ಬೆಂಗಳೂರು:ಗ್ಯಾರಂಟಿ ನೆಪದಲ್ಲಿ ಬಡವರು ಮತ್ತು ಮಧ್ಯಮ ವರ್ಗವನ್ನು ಸರ್ಕಾರ ಸುಲಿಗೆ ಮಾಡುತ್ತಿದೆ ಎಂದು ರಾಜ್ಯ ಬಿಜೆಪಿ ಕಿಡಿಕಾರಿದೆ.
ಪೆಟ್ರೋಲ್, ಡೀಸೆಲ್ ಬೆಲೆಯನ್ನು ಪ್ರತಿ ಲೀಟರ್‌ಗೆ 3ರಿಂದ 3.50 ರೂ.ವರೆಗೆ ಹೆಚ್ಚಳ ಮಾಡಿ ಜನ ವಿರೋಧಿ ನಿರ್ಧಾರವನ್ನು ಕಾಂಗ್ರೆಸ್ ಕೈಗೊಂಡಿದೆ ಎಂದು ಆರೋಪಿಸಿದೆ.
ದರ ಹಿಂಪಡೆಯುವವರೆಗೂ ಹೋರಾಟ
ಏರಿಸಿದ ದರ ಹಿಂಪಡೆಯುವವರೆಗೂ ರಾಜ್ಯಾದ್ಯಂತ ಹೋರಾಟ ನಡೆಸುವುದಾಗಿ ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.
ಬೆಲೆ ಏರಿಕೆ ಖಂಡಿಸಿ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ರಾಘವೇಂದ್ರ, ವಿಧಾನಸಭೆಯಲ್ಲಿನ ಪ್ರತಿಪಕ್ಷದ ನಾಯಕ ಆರ್. ಅಶೋಕ್, ಮಾಜಿ ಉಪಮುಖ್ಯಮಂತ್ರಿ ಅಶ್ವಥ್‌ನಾರಾಯಣ ಸೇರಿದಂತೆ ಹಲವರು ಪಾಲ್ಗೊಂಡು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.
ರಾಜ್ಯದ ರೈತರು, ಬಡವರು, ಜನಸಾಮಾನ್ಯರಿಗೆ ನ್ಯಾಯ ಕೊಡಿಸುವ ಕೆಲಸವನ್ನು ನಾವು- ನೀವೆಲ್ಲರೂ ಸೇರಿ ಮಾಡಬೇಕಿದೆ ಎಂದು ಮುಖಂಡರು ತಿಳಿಸಿದರು.
ಜನ ವಿರೋಧಿ ಮುಖ್ಯಮಂತ್ರಿ
ಜನ ವಿರೋಧಿ ಸರಕಾರ ಮತ್ತು ಜನ ವಿರೋಧಿ ಮುಖ್ಯಮಂತ್ರಿಗಳ ವಿರುದ್ಧ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಿ ಹೆಚ್ಚಳ ಮಾಡಿರುವ ದರವನ್ನು ಹಿಂಪಡೆಯುವವರೆಗೂ ನಾವು ವಿಶ್ರಮಿಸುವುದಿಲ್ಲ ಎಂದರು.
ಲೋಕಸಭಾ ಚುನಾವಣೆಯಲ್ಲಿ 18ರಿಂದ 20 ಸ್ಥಾನ ಗೆಲ್ಲುವ ನಿರೀಕ್ಷೆ ಇಟ್ಟುಕೊಂಡಿದ್ದ ಕಾಂಗ್ರೆಸ್ ಮುಖಂಡರು ಫಲಿತಾಂಶ ಬಂದ ಬಳಿಕ ಹತಾಶರಾಗಿದ್ದಾರೆ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಶಾಸಕರೇ ಗ್ಯಾರಂಟಿ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ.
ಜನರ ಮೇಲೆ ಹೊಸ ತೆರಿಗೆ ಸೇಡು
ಇದಾವುದನ್ನೂ ಸಹಿಸಿಕೊಳ್ಳದ ಮುಖ್ಯಮಂತ್ರಿ ಅವರು, ಜನರ ಮೇಲೆ ಹೊಸ ತೆರಿಗೆ ಹಾಕಿ ಸೇಡು ತೀರಿಸಿಕೊಳ್ಳಲು ಮುಂದಾಗಿದ್ದಾರೆ.
ಆನರ ಸೇಡು ತೀರಿಸಿಕೊಳ್ಳುವ ಕೆಲಸ
ಲೋಕಸಭಾ ಚುನಾವಣಾ ಸೋಲಿನಿಂದ ಸಿದ್ದರಾಮಯ್ಯ ವಿಚಲಿತರಾಗಿ ಬಡವರು ಮತ್ತು ಮಧ್ಯಮ ವರ್ಗದವರ ಮೇಲೆ ಸೇಡು ತೀರಿಸಿಕೊಳ್ಳಲು ಹೊರಟಿರುವುದು ಎಷ್ಟು ನ್ಯಾಯ ಎಂದು ಪ್ರಶ್ನಿಸಿದರು.
ಬೆಳಗ್ಗೆ ಎದ್ದರೆ ಬಡವರ ಬಗ್ಗೆಯೇ ಮಾತನಾಡುವ ಸಿದ್ದರಾಮಯ್ಯ ಅವರಿಗೆ ಇಂತಹ ತೆರಿಗೆ ಹೇರಲು ಮನಸ್ಸು ಬಂದಿದ್ದಾದರೂ ಹೇಗೆ ಎಂದು ವ್ಯಂಗ್ಯವಾಡಿದರು.
ಕಾಂಗ್ರೆಸ್ ಸರಕಾರಕ್ಕೆ ಕಳೆದ ಒಂದು ವರ್ಷದ ಅಧಿಕಾರದಲ್ಲಿ ಒಂದೇ ಒಂದು ರೂಪಾಯಿಯನ್ನೂ ಅಭಿವೃದ್ಧಿಗೆ ಕೊಡಲು ಸಾಧ್ಯವಾಗಿಲ್ಲ ಎಂದು ಆಕ್ಷೇಪಿಸಿದರು.
ಕಾಂಗ್ರೆಸ್ ಶಾಸಕರಿಂದಲೇ ಟೀಕೆ
ಮುದ್ದೇಬಿಹಾಳದ ಕಾಂಗ್ರೆಸ್ ಶಾಸಕ ನಾಡಗೌಡರು ಅಭಿವೃದ್ಧಿ ಕಾರ್ಯ ಸ್ಥಗಿತವಾದ ಕುರಿತು ಹೇಳಿಕೆ ಕೊಟ್ಟಿದ್ದಾರೆ, ತಾವು ಕ್ಷೇತ್ರದಲ್ಲಿ ತಲೆ ಎತ್ತಿ ಓಡಾಡಲೂ ಆಗದ ಸ್ಥಿತಿ ಇದೆ ಎಂದು ಗಮನ ಸೆಳೆದಿದ್ದಾರೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಲೂ ಸಿದ್ಧ ಎಂದು ಹೇಳಿದ್ದಾರೆ.
ರಸ್ತೆ, ಶಾಲೆಗಳ ಅಭಿವೃದ್ಧಿ, ಆಸ್ಪತ್ರೆಗಳ ವಿಚಾರದಲ್ಲೂ ಅಭಿವೃದ್ಧಿ ಎಂಬುದು ಕನಸಾಗಿದೆ ಎಂದು ಟೀಕಿಸಿದರು.
ಬಿಜೆಪಿ ಸರಕಾರ ಅಧಿಕಾರದಿಂದ ಕೆಳಕ್ಕಿಳಿಯುವಾಗ ರಾಜ್ಯದ ಬೊಕ್ಕಸ ತುಂಬಿತ್ತು, ಹೆಚ್ಚು ಸಾಲಗಳೂ ಇರಲಿಲ್ಲ, ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆದ ಒಂದೇ ಒಂದು ವರ್ಷದಲ್ಲಿ ಕರ್ನಾಟಕ ರಾಜ್ಯದ ಆರ್ಥಿಕ ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿದೆ, ದಿವಾಳಿ ಅಂಚಿಗೆ ಹೋಗಿದೆ, ಯಾವ ಪುರುಷಾರ್ಥಕ್ಕೆ ಆಡಳಿತ ನಡೆಸುತ್ತಿದ್ದೀರಿ ಎಂದು ಪ್ರಶ್ನಿಸಿದರು.
ಬೆಲೆ ಏರಿಕೆ, ಹಣದುಬ್ಬರದ ಕುರಿತು ತಿಳಿದಿದ್ದರೂ ಅನುಭವಿ ಸಿದ್ದರಾಮಯ್ಯನವರು ಲೋಕಸಭಾ ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ದರ ಹೆಚ್ಚಳದ ಈ ಜನ ವಿರೋಧಿ ನಿರ್ಧಾರ ಮಾಡಿದ್ದು, ಇದು ಅಕ್ಷಮ್ಯ ಅಪರಾಧ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದರು.
ಎರಡು ನಾಲಿಗೆಯ ಸಿದ್ದರಾಮಯ್ಯ
ಸಿದ್ದರಾಮಯ್ಯನವರಿಗೆ ಎರಡು ನಾಲಿಗೆ ಎಂದು ಟೀಕಿಸಿದರು, ಹಿಂದೆ ಅವರು ವಿರೋಧ ಪಕ್ಷದಲ್ಲಿದ್ದಾಗ ಪೆಟ್ರೋಲಿಯಂ ಉತ್ಪನ್ನಗಳ ದರ ಏರಿಕೆಯನ್ನು ಖಂಡಿಸಿದ್ದರು ಎಂದು ಸಿದ್ದರಾಮಯ್ಯನವರ ವಿಡಿಯೋ ಪ್ರದರ್ಶಿಸಿದರು.
ಸಿದ್ದರಾಮಯ್ಯನವರು ಮಾನ, ಮರ್ಯಾದೆ ಇಲ್ಲದ ಕಾಂಗ್ರೆಸ್ಸಿಗೆ ಸೇರಿದವರು, ಸಿದ್ರಾಮಣ್ಣ ನುಂಗಣ್ಣ ಎಂದರಲ್ಲದೆ, ವಾಲ್ಮೀಕಿ ನಿಗಮಕ್ಕೆ ಸೇರಿದ 187 ಕೋಟಿ ರೂ. ನುಂಗಿದ ನಾಗೇಂದ್ರರ ವಿಕೆಟ್ ಪತನವಾಗಿದೆ, ಈಗ ಎರಡನೇ ವಿಕೆಟ್ ಸಿದ್ದರಾಮಯ್ಯ ಅವರದು ಎಂದು ತಿಳಿಸಿದರು.
ಸಿದ್ದರಾಮಯ್ಯನವರು ತಾವು ಮಾತ್ರ ಟೋಪಿ ಹಾಕುವುದಲ್ಲ, ಜನರಿಗೆಲ್ಲ ಟೋಪಿ ಹಾಕುತ್ತಿದ್ದಾರೆ, ಟೋಪಿ ಹಾಕಿ, ನಾಮ ಹಾಕಿ, ಜನರಿಗೆ ಚೆಂಬು ಕೊಡುತ್ತಿದ್ದಾರೆ ಎಂದು ಆಕ್ಷೇಪಿಸಿದರು.