ಬೆಂಗಳೂರು:ಜನರಿಗೆ ಹೊರೆಯಾಗಿರುವ ಪೆಟ್ರೋಲ್-ಡೀಸೆಲ್ ದರ ಏರಿಕೆ ಹಿಂಪಡೆಯುವವರೆಗೂ ಬಿಜೆಪಿ ಹೋರಾಟ ಮುಂದುವರೆಯಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಇಂದಿಲ್ಲಿ ಎಚ್ಚರಿಸಿದರು.
ಬಿಜೆಪಿ ಪ್ರಧಾನ ಕಚೇರಿಯಿಂದ ವಿಧಾನಸೌಧಕ್ಕೆ ಸೈಕಲ್ ಜಾಥಾಕ್ಕೆ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಭಂಡತನ ಬಿಟ್ಟು ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಯನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು.
ಬಿಜೆಪಿ ಹೋರಾಟ ನಿಲ್ಲದು
ಸರಕಾರದ ನಿರ್ಧಾರದ ವಿರುದ್ಧ ರಾಜ್ಯದಾದ್ಯಂತ ಹೋರಾಟ ಮಾಡುತ್ತಿದ್ದು, ಮುಖ್ಯಮಂತ್ರಿಗಳು ತಮ್ಮ ನಿರ್ಧಾರದಿಂದ ಹಿಂದೆ ಸರಿಯುವವರೆಗೆ ಹೋರಾಟ ನಿಲ್ಲುವುದಿಲ್ಲ ಎಂದರು.
ಸ್ವಲ್ಪ ದೂರ ಸಾಗುತ್ತಿದ್ದಂತೆ ಸೈಕಲ್ ಜಾಥಾವನ್ನು ತಡೆದ ಪೊಲೀಸರು ಜಾಥಾದಲ್ಲಿ ಭಾಗವಹಿಸಿದವರನ್ನು ವಶಕ್ಕೆ ಪಡೆದರು.
ಜಾಥಾದಲ್ಲಿ ಬೆಂಗಳೂರಿನ ಮಾಜಿ ಸಚಿವರು, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಬಿಬಿಎಂಪಿ ಮಾಜಿ ಸದಸ್ಯರು, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಪಾಲ್ಗೊಂಡಿದ್ದರು.