ಬೆಂಗಳೂರು:ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಹಣ ವರ್ಗಾವಣೆ ಸಾಕ್ಷ್ಯಗಳ ನಾಶಕ್ಕೆ ನನ್ನ ಕಚೇರಿಯಲ್ಲಿ ಯಾರೊಂದಿಗಾದರೂ ಸಭೆ ನಡೆಸಿದ್ದರೆ ಮುಕ್ತ ಮತ್ತು ನ್ಯಾಯಸಮ್ಮತ ತನಿಖೆಗೆ ಸಿದ್ಧ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಸವಾಲು ಹಾಕಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣ ಕುರಿತ ಆರೋಪಗಳ ಬಗ್ಗೆ ಸ್ಪಷ್ಟನೆ ನೀಡಿ, ಮೇ 24ರಂದು ಬೆಂಗಳೂರಿನ ವಿಕಾಸಸೌಧದ ನನ್ನ ಕಚೇರಿಯಲ್ಲಿ ನಾನು, ವಾಲ್ಮೀಕಿ ಅಭಿವೃದ್ಧಿ ನಿಗಮ ಮಂಡಳಿಯ ಅಧ್ಯಕ್ಷ ಬಸವರಾಜ್ ದದ್ದಲ್ ಸೇರಿದಂತೆ ಕೆಲವರು ಸಭೆ ನಡೆಸಿ ಸಾಕ್ಷ್ಯ ನಾಶ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ, ನಜಸಂಗತಿಯೆಂದರೆ, ಮೇ 24ರಂದು ಲೋಕಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದರಿಂದ ಕಚೇರಿಗೆ ಭೇಟಿ ನೀಡಿರಲಿಲ್ಲ ಎಂದರು.
ಆರೋಪಗಳಲ್ಲಿ ಹುರುಳಿಲ್ಲ
ಅಂದು ನಾನು ಕಚೇರಿಯಲ್ಲಿ ಇದ್ದೆ ಎಂದರೆ, ಇದಕ್ಕಿಂತ ಅಪಹಾಸ್ಯ ಇನ್ನೊಂದಿಲ್ಲ, ತಮ್ಮ ಮೇಲಿನ ಆರೋಪಗಳಲ್ಲಿ ಹುರುಳಿಲ್ಲ, ಯಾವುದೇ ತನಿಖೆ ನಡೆಸಿದರೂ ಕಾನೂನುಬದ್ಧವಾಗಿ ಎದುರಿಸಲು ಸಿದ್ಧ.
ಪ್ರಾಮಾಣಿಕವಾಗಿ ಕೆಲಸ ಮಾಡಿದ ತೃಪ್ತಿ ಇದೆ, ಸುಳ್ಳು ಆರೋಪಗಳ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ.
ಸಚಿವನಾಗಿರುವುದರಿಂದ ರಾಜ್ಯದ ನಾನಾ ಭಾಗಗಳಿಂದ ನೂರಾರು ಜನ ಬಂದು ಹೋಗುತ್ತಾರೆ, ಬಂದುಹೋಗುವವರ ಪೂರ್ಣ ವಿವರಗಳನ್ನು ಕಲೆ ಹಾಕಲು ಸಾಧ್ಯವೇ ಎಂದು ಪ್ರಶ್ನಿಸಿದರು.
ಯಾವುದೇ ಸಂಬಂಧ ಇಲ್ಲ
ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ವಶದಲ್ಲಿರುವ ವ್ಯಕ್ತಿಯ ಮುಖವನ್ನೂ ನೋಡಿಲ್ಲ, ನನಗೂ, ಅವರಿಗೂ ಯಾವುದೇ ಸಂಬಂಧ ಇಲ್ಲ, ಎಸ್ಐಟಿ ಅಧಿಕಾರಿಗಳ ಮುಂದೆ ಆತ ಏನು ಹೇಳಿದ್ದಾನೆ ಎಂಬುದೂ ನನಗೂ ಗೊತ್ತಿಲ್ಲ.
ವೈದ್ಯಕೀಯ ಶಿಕ್ಷಣ ಸಚಿವರು ಎಂಬುದಾಗಿ ಹೇಳಿದ್ದಾನೆಂದು ಎಲ್ಲಾದರೂ ವರದಿಯಾಗಿದೆಯೇ, ಊಹಾಪೋಹಗಳಿಗೆ ನಾನೇಕೆ ಉತ್ತರ ಕೊಡಲಿ ಎಂದರು.
ನನ್ನ ಕಚೇರಿಯಲ್ಲಿ ಸಭೆ ನಡೆಸಿದ್ದರೆ ಸಿಸಿಟಿವಿ ಫುಟೇಜ್ ಪರಿಶೀಲಿಸಲಿ, ಈ ಕುರಿತು ಸರ್ಕಾರ ತನಿಖೆ ನಡೆಸಿದರೂ ನನ್ನ ಅಭ್ಯಂತರವಿಲ್ಲ. ತನಿಖೆಯಿಂದ ಸತ್ಯಾಸತ್ಯತೆ ಹೊರಬರಲಿದೆ, ತಪ್ಪು ಯಾರೇ ಮಾಡಿದರೂ ಕಾನೂನು ಪ್ರಕಾರ ಶಿಕ್ಷೆಯಾಗುತ್ತದೆ.
ಪ್ರತಿ ಪಕ್ಷ ಬಿಜೆಪಿಯವರು ಯಾವ ಆಧಾರದ ಮೇಲೆ ರಾಜೀನಾಮೆಗೆ ಒತ್ತಾಯಿಸುತ್ತಿದ್ದಾರೆ ಎಂಬುದೇ ತಿಳಿಯುತ್ತಿಲ್ಲ, ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ ಎಂದ ಮೇಲೆ ರಾಜೀನಾಮೆ ನೀಡುವ ಔಚಿತ್ಯವಾದರೂ ಏನು ಎಂದು ಶರಣಪ್ರಕಾಶ್ ಪಾಟೀಲ್ ಪ್ರಶ್ನಿಸಿದರು.