ಬೆಂಗಳೂರು:ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಅಕ್ರಮ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡಿರುವ ನೋಟಿಸ್‌ಗೆ ರಾಜ್ಯ ಸಚಿವ ಸಂಪುಟ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವುದಲ್ಲದೆ, ನೋಟಿಸ್ ಹಿಂದಕ್ಕೆ ಪಡೆಯುವಂತೆ ಆಗ್ರಹಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಪಸ್ಥಿತಿಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಇಂದಿಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.
ರಾಜಭವನ ದುರುಪಯೋಗ ಆರೋಪ
ರಾಜ್ಯಪಾಲರ ವರ್ತನೆ ಬಗ್ಗೆ ಸಂಪುಟದಲ್ಲಿ ಚರ್ಚೆ ನಡೆಯಿತಲ್ಲದೆ, ಕಾಂಗ್ರೆಸ್ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಲು ರಾಜಭವನವನ್ನು ದುರುಪಯೋಗ ಮಾಡಿಕೊಳ್ಳಲಾಗುತ್ತದೆ ಎಂಬ ಆರೋಪ ಕೇಳಿಬಂದಿತು.
ಪಶ್ಚಿಮ ಬಂಗಾಳ, ಕೇರಳ ಸೇರಿದಂತೆ ಅನೇಕ ರಾಜ್ಯಗಳಲ್ಲಿ ರಾಜಭವನವನ್ನು ದುರುಪಯೋಗ ಮಾಡಿಕೊಳ್ಳುತ್ತಿರುವಂತೆ ಕರ್ನಾಟಕಕ್ಕೂ ಕೈಹಾಕಲಾಗಿದೆ.
ಕಾನೂನು ಹೋರಾಟಕ್ಕೆ ತೀರ್ಮಾನ
ಈ ವಿಷಯದಲ್ಲಿ ಇಡೀ ಸರ್ಕಾರ ಒಗ್ಗಟ್ಟಾಗಿ ಕೇಂದ್ರದ ನೀತಿಯನ್ನು ವಿರೋಧಿಸಬೇಕು, ರಾಜ್ಯಪಾಲರು ನೀಡಿರುವ ನೋಟಿಸ್ ಹಿಂಪಡೆಯದಿದ್ದರೆ ಕಾನೂನು ಹೋರಾಟ ನಡೆಸಲು ಸಭೆ ತೀರ್ಮಾನಿಸಿತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಅಡ್ವೋಕೇಟ್ ಜನರಲ್ ಹಾಗೂ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ನೀಡಿರುವ ವರದಿ ಬಗ್ಗೆ ಸಂಪುಟದಲ್ಲಿ ವಿಸ್ತೃತ ಚರ್ಚೆ ನಡೆಸಲಾಯಿತು.
ರಾಜ್ಯಪಾಲರ ಪತ್ರಕ್ಕೆ ಉತ್ತರ ನೀಡಿ, ಪತ್ರವನ್ನು ಹಿಂಪಡೆಯುವಂತೆ, ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪೂರ್ಣ ಮಾಹಿತಿ ಒದಗಿಸಲು ತೀರ್ಮಾನಿಸಲಾಯಿತು.
ಖಾಸಗಿ ವ್ಯಕ್ತಿ ದೂರು
ಪ್ರತಿಪಕ್ಷ ಬಿಜೆಪಿ ಶಾಸಕರು ಮತ್ತು ಖಾಸಗಿ ವ್ಯಕ್ತಿಯೊಬ್ಬರು ನೀಡಿರುವ ದೂರಿನ ಆಧಾರದ ಮೇಲೆ ರಾಜ್ಯಪಾಲರು ಇಂತಹ ನಿರ್ಣಯಕ್ಕೆ ಬಂದಿದ್ದಾರೆ ಎಂದು ಸಭೆ ಅಭಿಪ್ರಾಯಪಟ್ಟಿತು.
ರಾಜ್ಯಪಾಲರ ನೋಟಿಸ್ ಸಂಪೂರ್ಣ ರಾಜಕೀಯ ಪ್ರೇರಿತವಾಗಿದೆ, ಇದಕ್ಕೆ ಸರ್ಕಾರ ಮಾನ್ಯತೆ ನೀಡುವ ಅಗತ್ಯವಿಲ್ಲ ಎಂಬ ನಿಲುವನ್ನು ಸಭೆ ವ್ಯಕ್ತಪಡಿಸಿತು.
ಸಚಿವ ಸಂಪುಟ ಸಭೆಗೂ ಮುನ್ನ ಮುಖ್ಯಮಂತ್ರಿ ಅವರ ಸರ್ಕಾರಿ ನಿವಾಸ ಕಾವೇರಿಯಲ್ಲಿ ನಡೆದ ಉಪಹಾರ ಕೂಟದಲ್ಲೂ ಸಿದ್ದರಾಮಯ್ಯ ಅವರು, ತಮ್ಮ ಸಂಪುಟದ ಸಹೋದ್ಯೋಗಿಗಳೊಂದಿಗೆ ಮುಡಾ ಹಗರಣಕ್ಕೆ ಸಂಬಂಧಿಸಿದ ಮಾಹಿತಿ ಹಂಚಿಕೊಂಡರು.
ಉದ್ದೇಶ ಪೂರ್ವಕ ನೋಟಿಸ್
ರಾಜ್ಯಪಾಲರು ಉದ್ದೇಶ ಪೂರ್ವಕವಾಗಿ ನೋಟಿಸ್ ನೀಡಿದ್ದಾರೆ, ರಾಜಭವನವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದರು.
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನೇ ಖುದ್ದಾಗಿ ರಾಜ್ಯಪಾಲರನ್ನು ಭೇಟಿ ಮಾಡಿ ಎಲ್ಲಾ ದಾಖಲೆಗಳನ್ನು ನೀಡಿದರೂ ದುರುದ್ದೇಶ ಪೂರ್ವಕವಾಗಿ ನೋಟಿಸ್ ನೀಡಿದ್ದಾರೆ.
ಒಂದು ವೇಳೆ ಹಗರಣವನ್ನು ಪ್ರಾಸಿಕ್ಯೂಷನ್‌ಗೆ ನೀಡಿದರೆ, ಕಾನೂನು ಹೋರಾಟ ನಡೆಸೋಣ ಎಂದು ಮುಖ್ಯಮಂತ್ರಿ ಅವರು ಹೇಳಿದ್ದಿಕ್ಕೆ ಸಚಿವರು ಸಹಮತ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ವರಿಷ್ಠರು ನನ್ನ ಪರ
ಈ ವಿಷಯದಲ್ಲಿ ಕಾಂಗ್ರೆಸ್ ವರಿಷ್ಠರು ನನ್ನ ಪರ ಇದ್ದಾರೆ, ಕಳೆದ ಎರಡು ದಿನಗಳ ಹಿಂದೆ ತಾವು ದೆಹಲಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಅಧಿನಾಯಕ ರಾಹುಲ್ ಗಾಂಧಿ, ಪ್ರಧಾನಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರಿಗೆ ಎಲ್ಲಾ ಮಾಹಿತಿ ಮತ್ತು ದಾಖಲೆಗಳನ್ನು ನೀಡಿದ್ದೇನೆ.
ತಾವು ಯಾವುದೇ ರೀತಿಯ ಅಕ್ರಮ ಎಸಗಿಲ್ಲ ಎಂಬುದನ್ನು ಸ್ಪಷ್ಟವಾಗಿ ಹೇಳಿದ್ದೇನೆ, ಸದ್ಯದ ಬೆಳವಣಿಗೆ ಬಗ್ಗೆ ರಾಹುಲ್ ಗಾಂಧಿ ಬೇಸರಗೊಂಡರಲ್ಲದೆ, ಕಾನೂನು ಹೋರಾಟ ನಡೆಸಿ ಎಂದು ತಿಳಿಸಿದ್ದಾರೆ.
ಕಾನೂನು ಹೋರಾಟದಲ್ಲಿ ಯಶಸ್ವಿಯಾಗಿ ಬರುತ್ತೇನೆ ಎಂದು ಮುಖ್ಯಮಂತ್ರಿ ಸಭೆಗೆ ತಿಳಿಸಿದ್ದಾರೆ.
ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನ
ಬಿಜೆಪಿಯೇತರ ಆಡಳಿತ ಇರುವ ರಾಜ್ಯಗಳಲ್ಲಿ ಮಾಡಿದಂತೆ ಕರ್ನಾಟಕದಲ್ಲೂ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ನಡೆದಿದೆ, ಅನೇಕ ರಾಜ್ಯಗಳಲ್ಲಿ ರಾಜಭವನವನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ.
ಬಿಜೆಪಿ ವಿರುದ್ಧ ಹೋರಾಟ ತೀವ್ರಗೊಳಿಸಬೇಕು, ಕೇಂದ್ರದ ಯತ್ನ ವಿಫಲಗೊಳಿಸಲು ತೀವ್ರ ಹೋರಾಟ ನಡೆಸೋಣ ಎಂದು ಮುಖ್ಯಮಂತ್ರಿ ತಿಳಿಸಿದ್ದಲ್ಲದೆ, ರಾಜಕೀಯವಾಗಿ ಅಷ್ಟೇ ಅಲ್ಲದೆ, ಕೇಂದ್ರದ ನೀತಿಗಳ ವಿರುದ್ಧವೂ ಕಾನೂನಾತ್ಮಕ ಹೋರಾಟ ನಡೆಸುವ ತೀರ್ಮಾನ ತೆಗೆದುಕೊಳ್ಳೋಣ ಎಂದರು.