ಮಂಡ್ಯ: ವರಮಹಾಲಕ್ಷ್ಮೀ ಹಬ್ಬಕ್ಕೆ ರಾಜ್ಯದ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ ಎರಡು ತಿಂಗಳ ಹಣ ಜಮೆ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಇಂದಿಲ್ಲಿ ತಿಳಿಸಿದ್ದಾರೆ.
ಕಾಂಗ್ರೆಸ್ ಜನಾಂದೋಲನ ಸಮಾವೇಶದಲ್ಲಿ ಮಾತನಾಡಿದ ಅವರು, ತಾಂತ್ರಿಕ ಕಾರಣಗಳಿಂದ ಕಳೆದ ಎರಡು-ಮೂರು ತಿಂಗಳಿಂದ ಗೃಹಲಕ್ಷ್ಮೀ ಯೋಜನೆಯ ಮಾಸಿಕ ತಲಾ 2000 ರೂ. ಸಹಾಯಧನ ಮನೆಯೊಡತಿಯ ಬ್ಯಾಂಕ್ ಖಾತೆಗೆ ಜಮೆ ಆಗಿರಲಿಲ್ಲ, ಇವತ್ತಿನಿಂದ ಜೂನ್, ಜುಲೈ ತಿಂಗಳ ಹಣ ಜಮೆ ಆಗಲಿದೆ ಎಂದು ಘೋಷಿಸಿದರು.
ಗೃಹಲಕ್ಷ್ಮಿ ಯೋಜನೆಯ ಜೂನ್ ತಿಂಗಳ ಹಣ ಬಿಡುಗಡೆ ಪ್ರಕ್ರಿಯೆ ಆರಂಭವಾಗಿದೆ, ನಾಳೆಯೊಳಗೆ 26.65 ಲಕ್ಷ ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಸಂದಾಯವಾಗಲಿದೆ.
ಮೊದಲ ಹಂತದಲ್ಲಿ 533 ಕೋಟಿ ರೂ.
ಮೊದಲ ಹಂತದಲ್ಲಿ ಬೆಳಗಾವಿ, ಕಲಬುರಗಿ, ಬೀದರ್, ವಿಜಯಪುರ, ಬಳ್ಳಾರಿ, ರಾಯಚೂರು, ಗದಗ, ಬಾಗಲಕೋಟೆ, ಹಾವೇರಿ, ಕೊಪ್ಪಳ, ಯಾದಗಿರಿ, ಚಿತ್ರದುರ್ಗ, ಬೆಂಗಳೂರು, ಕೋಲಾರ ಜಿಲ್ಲೆಗಳ ಫಲಾನುಭವಿಗಳಿಗೆ 533 ಕೋಟಿ ರೂ. ಪಾವತಿಯಾಗಲಿದೆ.
ಲೋಕಸಭಾ ಚುನಾವಣಾ ನೀತಿ ಸಂಹಿತೆಯಿಂದಾಗಿ ಗೃಹಲಕ್ಷ್ಮಿ ಯೋಜನೆಯ ಜೂನ್ ಮತ್ತು ಜುಲೈ ತಿಂಗಳ ಕಂತಿನ ಹಣ ತಡವಾಗಿದೆ, ಆದರೆ, ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಇತ್ತೀಚೆಗೆ ತಿಳಿಸಿದ್ದರು.
ಸರ್ಕಾರದಿಂದ ಶುಭ ಸುದ್ದಿ
ಇದೀಗ ಗೃಹಲಕ್ಷ್ಮೀ ಯೋಜನೆ ಹಣ ಬಿಡುಗಡೆ ಮೂಲಕ ವರಲಕ್ಷ್ಮೀ ಹಬ್ಬಕ್ಕೆ ರಾಜ್ಯದ ಮನೆಯೊಡತಿಗೆ ಕಾಂಗ್ರೆಸ್ ಸರ್ಕಾರ ಶುಭ ಸುದ್ದಿ ನೀಡಿದೆ.
ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಹಣ ಜಮೆ ಆಗದಿರುವುದಕ್ಕೆ ಮಹಿಳೆಯರು ತೀವ್ರ ಅಸಮಾಧಾನಗೊಂಡಿದ್ದರು.
ಇದೀಗ ಕಳೆದ ಎರಡು ತಿಂಗಳ ಹಣವನ್ನು ಒಮ್ಮೆಲೆ ಜಮೆ ಮಾಡುವುದಾಗಿ ಸರ್ಕಾರ ತಿಳಿಸಿದೆ.
ವಿರೋಧ ಪಕ್ಷಗಳ ಟೀಕೆ
ಗೃಹಲಕ್ಷ್ಮಿ ಹಣ ಬಿಡುಗಡೆ ಮಾಡದಿರುವುದಕ್ಕೆ ವಿರೋಧ ಪಕ್ಷಗಳು ಕಾಂಗ್ರೆಸ್ ಸರ್ಕಾರವನ್ನು ಟೀಕಿಸುತ್ತಿದ್ದವು.
ಗ್ಯಾರಂಟಿ ಭರವಸೆಗಳನ್ನು ಈಡೇರಿಸುವಲ್ಲಿ ಸರ್ಕಾರ ಆರ್ಥಿಕ ದಿವಾಳಿಯಾಗಿದೆ, ಯೋಜನೆಗಳನ್ನು ಮುಂದುವರೆಸಲು ಸಾಧ್ಯವಾಗುತ್ತಿಲ್ಲ ಎಂದು ಸರ್ಕಾರವನ್ನು ಬಿಜೆಪಿ ನಾಯಕರು ಟೀಕಿಸಿದ್ದರು.
ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ, ಸರ್ಕಾರ ಹಣ ಹೊಂದಿಸುತ್ತದೆ, ಎರಡು ತಿಂಗಳ ಹಣ ಗೃಹಲಕ್ಷ್ಮಿಯರ ಖಾತೆಗೆ ಜಮೆಯಾಗಲಿದೆ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದರು.