ಜೆಡಿಎಸ್ ಕಾರ್ಯಕರ್ತರಿಂದ ಅದ್ಧೂರಿ ಸ್ವಾಗತ
ಬೆಂಗಳೂರು: ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಮೇಲೆ ಇದೇ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸುತ್ತಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಅದ್ದೂರಿಯಾಗಿ ಸ್ವಾಗತಿಸಲು ಜೆಡಿಎಸ್ ಕಾರ್ಯಕರ್ತರು ಸಿದ್ಧತೆ ಮಾಡಿಕೊಂಡಿದ್ದು, ಆ ಸಂಭ್ರಮದಲ್ಲಿ ನಾನು ಕೂಡ ಭಾಗಿಯಾಗುತ್ತೇನೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಹೇಳಿದರು.
ಪಕ್ಷದ ರಾಜ್ಯದ ಕಚೇರಿಯಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಶುಕ್ರವಾರ 11.50 ಗಂಟೆಗೆ ದೆಹಲಿಯಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಅವರ ಸ್ವಾಗತಕ್ಕೆ ಎಲ್ಲಾ ಸಿದ್ಧತೆಗಳನ್ನು ಕಾರ್ಯಕರ್ತರು ಮಾಡಿಕೊಳ್ಳುತ್ತಿರುವುದು ನನಗೆ ಸಂತಸ ಉಂಟು ಮಾಡಿದೆ ಎಂದರು.
ವಿಮಾನ ನಿಲ್ದಾಣದಿಂದ ಪಕ್ಷದ ರಾಜ್ಯ ಕಚೇರಿ ಜೆಪಿ ಭವನಕ್ಕೆ ಬರಲಿರುವ ಅವರು ಕಾರ್ಯಕರ್ತರನ್ನು ಭೇಟಿ ಮಾಡಲಿದ್ದಾರೆ. ನಂತರ ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಸೌಹಾರ್ದ ಭೇಟಿ ಮಾಡಲಿದ್ದಾರೆ. ಬಳಿಕ ಮಾಜಿ ಪ್ರಧಾನಿಗಳಾದ ದೇವೇಗೌಡರ ಮನೆಗೆ ತೆರಳಿ ತಂದೆ ತಾಯಿಯ ಆಶೀರ್ವಾದ ಪಡೆಯಲಿದ್ದಾರೆ. ನಂತರ ತಿರುಪತಿಗೆ ತೆರಳಲಿದ್ದಾರೆ ಎಂದು ನಿಖಿಲ್ ಅವರು ಮಾಹಿತಿ ನೀಡಿದರು.
ಭಾನುವಾರ ತಮಗೆ ರಾಜಕೀಯ ಜನ್ಮ ನೀಡಿದ ರಾಮನಗರ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಬಳಿಕ ತಮಗೆ ರಾಜಕೀಯ ಶಕ್ತಿ ತುಂಬಿದ ಮಂಡ್ಯದಲ್ಲಿ ಕಾರ್ಯಕರ್ತರನ್ನು ಭೇಟಿ ಮಾಡಲಿದ್ದಾರೆ. ಎರಡೂ ಕಡೆ ನಮ್ಮ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಕುಮಾರಸ್ವಾಮಿ ಅವರಿಗೆ ಅಭಿನಂದನಾ ಸಭೆಗಳನ್ನು ಹಮ್ಮಿಕೊಂಡಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಹೇಳಿದರು.
ಕುಮಾರಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದಲ್ಲಿ ಸಚಿವರಾಗಿದ್ದಾರೆ. ಎರಡು ಸಲ ರಾಜ್ಯದ ಮುಖ್ಯಮಂತ್ರಿಯಾಗಿ ಬಡವರ ಪರ, ರೈತರ ಪರ ಕೆಲಸ ಮಾಡಿರುವ ಕುಮಾರಸ್ವಾಮಿ ಅವರಿಗೆ ಈ ಅವಕಾಶ ದೊರಕಿರುವುದು ಅತ್ಯಂತ ಸಂತೋಷದ ಸಂಗತಿ.
ಅತ್ಯಂತ ಪ್ರಮುಖ ಸ್ಥಾನವನ್ನು ಕುಮಾರಸ್ವಾಮಿ ಅವರಿಗೆ ಕೊಟ್ಟಿದ್ದಾರೆ. ಪ್ರತಿ ಕಾರ್ಯಕರ್ತನಿಗೂ ನಿರೀಕ್ಷೆ ಇದೆ, ವಿಶ್ವಾಸ ಇದೆ. ಕುಮಾರಸ್ವಾಮಿ ಅವರು ಈಗಾಗಲೇ ಕೆಲಸ ಆರಂಭ ಮಾಡಿದ್ದಾರೆ. ಬೆಳಗ್ಗೆ ಆರು ಗಂಟೆಗೆ ಎದ್ದು ಕೆಲಸ ಮಾಡುತ್ತಿದ್ದಾರೆ. ಉಕ್ಕು ಸಚಿವಾಲಯದಲ್ಲಿ ನಮ್ಮ ರಾಜ್ಯಕ್ಕೆ ಸಂಬಂಧಿಸಿದ ಮೊದಲ ಕಡತಕ್ಕೆ ಸಹಿ ಹಾಕುವ ಮೂಲಕ ಕೆಲಸ ಆರಂಭ ಮಾಡಿದ್ದಾರೆ ಎಂದು ಅವರು ತಿಳಿಸಿದರು.
ಮಂಡ್ಯ ಜಿಲ್ಲೆಯ ಎಲ್ಲ ಜನತೆ, ನಾಯಕರಿಗೆ ಧನ್ಯವಾದಗಳನ್ನು ಹೇಳುತ್ತೇನೆ. 2018ರಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚು ಸಂಖ್ಯೆಯ ಶಾಸಕರನ್ನು ಆಯ್ಕೆ ಮಾಡಿದ್ದರು. ಅದೇ ರೀತಿ ಈ ಸಲ ಕುಮಾರಸ್ವಾಮಿ ಅವರನ್ನು ಹೆಚ್ಚಿನ ಅಂತರದಲ್ಲಿ ಆಯ್ಕೆ ಮಾಡಿದ್ದಾರೆ. ರಾಮನಗರದಲ್ಲಿ ರಾಜಕೀಯ ಬದುಕನ್ನು ಕಟ್ಟಿಕೊಟ್ಟ ಜನತೆಗೂ ಧನ್ಯವಾದಗಳನ್ನು ಹೇಳುತ್ತೇನೆ ಎಂದು ಅವರು ಹೇಳಿದರು.
ಲೋಕಸಭೆ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿಕೂಟದ ಪರವಾಗಿ ದೇಶದ ಮತ್ತು ರಾಜ್ಯದ ಜನತೆ ಐತಿಹಾಸಿಕ ತೀರ್ಪು ನೀಡಿದ್ದಾರೆ. ಕಳೆದ ಎರಡು ಅವಧಿಗಳಲ್ಲಿ ಮೋದಿ ಅವರು ಅನೇಕ ಒಳ್ಳೆಯ ಕೆಲಸಗಳನ್ನು ಮಾಡಿದ್ದಾರೆ.
ಮತ್ತೆ ಮೋದಿಯವರು ಪ್ರಧಾನಿ ಆಗಲು ಜನ ತೀರ್ಪು ನೀಡಿದ್ದಾರೆ. ನಮ್ಮ ರಾಜ್ಯದಲ್ಲಿ ದೇವೇಗೌಡರು ಮೋದಿ ಅವರ ನಾಯಕತ್ವ ಮೆಚ್ಚಿ ಮೈತ್ರಿ ಭಾಗವಾಗಲು ತೀರ್ಮಾನ ಮಾಡಿದರು. ಚಾಮರಾಜನಗರ, ಹಾಸನ ಹೊರತುಪಡಿಸಿ ಹಳೇ ಮೈಸೂರು ಭಾಗದಲ್ಲಿ ಎಲ್ಲಾ ಕಡೆ ಮೈತ್ರಿ ಯಶಸ್ವಿಯಾಗಿದೆ. ಜನತೆಯ ವಿಶ್ವಾಸ ಉಳಿಸಿಕೊಳ್ಳುತ್ತೇವೆ ಎಂದು ನಿಖಿಲ್ ಅವರು ತಿಳಿಸಿದರು.