ಬೆಂಗಳೂರು:ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ.) ದಿಂದ ತಮಗೆ ಯಾವುದೇ ನೋಟಿಸ್ ಬಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಚಿವಾಲಯ ಸ್ಪಷ್ಟಪಡಿಸಿದೆ.
ನಿಗಮದಲ್ಲಿ 187 ಕೋಟಿ ರೂ. ಹಗರಣ ನಡೆದ ಆರೋಪವಿದ್ದು, ನಿಗಮದ ಹಣಕಾಸು ಖಾತೆ ಹೊಂದಿದ್ದ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿತ್ತು.
ಸ್ವಯಂಪ್ರೇರಿತ ಮೊಕದ್ದಮೆ
ಭಾರೀ ಪ್ರಮಾಣದಲ್ಲಿ ಹಣಕಾಸಿನ ಅಕ್ರಮ ವಹಿವಾಟು ನಡೆದಿರುವ ಹಿನ್ನೆಲೆಯಲ್ಲಿ ಇ.ಡಿ. ಸ್ವಯಂಪ್ರೇರಿತ ಮೊಕದ್ದಮೆ ದಾಖಲಿಸಿಕೊಂಡು ಮಾಜಿ ಸಚಿವ ಬಿ.ನಾಗೇಂದ್ರ ಸೇರಿದಂತೆ ಕೆಲವರನ್ನು ವಶಕ್ಕೆ ಪಡೆದು ಜೈಲಿಗೆ ಕಳುಹಿಸಿದೆ.
ಸಿದ್ದರಾಮಯ್ಯ ಅವರ ಬಳಿಯೇ ಹಣಕಾಸು ಇಲಾಖೆ ಇರುವುದರಿಂದ, ಅವರ ಮೂಗಿನಡಿಯೇ ಹಗರಣ ನಡೆದಿದೆ ಎಂದು ಪ್ರತಿಪಕ್ಷಗಳು ಆರೋಪಿಸುತ್ತಿದ್ದವು, ಅಷ್ಟೇ ಅಲ್ಲ, ಮುಖ್ಯಮಂತ್ರಿ ವಿರುದ್ಧವೂ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ಒತ್ತಾಯಿಸಿದ್ದವು.
ಭಾರೀ ಚರ್ಚೆಗೆ ಗ್ರಾಸ
ಕಳೆದ ಎರಡು ದಿನದಿಂದ ಮುಖ್ಯಮಂತ್ರಿ ಅವರಿಗೆ ಇ.ಡಿ. ನೋಟಿಸ್ ನೀಡಿದೆ ಎಂಬ ಸುದ್ದಿ ರಾಜಕೀಯ ವಲಯ ಹಾಗೂ ಮಾಧ್ಯಮಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು.
ಇದರ ಬೆನ್ನಲ್ಲೇ ಮುಖ್ಯಮಂತ್ರಿ ಕಾರ್ಯಾಲಯ ತಮಗೆ ಇ.ಡಿ. ನೋಟಿಸ್ ಬಂದಿಲ್ಲ, ಇದೊಂದು ಫೇಕ್‌ನ್ಯೂಸ್ ಎಂದು ಕಿಡಿಕಾರಿದೆ.