ಬೆಂಗಳೂರು:ರಾಜ್ಯಪಾಲ ಹಂಸರಾಜ ಭಾರದ್ವಾಜ 2011ರಲ್ಲಿ ಆಗಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧದ ರಾಚೇನಹಳ್ಳಿ ಡಿ-ನೋಟಿಫಿಕೇಷನ್ ಹಗರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದಾಗ ಮುಖ್ಯಮಂತ್ರಿ ರಾಜೀನಾಮೆ ಏಕೆ ನೀಡಬೇಕು ಎಂಬುದಾಗಿ ಕೇಳಿದ್ದ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಇಂದು ನನ್ನ ರಾಜೀನಾಮೆ ಕೇಳುತ್ತಿರುವುದು ಹಾಸ್ಯಾಸ್ಪದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಮುಖ್ಯಮಂತ್ರಿ, 2011ರ ಜನವರಿ 21ರಂದು, ಯಡಿಯೂರಪ್ಪ ವಿರುದ್ಧ ಅರ್ಜಿದಾರರು ನೀಡಿದ್ದ 1,600 ಪುಟಗಳ ದಾಖಲೆಗಳ ಸಾಕ್ಷ್ಯ ಪರಿಶೀಲಿಸಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದರು, ಆದರೂ, ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರಲಿಲ್ಲ ಎಂದರು.
ಶಾಂತಿಯುತ ಪ್ರತಿಭಟನೆ
ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಪರ ಮಾತನಾಡುತ್ತಿರುವ ಆರ್.ಅಶೋಕ್ ಸೇರಿದಂತೆ ಬಿಜೆಪಿ ನಾಯಕರಿಗೆ 2011ರಲ್ಲಿ ರಾಜ್ಯಪಾಲ ಹಂಸರಾಜ ಭಾರದ್ವಾಜ ಅವರ ಅವಹೇಳನ ಮಾಡಿದ್ದು ಮರೆತಂತಿದೆ, ಕಾಂಗ್ರೆಸ್ ಕಾರ್ಯಕರ್ತರು ಶಾಂತಿಯುತ ಪ್ರತಿಭಟನೆ ನಡೆಸುತ್ತಿರುವುದನ್ನು ಪ್ರಶ್ನಿಸುತ್ತಿದ್ದಾರೆ, ಅಂದು ರಾಜ್ಯಪಾಲರ ನಡೆ ವಿರೋಧಿಸಿ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದು ಮರೆತುಹೋಗಿದೆಯೇ ಎಂದಿದ್ದಾರೆ.
ಆರ್.ಅಶೋಕ್ ತಮ್ಮ ಅಜ್ಞಾನ ಪ್ರದರ್ಶಿಸಿದ್ದಾರೆ, ಬೇಕಾಬಿಟ್ಟಿ ಹೇಳಿಕೆ ನೀಡುವ ಮೊದಲು ವಾಸ್ತವಾಂಶ ಪರಿಶೀಲಿಸಿ ಮಾತನಾಡಬೇಕು, ಈಗ ಯಾವ ನಾಲಗೆಯಲ್ಲಿ ನನ್ನ ರಾಜೀನಾಮೆ ಕೇಳುತ್ತಿದ್ದೀರಿ.
ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ನೇತೃತ್ವದ ಲೋಕಾಯುಕ್ತ, ಅಕ್ರಮ ಗಣಿಗಾರಿಕೆ ಪ್ರಕರಣ ಕುರಿತ ತನಿಖಾ ವರದಿಯನ್ನು ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರಿಗೆ ಸಲ್ಲಿಸಿದ ನಂತರ ಆಗಸ್ಟ್ ೪ರ 2011ರಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಎಂಬುದನ್ನು ಮರೆತಿದ್ದೀರಾ.
ಹಳೆಯದನ್ನು ನೆನಪಿಸಿಕೊಳ್ಳಿ
ಅಶೋಕ್ ಅವರೇ, ಹಳೆಯದ್ದನ್ನೆಲ್ಲವನ್ನೂ ನೆನಪಿಸಿಕೊಳ್ಳಿ, ಆಗ ನೀವೆಲ್ಲರೂ ಸೇರಿ ಯಡಿಯೂರಪ್ಪ ವಿರುದ್ಧವೇ ಏನೆಲ್ಲ ಕುತಂತ್ರ ಮಾಡಿದ್ದೀರಿ ಎನ್ನುವುದೂ ನೆನಪಾಗಬಹುದು.
ರಾಜ್ಯಪಾಲ ಹಂಸರಾಜ ಭಾರದ್ವಾಜ ಅವರ ಪ್ರಾಸಿಕ್ಯೂಷನ್ ನಿರ್ಧಾರ ನ್ಯಾಯಯುತವಾಗಿತ್ತು ಎಂಬುದಾಗಿ ಲೋಕಾಯುಕ್ತ ಸಂತೋಷ್ ಹೆಗ್ಡೆ ಅವರೇ ದೃಢೀಕರಿಸಿರಲಿಲ್ಲವೇ, ಆಗ ಒಂದಲ್ಲ, ಎರಡಲ್ಲ ಹದಿನೈದು ಡಿ-ನೋಟಿಫಿಕೇಷನ್ ಹಗರಣಗಳ ತನಿಖೆಗೆ ಅನುಮತಿ ನೀಡಿದ್ದರು, ಹೆಚ್ಚಿನ ಮಾಹಿತಿಗೆ ನ್ಯಾ.ಹೆಗ್ಡೆ ನೀಡಿದ್ದ ಅಕ್ರಮ ಗಣಿಗಾರಿಕೆಯ ತನಿಖಾ ವರದಿ ಓದಿಕೊಳ್ಳಿ ಎಂದು ಮುಖ್ಯಮಂತ್ರಿ ತಿರುಗೇಟು ನೀಡಿದ್ದಾರೆ.