ಮಂಡ್ಯ:ಪುಣ್ಯಕ್ಷೇತ್ರ ವಾರಾಣಸಿಯಲ್ಲಿ ನಡೆಯುವ ಗಂಗಾರತಿ ಮಾದರಿಯಲ್ಲಿ ರೈತರ ಜೀವನಾಡಿ ಕಾವೇರಿ ತಾಯಿಗೂ ಕಾವೇರಿ ಆರತಿ ಕಾರ್ಯಕ್ರಮ ಹಮ್ಮಿಕೊಳ್ಳುವ ಚಿಂತನೆ ಇದೆ ಎಂದು ಜಲ ಸಂಪನ್ಮೂಲ ಖಾತೆಯನ್ನೂ ಹೊಂದಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಕೃಷ್ಣರಾಜಸಾಗರ ಅಣೆಕಟ್ಟೆ ಪರಿಶೀಲನೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ಆರತಿ ಪ್ರಾರಂಭಿಸಲು ಮಂಡ್ಯ ಹಾಗೂ ಕೊಡಗು ಜಿಲ್ಲೆ ಶಾಸಕರು ಹಾಗೂ ಧಾರ್ಮಿಕ ದತ್ತಿ ಇಲಾಖೆ ಅಧಿಕಾರಿಗಳ ತಂಡ ರಚಿಸಿ ಒಂದು ತಿಂಗಳೊಳಗೆ ವರದಿ ನೀಡಲು ಸೂಚಿಸಲಾಗುವುದು ಎಂದರು.
ಬೃಂದಾವನ ಅಮ್ಯುಸ್‌ಮೆಂಟ್ ಪಾರ್ಕ್
ಕೆಆರ್‌ಎಸ್‌ನ ಮ್ಯೂಸಿಕಲ್ ಪಾರ್ಕ್ ಅಭಿವೃದ್ಧಿ ಜೊತೆ ಹೊಸ ರೂಪ ನೀಡಲು ತಾಂತ್ರಿಕ ವರದಿ ಪಡೆಯಲಾಗಿದೆ, ಪಿ.ಪಿ.ಪಿ. ಮಾದರಿಯಲ್ಲಿ ಬೃಂದಾವನ ಅಮ್ಯುಸ್‌ಮೆಂಟ್ ಪಾರ್ಕ್ ಅಭಿವೃದ್ಧಿಗೆ ಟೆಂಡರ್ ಕರೆಯಲಾಗುವುದು, ಈ ಯೋಜನೆಯಿಂದ ಸುಮಾರು 8 ರಿಂದ 10 ಸಾವಿರ ಸ್ಥಳೀಯರಿಗೆ ಉದ್ಯೋಗ ಸಿಗಲಿದೆ.
ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಕೆಆರ್‌ಎಸ್ ಜಲಾಶಯ ಭರ್ತಿಯಾಗುತ್ತಿದೆ, ಕಾವೇರಿ ಜಲಾನಯನ ಪ್ರದೇಶದ 1,657 ಕೆರೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು.
ಬಿತ್ತನೆ ಬೀಜ, ರಸಗೊಬ್ಬರ ದಾಸ್ತಾನು
ರಾಜ್ಯ ಸರ್ಕಾರ ರೈತರ ಹಿತ ಕಾಯಲು ಸದಾ ಬದ್ಧವಾಗಿದೆ, ಮುಂಗಾರು ಹಂಗಾಮಿಗೆ ಅಗತ್ಯ ಬಿತ್ತನೆ ಬೀಜ, ರಸಗೊಬ್ಬರಗಳ ಪೂರೈಕೆಗೆ ಕ್ರಮ ವಹಿಸಲಾಗಿದೆ, ಎರಡು ಲಕ್ಷ ಹೆಕ್ಟೇರ್ ಬಿತ್ತನೆ ಗುರಿ ಹೊಂದಲಾಗಿದೆ, 5,90,000 ಕ್ವಿಂಟಾಲ್ ಬಿತ್ತನೆ ಬೀಜ ಹಾಗೂ 27 ಲಕ್ಷ ಟನ್ ರಸಗೊಬ್ಬರ ದಾಸ್ತಾನು ಇದೆ.
ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ಕೊರತೆ ಉಂಟಾಗದಂತೆ ಕ್ರಮ ಕೈಗೊಳ್ಳಲಾಗಿದೆ, 30 ಲಕ್ಷ ರೈತರಿಗೆ 25 ಸಾವಿರ ಕೋಟಿ ರೂ. ಶೂನ್ಯ ಬಡ್ಡಿ ಸಾಲ ವಿತರಣೆ ಮಾಡಲಾಗಿದೆ ಎಂದರು.