ಸಹಕಾರ ಸಚಿವ ಕೆ.ಎನ್.ರಾಜಣ್ಣ ಸಿಡಿಸಿದ ಹೊಸ ಬಾಂಬ್
ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರದಿಂದ ಕೆಳಗಿಳಿದರೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮುಂದಿನ ಮುಖ್ಯಮಂತ್ರಿ ಆಗಿಲಿದ್ದಾರೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಇಂದಿಲ್ಲಿ ಹೊಸ ಬಾಂಬ್ ಸಿಡಿಸಿದ್ದಾರೆ.
ಮಹರ್ಷಿ ವಾಲ್ಮೀಕಿ ನಿಗಮದ ಹಗರಣ ಹಾಗೂ ಮುಡಾ ಬಿಡಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ವಿರುದ್ಧ ಆರೋಪ ಹಾಗೂ ರಾಜ್ಯಪಾಲರು ಕಾನೂನು ಕ್ರಮ ಜರುಗಿಸಬಹುದೆಂಬ ಬೆನ್ನಲ್ಲೇ ರಾಜಣ್ಣ ಇಂತಹ ಹೇಳಿಕೆ ನೀಡಿದ್ದಾರೆ.
ಸಿದ್ದರಾಮಯ್ಯ ತಪ್ಪು ಮಾಡಿಲ್ಲ
ಸಿದ್ದರಾಮಯ್ಯ ಅವರು ತಪ್ಪು ಮಾಡಿಲ್ಲ, ಅವರನ್ನು ರಾಜಕೀಯವಾಗಿ ಮುಗಿಸಲು ವಿರೋಧಿಗಳು ಸಂಚು ರೂಪಿಸುತ್ತಿದ್ದಾರೆ, ಸದ್ಯಕ್ಕೆ ಅವರ ಹುದ್ದೆಗೆ ತೊಂದರೆ ಇಲ್ಲ, ನಾವು ಅವರ ಬೆನ್ನೆಲುಬಾಗಿ ನಿಂತುಕೊಳ್ಳುತ್ತೇವೆ ಎಂದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಚಿನ ಫಲವಾಗಿ ಸಿದ್ದರಾಮಯ್ಯ ಅಧಿಕಾರದಿಂದ ಕೆಳಗಿಳಿಯಲೇಬೇಕೆಂದಾದರೆ ಸತೀಶ್ ಜಾರಕಿಹೊಳಿ ನಮ್ಮ ನಾಯಕ, ಅವರೇ ಮುಂದೆ ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದಾರೆ ಎನ್ನುವ ಮೂಲಕ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಟಾಂಗ್ ಕೊಟ್ಟಿದ್ದಾರೆ.
ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮುಂದಿನ ಮುಖ್ಯಮಂತ್ರಿ ಎನ್ನುತ್ತಿದ್ದ ರಾಜಣ್ಣ ಈಗ ಜಾರಕಿಹೊಳಿ ಅವರನ್ನು ಆ ಸ್ಥಾನಕ್ಕೆ ತರುತ್ತಿದ್ದಾರೆ.
ಸದ್ಯಕ್ಕೆ ನಾಯಕತ್ವ ಬದಲಾವಣೆ ಇಲ್ಲ
ರಾಜಣ್ಣ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ ಸತೀಶ್ ಅವರು, ಸಿದ್ದರಾಮಯ್ಯ ಪೂರ್ಣಾವಧಿ ಮುಖ್ಯಮಂತ್ರಿ ಆಗಿರುತ್ತಾರೆ, 2028ಕ್ಕೆ ನಾನು ಮುಖ್ಯಮಂತ್ರಿ ಹುದ್ದೆಗೇರುತ್ತೇನೆ, ಈಗ ಸದ್ಯಕ್ಕೆ ನಮ್ಮಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದಿದ್ದಾರೆ.
ಮುಂದುವರಿದು ಮಾತನಾಡಿದ ರಾಜಣ್ಣ ಅವರು, ಸಚಿವ ಸತೀಶ್ ಜಾರಕಿಹೊಳಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ಸಂಬಂಧ ಕೆಟ್ಟಿದೆ ಎಂಬ ವರದಿಗಳು ಊಹಾಪೋಹದಿಂದ ಕೂಡಿವೆ, ವಾಸ್ತವ ಸಂಗತಿಯೆಂದರೆ ಅವರಿಬ್ಬರ ನಡುವೆ ಉತ್ತಮ ಬಾಂಧವ್ಯ ಇದೆ.
ಇಬ್ಬರ ನಡುವೆ ಅಂತರ ಹೆಚ್ಚುತ್ತಿದೆ ಎಂಬುದು ಸುಳ್ಳು ವದಂತಿ, ಹಾಗೆಯೇ ಕಾಂಗ್ರೆಸ್‌ನಲ್ಲೂ ಸಿದ್ದರಾಮಯ್ಯ ಅವರ ಬಗ್ಗೆ ಅಸಮಾಧಾನವಿದೆ ಎಂಬುದೂ ಸರಿಯಲ್ಲ.
ಅತ್ಯುನ್ನತ ಹುದ್ದೆ ಅವಕಾಶ
ಇಬ್ಬರು ನಾಯಕರ ನಡುವಿನ ಸಂಬಂಧಗಳ ಬಗ್ಗೆ ಉಂಟಾಗಿರುವ ಅನುಮಾನಗಳೆಲ್ಲಾ ಬರಿಯ ಊಹಾಪೋಹಗಳು, ಪರಿಶಿಷ್ಟ ಸಮುದಾಯದಲ್ಲಿ ಸತೀಶ್ ಜಾರಕಿಹೊಳಿ ಸಹಾ ಒಬ್ಬ ನಾಯಕರು ಅವರಿಗೆ ಮುಂದಿನ ದಿನಗಳಲ್ಲಿ ಅತ್ಯುನ್ನತ ಹುದ್ದೆ ಲಭ್ಯವಾಗುವ ಅವಕಾಶವಿದೆ ಎಂದರು.
ಮುಡಾ ಬಿಡಿ ನಿವೇಶನ ಹಂಚಿಕೆ ಅಕ್ರಮ ಆರೋಪ ಪ್ರಕರಣದಲ್ಲಿ ರಾಜ್ಯಪಾಲರು ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದರೂ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ಕೊಡುವ ಅಗತ್ಯವಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಉದಾಹರಣೆ ಉಲ್ಲೇಖಿಸಿದರು.
ಕರ್ನಾಟಕದಲ್ಲಿ ಹೆಚ್ಚುವರಿ ಉಪಮುಖ್ಯಮಂತ್ರಿಗಳ ಹುದ್ದೆ ಸೃಷ್ಟಿಯ ಅಗತ್ಯವಿದೆ, ಇತರ ಸಮುದಾಯಗಳಿಗೂ ಸೂಕ್ತ ಪ್ರಾತಿನಿಧ್ಯ ನೀಡಬೇಕಿದೆ ಎಂದರು.
ಬಿಜೆಪಿ-ಜೆಡಿಎಸ್ ಹಗರಣ
ಈ ಹಿಂದಿನ ಬಿಜೆಪಿ ಸರ್ಕಾರ ಹಾಗೂ ಎಚ್.ಡಿ.ಕುಮಾರಸ್ವಾಮಿ ಆಡಳಿತ ಸಂದರ್ಭದಲ್ಲಿ ನಡೆದ ಅವ್ಯವಹಾರ ಹಗರಣಗಳನ್ನು ಕಾಂಗ್ರೆಸ್ ಬಯಲಿಗೆಳೆಯಲಿದೆ.
ಪಕ್ಷದ ಹೈಕಮಾಂಡ್ ಸೂಚನೆ ಮೇರೆಗೆ ಒಂದೇ ಸೈದ್ಧಾಂತಿಕ ಮನಸ್ಥಿತಿ ಹೊಂದಿರುವ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಪರಸ್ಪರ ಸಹಕಾರದೊಂದಿಗೆ ಮುಂದುವರೆಯಲಿದ್ದಾರೆ ಎಂದರು.