್ದಾರೆ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ವಿರುದ್ಧ ವಾಮಾಚಾರ ಎಂದರೆ ಸಾಮಾನ್ಯವೇ, ಹಾಗಾಗಿ ಅದರ ತನಿಖೆಗೂ ಒಂದು ಎಸ್ಐಟಿ ರಚನೆ ಮಾಡಲಿ.
ಇದು ಮಾಟ ಮಂತ್ರ ಎಂದು ಉಪಮುಖ್ಯಮಂತ್ರಿ ಕಥೆ ಕಟ್ಟಿದ್ದಾರೆ, ಅವರ ಅಷ್ಟೂ ಹೇಳಿಕೆಯನ್ನು ಗಮನಿಸಿದ್ದೇನೆ, ಒಂದು ಮಾತನ್ನು ಹೇಳಲು ಬಯಸುತ್ತೇನೆ, ’ಆಚಾರವಿಲ್ಲದ ನಾಲಿಗೆ ನಿನ್ನ ನೀಚ ಬುದ್ಧಿಯ ಬಿಡು’ ಎಂದು, ದಾಸಶ್ರೇಷ್ಠ ಪುರಂದರದಾಸರು ರಚಿಸಿರುವ ಪದವಿದು.
ಉಪಮುಖ್ಯಮಂತ್ರಿ ಹೇಳಿಕೆ ಕೊಡುವ ಮುನ್ನ ತಾವು ಅಲಂಕರಿಸಿರುವ ಹುದ್ದೆಯ ಘನತೆ ಅರಿಯಬೇಕಿತ್ತು, ಅವರಿಗೆ ಆ ಸ್ಥಾನದ ಮೌಲ್ಯ ಇನ್ನೂ ಅರ್ಥವಾಗಿಲ್ಲ.
ಮೊದಲು ನಿಮ್ಮ ಮನಸ್ಸು ಶುದ್ಧ ಮಾಡಿಕೊಳ್ಳಿ
’ಲೋಕದ ಡೊಂಕ ನೀವೇಕೆ ತಿದ್ದುವಿರಿ..’ ಎಂದು ಈ ಹಿಂದೆ ಉಪಮುಖ್ಯಮಂತ್ರಿ ಹೇಳಿದ್ದ ವಚನವನ್ನು ಉಲ್ಲೇಖಿಸಿ, ನಾನು ಅವರ ಮಾತನ್ನು ಅವರಿಗೇ ಹೇಳಲು ಬಯಸುತ್ತೇನೆ, ಮೊದಲು ನಿಮ್ಮ ಮನಸ್ಸು ಶುದ್ಧ ಮಾಡಿಕೊಳ್ಳಿ, ಅದೆಂತದೋ ಶತ್ರು ಭೈರವಿ ಯಾಗವಂತೆ, ಅವರಿಗೆ ಭಕ್ತಿ ಇದೆಯಂತೆ, ಪವಿತ್ರ ಪುಣ್ಯಕ್ಷೇತ್ರ ಶ್ರೀರಾಜರಾಜೇಶ್ವರಿ ಅಮ್ಮನವರ ಸನ್ನಿಧಾನಕ್ಕೆ ಅವರೂ ಹೋಗಿದ್ದಾರೆ, ಅವರಿಗೆ ಈ ಯಾಗದ ಬಗ್ಗೆ ಪೂರ್ಣ ಮಾಹಿತಿ ಇರಬೇಕು, ಅಲ್ಲಿ ಯಾವ ರೀತಿಯ ಪೂಜೆ ನಡೆಯುತ್ತದೆ, ಆ ಕ್ಷೇತ್ರ ಮಹಿಮೆ ಏನು ಎನ್ನುವುದು ಅವರಿಗೆ ತಿಳಿದಿರುತ್ತದೆ ಅಲ್ಲವೇ, ಹಾಗಿದ್ದರೂ ಅವರು ಸುಳ್ಳು ಹೇಳಿ ಶ್ರೀರಾಜರಾಜೇಶ್ವರಿ ಅಮ್ಮನವರಿಗೆ ಅಪಪ್ರಚಾರ ಎಸಗಿದ್ದಾರೆ ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.
ಅವರು ನಮ್ಮ ಕುಟುಂಬದ ಮೇಲೆ ಏನೆಲ್ಲಾ ಚಿತಾವಣೆ ನಡೆಸುತ್ತಿದ್ದಾರೆ ಎನ್ನುವುದು ನನಗೆ ಗೊತ್ತಿದೆ, ನಮ್ಮ ಕುಟುಂಬದಲ್ಲಿ ಕುರಿ, ಮೇಕೆ, ಎಮ್ಮೆ, ಕೋಣ ಕಡಿಯೋದು ಯಾವತ್ತೂ ನಡೆದಿಲ್ಲ, ಅಂತಹ ಸಂಪ್ರದಾಯ ನಮ್ಮ ಕುಟುಂಬದಲ್ಲಿ ಇಲ್ಲ, ಪ್ರತಿ ತಿಂಗಳು ನಾನು ಜೆಪಿ ನಗರದಲ್ಲಿರುವ ಶ್ರೀತಿರುಮಲಗಿರಿ ವೆಂಕಟೇಶ್ವರಸ್ವಾಮಿ ದೇವಸ್ಥಾನಕ್ಕೆ ಹೋಗಿ ಪೂಜೆ ಮಾಡಿಸುತ್ತೇನೆ, ನಮ್ಮ ತಂದೆಯವರು ಪೂಜೆ ಮಾಡಿಸುತ್ತಾರೆ, ನಮ್ಮಿಬ್ಬರ ಆರೋಗ್ಯದ ಸಮಸ್ಯೆ ಹಿನ್ನೆಲೆಯಲ್ಲಿ ಪೂಜೆ ಮಾಡಿ ದೈವಕ್ಕೆ ಪ್ರಾರ್ಥನೆ ಸಲ್ಲಿಸುತ್ತೇವೆ, ಇನ್ನೊಬ್ಬರಿಗೆ ಕೇಡು ಬಯಸಲು ಪೂಜೆ ಮಾಡಿಲ್ಲ, ಮಾಡುವುದೂ ಇಲ್ಲ.
ಕೋಣ, ಹಂದಿ ಕೂಯ್ದು ನಾವು ಕೇಡು ಬಯಸಲ್ಲ, ಕೇಡು ಬಯಸೋದು ಅವರ ಸಂಸ್ಕೃತಿ, ದೇವೇಗೌಡರ ಅರವತ್ತು ವರ್ಷಗಳ ರಾಜಕೀಯ ಜೀವನದಲ್ಲಿ 3-4 ವರ್ಷ ಬಿಟ್ಟರೆ ಉಳಿದದ್ದು ಎಲ್ಲಾ ವಿರೋಧ ಪಕ್ಷದಲ್ಲೇ, ಒಂದು ವೇಳೆ ಕುರಿ, ಕೋಣ ಬಲಿ ಕೊಟ್ಟರೆ ಅಧಿಕಾರ ಸಿಗುತ್ತದೆ ಎನ್ನುವುದಾದರೆ ಇಷ್ಟೆಲ್ಲಾ ಕಷ್ಟ ಏಕೆ ಪಡಬೇಕು ಎಂದರು.