ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದಲ್ಲಿ ಕೇಂದ್ರ ಸಚಿವರಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರಮಾಣ ವಚನ ಸ್ವೀಕರಿಸಿದರು.
ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಗಣ್ಯಾತಿಗಣ್ಯರ ಸಮ್ಮುಖದಲ್ಲಿ ಕನ್ನಡಿಗರ ಹರ್ಷೋಧ್ಗಾರದ ನಡುವೆ ಕುಮಾರಸ್ವಾಮಿ ಅಧಿಕಾರ ಹಾಗೂ ಗೌಪ್ಯತೆಯ ಪ್ರಮಾಣ ವಚನ ಸ್ವೀಕಾರ ಮಾಡಿದರು.
ಕೇಂದ್ರ ಮಂತ್ರಿಯಾಗಿ ಸರತಿಯಲ್ಲಿ 9ನೇಯವರಾಗಿ ಪ್ರಮಾಣ ಸ್ವೀಕರಿಸಿದರು. ಎಂಟು ಮಂದಿ ಬಿಜೆಪಿ ನಾಯಕರು ಪ್ರಮಾಣ ವಚನ ಸ್ವೀಕರಿಸಿದ ನಂತರ ಎನ್ ಡಿಎ ಒಕ್ಕೂಟದ ಮಿತ್ರಪಕ್ಷಗಳಲ್ಲಿ ಮೊದಲಿಗರಾಗಿ ಕುಮಾರಸ್ವಾಮಿ ಪ್ರಮಾಣ ಸ್ವೀಕರಿಸಿದ್ದು, ಜೆಡಿಎಸ್ ನಾಯಕರು ಮುಖಂಡರಿಗೆ ಖುಸಿ ತಂದಿತು.
ದೇವರ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸಿದ ಅವರು, ಸಾಂಪ್ರದಾಯಿಕ ಬಿಳಿ ಅಂಗಿ ಪಂಚೆ ಧರಿಸಿದ್ದರು. ತಮ್ಮ ಎಕ್ಸ್ ಖಾತೆಯಲ್ಲಿ ಈ ವಿಚಾರ ಪೋಸ್ಟ್ ಮಾಡಿರುವ ಕುಮಾರಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಎನ್ ಡಿಎ ಸರ್ಕಾರದಲ್ಲಿ ಸಂಪುಟ ದರ್ಜೆ ಸಚಿವನಾಗಿ ಪ್ರಮಾಣ ವಚನ ಸ್ವೀಕರಿಸಿದೆ. ಅಧಿಕಾರ ಮತ್ತು ಗೌಪ್ಯತೆಯ ಪ್ರತಿಜ್ಞೆ ಭೋಧಿಸಿದ ಗೌರವಾನ್ವಿತ ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಅವರಿಗೆ ಗೌರವಪೂರ್ವಕ ಧನ್ಯವಾದಗಳನ್ನು ಅರ್ಪಿಸುವುದಾಗಿ ತಿಳಿಸಿದ್ದಾರೆ.
ದೇಶ ಸೇವೆಗೆ ಅವಕಾಶ ಕಲ್ಪಿಸಿ ಈ ಅಮೃತಕ್ಷಣಕ್ಕೆ ಕಾರಣೀಭೂತರಾದ ಮಂಡ್ಯ ಲೋಕಸಭೆ ಕ್ಷೇತ್ರದ ಮಹಾಜನತೆಗೆ, ಸಮಸ್ತ ಕನ್ನಡಿಗರಿಗೆ ಹಾಗೂ ಜೆಡಿಎಸ್ ಮತ್ತು ಕರ್ನಾಟಕ ಪಕ್ಷಗಳ ಎಲ್ಲಾ ಕಾರ್ಯಕರ್ತ ಬಂಧುಗಳಿಗೆ ತುಂಬು ಹೃದಯದ ಕೃತಜ್ಞತೆಗಳನ್ನು ಕುಮಾರಸ್ವಾಮಿ ಸಲ್ಲಿಸಿದ್ದಾರೆ.