ಮಂತ್ರಿಮಂಡಲ ಭ್ರಷ್ಟಾಚಾರದಲ್ಲಿ ಮುಳುಗಿದೆ
ಬೆಂಗಳೂರು: ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಭ್ರಷ್ಟ ಕಾಂಗ್ರೆಸ್ ಸರ್ಕಾರವು ಹಣವನ್ನು ಲೂಟಿ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗಾಂಧಿ ಕುಟುಂಬಕ್ಕೆ ಕಪ್ಪ ಕಾಣಿಕೆ ಸಲ್ಲಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಟೀಕಿಸಿದರು.
ಮೈಸೂರು ಚಲೋ ಪಾದಯಾತ್ರೆಯ ಎರಡನೇ ದಿನವಾದ ಇಂದು ಬಿಡದಿಯಲ್ಲಿ ಪಾದಯಾತ್ರೆಗೆ ಚಾಲನೆ ಕೊಟ್ಟು ಅವರು ಮಾತನಾಡಿದರು. ಪರಿಶಿಷ್ಟ ಜಾತಿ, ಪಂಗಡದ ಪರವಾಗಿ, ಬಡ ಜನರ ಪರವಾಗಿ ಪ್ರಶ್ನಿಸಿದ ವಿಪಕ್ಷಕ್ಕೆ ಉತ್ತರ ಕೊಡಬೇಕಾದ ಆಡಳಿತ ಪಕ್ಷದವರು ವಿಪಕ್ಷಕ್ಕೇ ಮರುಪ್ರಶ್ನೆ ಹಾಕುತ್ತಿದ್ದಾರೆ ಎಂದು ಆಕ್ಷೇಪಿಸಿದರು.
ಮುಖ್ಯಮಂತ್ರಿಯವರೇ, ನೀವು ರಾಜ್ಯದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಹಿಂದದ ಅಭಿವೃದ್ಧಿ ಹೆಸರಿನಿಂದ ಅಧಿಕಾರಕ್ಕೆ ಬಂದಿದ್ದೀರಿ. ನಿಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಅವರ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ಲೂಟಿ ಮಾಡಿದ್ದನ್ನು ಸ್ವತಃ ಮುಖ್ಯಮಂತ್ರಿಗಳಾದ ನೀವೇ ಸದನದಲ್ಲಿ ಒಪ್ಪಿಕೊಂಡಿದ್ದೀರಿ. ವಾಲ್ಮೀಕಿ ನಿಗಮದಲ್ಲಿ ಹಗರಣ ಆದುದನ್ನು ಒಪ್ಪಿಕೊಂಡಿದ್ದೀರಲ್ಲವೇ? ನೀವು ನಮಗೆ ಉತ್ತರ ಕೊಡಬೇಕಿದೆ ಎಂದು ಆಗ್ರಹಿಸಿದರು.
ಡಿ.ಕೆ. ಶಿವಕುಮಾರ್ ಅವರು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಅಧಿಕಾರದ ದರ್ಪ, ಅಧಿಕಾರದ ಅಹಂನಿಂದ ಉಪ ಮುಖ್ಯಮಂತ್ರಿಯವರು ಮಾತನಾಡುತ್ತಿದ್ದಾರೆ. ಅವರು ರಾಜ್ಯದ ಜನತೆಗೆ ಉತ್ತರ ಕೊಡಬೇಕಿದೆ ಎಂದು ಒತ್ತಾಯಿಸಿದರು.
ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಬಿಡದಿಯಲ್ಲಿರುವ ಟೊಯೊಟಾ ಫ್ಯಾಕ್ಟರಿ ಕೂಡ ಹೊರರಾಜ್ಯಕ್ಕೆ ಹೋಗುವ ಪರಿಸ್ಥಿತಿ ಉದ್ಭವವಾಗಿದೆ. ಹೊಸ ಉದ್ಯಮಗಳು, ಕೈಗಾರಿಕೆಗಳು ನಮ್ಮ ರಾಜ್ಯಕ್ಕೆ ಬರುತ್ತಿಲ್ಲ. ಯುವಕರಿಗೆ ಉದ್ಯೋಗ ಸಿಗುತ್ತಿಲ್ಲ. ನಿಮ್ಮ ದುರಹಂಕಾರದ ನಡವಳಿಕೆಯಿಂದ ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಆಗುತ್ತಿಲ್ಲ; ಲೂಟಿ ಮಾಡುತ್ತಾ ಕುಳಿತಿದ್ದೀರಿ ಎಂದು ಟೀಕಿಸಿದರು.
ಸಿಎಂ ರಾಜೀನಾಮೆ ಬಗ್ಗೆ ಅನುಮಾನವಿಲ್ಲ
ಇದೇ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮದು ವಿರೋಧ ಪಕ್ಷ. ರಾಜ್ಯದ ಜನರ ಪರವಾಗಿ ನಾವು ಕೇಳುವ ಪ್ರಶ್ನೆಗೆ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಉತ್ತರ ನೀಡಬೇಕು. ಅದರ ಬದಲಾಗಿ ನಮಗೇ ಪ್ರಶ್ನೆ ಹಾಕುತ್ತಿದ್ದು, ಇದು ಹಾಸ್ಯಾಸ್ಪದ ಎಂದು ಟೀಕಿಸಿದರು.
ಸದನದಲ್ಲೂ ನಮ್ಮ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ. ಇವತ್ತೂ ಉತ್ತರ ಸಿಕ್ಕಿಲ್ಲ. ಈ ಪಾದಯಾತ್ರೆ ಮೂಲಕ ಇವರಿಗೆ ಚಾಟಿ ಬೀಸುವ ಮತ್ತು ಬುದ್ಧಿ ಕಲಿಸುವ ಕೆಲಸ ಮಾಡುತ್ತೇವೆ ಎಂದು ಪ್ರಶ್ನೆಗೆ ಉತ್ತರ ಕೊಟ್ಟರು.
ಸಿದ್ದರಾಮಯ್ಯನವರು ರಾಜೀನಾಮೆ ಕೊಡುವ ದಿನಗಳು ಹತ್ತಿರ ಆಗುತ್ತಿವೆಯೇ ಎಂಬ ಪ್ರಶ್ನೆಗೆ ‘ನನಗೇನೂ ಇದರಲ್ಲಿ ಅನುಮಾನ ಇಲ್ಲ’ ಎಂದು ಉತ್ತರಿಸಿದರು. ಸಿದ್ದರಾಮಯ್ಯನವರು ರಾಜ್ಯದ ಮುಖ್ಯಮಂತ್ರಿಗಳು. ತಮ್ಮ ರಾಜಕೀಯ ಜೀವನದಲ್ಲಿ ಕಪ್ಪು ಚುಕ್ಕಿ ಇಲ್ಲ ಎಂದು ಮೊಂಡುವಾದ ಮಾಡುತ್ತಿದ್ದರು. ಇವತ್ತು ಅವರು ಹಗರಣಗಳ ಸರಮಾಲೆಯಲ್ಲಿ ಸಿಲುಕಿ ಹಾಕಿಕೊಂಡಿದ್ದಾರೆ. ನಿನ್ನೆ ಯಾದಗಿರಿಯಲ್ಲಿ ಪಿಎಸ್‌ಐ ಪರಶುರಾಮ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದರ ಹಿಂದಿನ ಕಾರಣ ರಾಜ್ಯದ ಜನತೆಗೆ ಗೊತ್ತಿದೆ. ರಾಜ್ಯದ ಆಡಳಿತ ಪಕ್ಷದ ಪರಿಸ್ಥಿತಿ ಹಿರಿಯಕ್ಕನ ಚಾಳಿ ಮನೆಮಂದಿಗೆ ಎಂಬಂತಾಗಿದೆ ಎಂದು ಟೀಕಿಸಿದರು.
ಮುಖ್ಯಮಂತ್ರಿಗಳು ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ; ಸ್ವತಃ ಮಂತ್ರಿಮಂಡಲ ಭ್ರಷ್ಟಾಚಾರದಲ್ಲಿ ಮುಳುಗಿದೆ. ಅದೇರೀತಿ ಆಡಳಿತ ಪಕ್ಷದ ಶಾಸಕರೂ ಭ್ರಷ್ಟಾಚಾರದಲ್ಲಿ ನಿರತರಾಗಿದ್ದಾರೆ ಎಂದು ಆಕ್ಷೇಪಿಸಿದರು.
ಕರ್ನಾಟಕದಲ್ಲಿ ಸರ್ಕಾರಿ ಅಧಿಕಾರಿಗಳು, ಗುತ್ತಿಗೆ ಹಣ ಸಿಗದೆ ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಶಾಸಕರು ಕೇಳಿದ ಲಂಚ ಕೊಡಲಾಗದೆ ಪಿಎಸ್‌ಐ ಪರಶುರಾಮ್ ನಿನ್ನೆ ಸಾವನ್ನಪ್ಪಿದ್ದಾರೆ. ಭ್ರಷ್ಟಾಚಾರರಹಿತ ಆಡಳಿತ ಕೊಡುವುದಾಗಿ ಹೇಳಿಕೊಂಡು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷವು ಇಂದು ಹಗರಣಗಳಲ್ಲಿ ತನ್ನನ್ನು ತೊಡಗಿಸಿಕೊಂಡಿದೆ ಎಂದು ಟೀಕಿಸಿದರು.