ಬೆಂಗಳೂರು:ರಾಜ್ಯಪಾಲರ ನಿರ್ಣಯ ಸಂವಿಧಾನಬಾಹಿರವಾಗಿದ್ದು, ಅವರು ನೀಡಿರುವ ಪ್ರಾಸಿಕ್ಯೂಷನ್ ಅನುಮತಿ ವಿರುದ್ಧ ಕಾನೂನು ಹೋರಾಟ ನಡೆಸುತ್ತೇನೆಯೇ ಹೊರತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಸಿದ್ದರಾಮಯ್ಯ ಇಂದಿಲ್ಲಿ ಘೋಷಿಸಿದ್ದಾರೆ.
ಕೇಂದ್ರ ಸರ್ಕಾರದ ಕೈಗೊಂಬೆಯಾಗಿರುವ ರಾಜ್ಯಪಾಲರು ಮುಡಾ ಹಗರಣ ಆರೋಪ ಸಂಬಂಧ ತೆಗೆದುಕೊಂಡಿರುವ ನಿರ್ಣಯ ಚುನಾಯಿತ ಸರ್ಕಾರವನ್ನು ಅಭದ್ರಗೊಳಿಸುವ ಷಡ್ಯಂತ್ರವಾಗಿದೆ ಎಂದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ವಿರುದ್ಧ ದೂರು ಬಂದ ದಿನವೇ ರಾಜ್ಯಪಾಲರು ಶೋಕಾಸ್ ನೋಟಿಸ್ ನೀಡಿದ್ದರು, ಅವರ ಇಂದಿನ ಈ ನಡೆಯನ್ನು ಮೊದಲೇ ನಿರೀಕ್ಷಿಸಿದ್ದೆ.
ಶಾಸಕರು, ಸಚಿವರು, ವರಿಷ್ಠರು ನನ್ನ ಪರ
ಶಾಸಕರು, ಸಂಪುಟ ಸಚಿವರು, ಪಕ್ಷದ ವರಿಷ್ಠರೆಲ್ಲರೂ ನನ್ನ ಪರವಾಗಿದ್ದಾರೆ, ನಾನು ಮಾಡದ ತಪ್ಪಿಗೆ ರಾಜೀನಾಮೆ ಏಕೆ ನೀಡಬೇಕು ಎಂದು ಪ್ರಶ್ನಿಸಿದರು.
ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರ ರಾಜ್ಯಪಾಲರನ್ನು ರಾಜಕೀಯ ದಾಳವಾಗಿ ಬಳಸಿಕೊಳ್ಳುತ್ತಿದೆ, ಬಿಜೆಪಿಯವರಿಗೆ ನನ್ನ ರಾಜೀನಾಮೆ ಕೇಳಲು ಯಾವುದೇ ನೈತಿಕತೆ ಇಲ್ಲ.
ಕಾಂಗ್ರೆಸ್ ಸರ್ಕಾರ ಹಾಗೂ ಗ್ಯಾರಂಟಿ ಯೋಜನೆಗಳ ಯಶಸ್ಸು ಅವರಿಗೆ ಸಹಿಸಲು ಆಗುತ್ತಿಲ್ಲ, ಕೇಂದ್ರ ಸರ್ಕಾರ ಸಾಮಾಜಿಕ ನ್ಯಾಯ ಹಾಗೂ ನಮ್ಮ ಪಂಚ ಯೋಜನೆಗಳ ವಿರುದ್ಧವಾಗಿದೆ, ಬಿಜೆಪಿಯ ಈ ನಿಲುವಿಗೆ ಜೆಡಿಎಸ್ ಬೆಂಬಲ ನೀಡಿದೆ.
ಬಿಜೆಪಿ-ಜೆಡಿಎಸ್ ಷಡ್ಯಂತ್ರ
ಕಾಂಗ್ರೆಸ್ ಅಧಿಕಾರಕ್ಕೆ ಬಂದ ದಿನದಿಂದಲೂ ಅಭದ್ರಗೊಳಿಸುವ ದೊಡ್ಡ ಷಡ್ಯಂತ್ರ ನಡೆದೇ ಇತ್ತು, ಈಗ ಬಿಜೆಪಿ-ಜೆಡಿಎಸ್ ಹಾಗೂ ರಾಜ್ಯದ ಕೆಲವು ಮುಖಂಡರು ಈ ಷಡ್ಯಂತ್ರ ನಡೆಸಿದ್ದಾರೆ.
ಉತ್ತರಾಖಂಡ, ಜಾರ್ಖಂಡ್, ನವದೆಹಲಿಯಲ್ಲಿ ಮಾಡಿದಂತೆ ಕರ್ನಾಟಕದಲ್ಲೂ ಷಡ್ಯಂತ್ರ ನಡೆದಿದೆ, ಮೇಲ್ನೋಟಕ್ಕೆ ನನ್ನ ಮೇಲೆ ಯಾವುದೇ ಪ್ರಕರಣ ಇಲ್ಲ.
ನನ್ನ ವಿರುದ್ಧ ಪ್ರಾಸಿಕ್ಯೂಷನ್‌ಗೆ ನೀಡಿರುವುದು ಸಂವಿಧಾನಬಾಹಿರ, ಇದರ ವಿರುದ್ಧ ನಾನು ಕಾನೂನು ಹೋರಾಟ ನಡೆಸುತ್ತೇನೆ ಎಂದರು.
ಯಾವುದೇ ಕ್ರಮ ಆಗಿಲ್ಲ
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ, ಜನಾರ್ದನ ರೆಡ್ಡಿ ವಿರುದ್ಧ ರಾಜ್ಯಪಾಲರಿಗೆ ನೀಡಿರುವ ದೂರಿನ ಬಗ್ಗೆ ಇದುವರೆಗೆ ಯಾವುದೇ ಕ್ರಮ ಆಗಿಲ್ಲ.
ಕುಮಾರಸ್ವಾಮಿ ಅನಧಿಕೃತವಾಗಿ ಗಣಿಗಾರಿಕೆಗೆ ಪರವಾನಗಿ ನೀಡಿರುವ ವಿರುದ್ಧ ತನಿಖೆಗೆ ಲೋಕಾಯುಕ್ತ ಅನುಮತಿ ಕೋರಿದ್ದರೂ ಏಕೆ ಕ್ರಮ ಕೈಗೊಂಡಿಲ್ಲ ಎಂದು ಪ್ರಶ್ನಿಸಿದರು.