ಬೆಂಗಳೂರು:ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ನಡೆದ ಎರಡು ಸಮಯದಾಯಗಳ ನಡುವಿನ ಸಂಘರ್ಷ ರಾಜ್ಯ ಸರ್ಕಾರವನ್ನು ಪೇಚಿಗೆ ಸಿಲುಕಿಸಿದೆ.
ಘಟನೆ ಬಗ್ಗೆ ಎನ್‌ಡಿಎ ಮೈತ್ರಿಕೂಟ ಪಕ್ಷಗಳು ತೀವ್ರ ಕಳವಳ ವ್ಯಕ್ತಪಡಿಸಿ, ಸರ್ಕಾರ ಎಲ್ಲಿಯವರೆಗೆ ಮತ ಬ್ಯಾಂಕ್ ಓಲೈಕೆ ಮಾಡುತ್ತದೋ ಅಲ್ಲಿಯವರೆಗೂ ಇಂತಹ ಪರಿಸ್ಥಿತಿ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿವೆ.
ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಇಂತಹ ಕೋಮು ಸಂಘರ್ಷ ನಡೆದಿರುವುದು ಸರ್ಕಾರಕ್ಕೆ ಮುಜುಗರ ತಂದಿದೆ.
ಕಿಡಿಗೇಡಿಗಳ ದುಷ್ಕೃತ್ಯ
ಘಟನೆ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಕಿಡಿಕಾರಿರುವ ಮುಖ್ಯಮಂತ್ರಿ ಅವರು, ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಕಲ್ಲು ತೂರಾಟವು ಸಮಾಜದ ಶಾಂತಿಗೆ ಧಕ್ಕೆ ತರಲು ಕಿಡಿಗೇಡಿಗಳು ನಡೆಸಿರುವ ದುಷ್ಕೃತ್ಯ ಎಂಬುದು ನಿಸ್ಸಂಶಯ, ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದಿದ್ದಾರೆ.
ಈ ಹೇಳಿಕೆ ನೀಡಿದ ತಕ್ಷಣವೇ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹಾಗೂ ಮಂಡ್ಯ ಜಿಲ್ಲೆ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರನ್ನು ಸಂಪರ್ಕಿಸಿ ಘಟನೆ ಬಗ್ಗೆ ಮಾಹಿತಿ ಪಡೆದಿದ್ದಲ್ಲದೆ, ಇಂತಹ ಕೃತ್ಯಗಳನ್ನು ಮೊಳಕೆಯಲ್ಲೇ ಚಿವುಟಿ ಹಾಕುವಂತೆ ಸೂಚಿಸಿದ್ದಾರೆ.
ಮುಖ್ಯಮಂತ್ರಿ ಅವರ ಆದೇಶದ ಹಿನ್ನೆಲೆಯಲ್ಲಿ ಗೃಹ ಮಂತ್ರಿ ಅವರು, ವಿಧಾನಸೌಧದಲ್ಲಿ ಹಿರಿಯ ಪೋಲಿಸ್ ಅಧಿಕಾರಿಗಳ ಸಭೆ ನಡೆಸಿದರೆ, ಉಸ್ತುವಾರಿ ಸಚಿವರು ಘಟನಾ ಸ್ಥಳಕ್ಕೆ ತೆರಳಿ ಪರಿಸ್ಥಿತಿ ಪರಿಶೀಲಿಸಿ, ಜಿಲ್ಲಾ ಪೋಲಿಸ್ ಅಧಿಕಾರಿಗಳ ಸಭೆ ನಡೆಸಿದರು.
ಮುನ್ನೆಚ್ಚರಿಕಾ ಕ್ರಮ
ಇತ್ತ ಡಾ.ಪರಮೇಶ್ವರ್, ಯಾವುದೇ ಪೂಜಾ ಸಮಾರಂಭಗಳು ಮತ್ತು ಮೆರವಣಿಗೆ ವಿಷಯದಲ್ಲಿ ಜಿಲ್ಲಾ ಪೋಲಿಸರು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಮೇಲಧಿಕಾರಿಗಳು ಸೂಚಿಸಬೇಕು.
ನಾಗಮಂಗಲದಲ್ಲಿ ಅಲ್ಪದಿನದಲ್ಲೇ ಎರಡು ಬಾರಿ ಇಂತಹ ಸ್ಥಿತಿ ನಿರ್ಮಾಣವಾಗಿದೆ, ಯಾವುದು ಸೂಕ್ಷ್ಮ ಪ್ರದೇಶವೆಂದು ಗುರುಸಿರುತ್ತೀರೋ ಅಂತಹ ಕಡೆಗಳಲ್ಲಿ ಬಹಳ ಜಾಗರೂಕತೆ ವಹಿಸಬೇಕು ಎಂದು ಸೂಚಿಸಿದರು.
ಮುಖ್ಯಮಂತ್ರಿ ಅವರು ತಮ್ಮ ಟ್ವೀಟ್‌ನಲ್ಲಿ ಮುಂದುವರೆದು, ಘಟನೆ ಸಂಬಂಧ ಈಗಾಗಲೇ 50ಕ್ಕೂ ಅಧಿಕ ಜನರನ್ನು ಬಂಧಿಸಲಾಗಿದ್ದು, ಸಮಾಜದ ಶಾಂತಿ, ಸುವ್ಯವಸ್ಥೆ ಕಾಪಾಡುವುದೇ ನಮ್ಮ ಮೊದಲ ಆದ್ಯತೆಯಾಗಿದೆ ಎಂದರು.
ನಿರ್ದಾಕ್ಷಿಣ್ಯ ಕ್ರಮ
ಕಳೆದ ಒಂದೂವರೆ ವರ್ಷಗಳಿಂದ ಯಾವುದೇ ಗಲಭೆ, ಗಲಾಟೆ, ಹಿಂಸಾಚಾರಗಳು ನಡೆಯದೆ ಸರ್ವಜನಾಂಗದ ಶಾಂತಿಯ ತೋಟದಂತಿದ್ದ ನಾಡನ್ನು, ಧಾರ್ಮಿಕ ನೆಲೆಗಟ್ಟಿನಲ್ಲಿ ವಿಭಜಿಸಲು ಯತ್ನಿಸುವ ದುರುಳರು ಯಾವುದೇ ಜಾತಿ, ಧರ್ಮದವರಾಗಿರಲಿ ಅಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು.
ಸಾರ್ವಜನಿಕರು ಪ್ರಚೋದನೆಗಳಿಗೆ ಒಳಗಾಗದೆ ಶಾಂತಿ, ಸಂಯಮ ಕಾಪಾಡಿಕೊಳ್ಳುವ ಮೂಲಕ ನಮ್ಮೊಂದಿಗೆ ಸಹಕರಿಸಬೇಕು ಎಂದು ಮನವಿ ಮಾಡುತ್ತೇನೆ ಎಂದಿದ್ದಾರೆ.
ಎಚ್.ಡಿ.ಕುಮಾರಸ್ವಾಮಿ ಖಂಡನೆ
ಜಿಲ್ಲಾ ಸಂಸದರೂ ಆಗಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮತ್ತು ರಾಜ್ಯ ಬಿಜೆಪಿ ನಾಗಮಂಗಲ ಘಟನೆಯನ್ನು ತೀವ್ರವಾಗಿ ಖಂಡಿಸಿರುವುದಲ್ಲದೆ, ಮತ ಬ್ಯಾಂಕ್‌ಗಾಗಿ ಓಲೈಕೆ ರಾಜಕಾರಣ ಮಾಡಿದರೆ, ಇಂತಹ ಪರಿಸ್ಥಿತಿಗಳನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕುಮಾರಸ್ವಾಮಿ, ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಒಂದು ಸಮುದಾಯದ ಪುಂಡರು ನಡೆಸಿದ ದಾಳಿಯನ್ನು ಉಗ್ರವಾಗಿ ಖಂಡಿಸುತ್ತೇನೆ ಎಂದಿದ್ದಾರೆ.
ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಶಾಂತಿಯುತವಾಗಿ ತೆರಳುತ್ತಿದ್ದ ಭಕ್ತರನ್ನು ಗುರಿ ಮಾಡಿಕೊಂಡು ಒಂದು ಸಮುದಾಯದ ಪುಂಡರು ಉದ್ದೇಶಪೂರ್ವಕವಾಗಿಯೇ ದಾಂಧಲೆ ಎಬ್ಬಿಸಿ ಸಾರ್ವಜನಿಕರು ಮತ್ತು ಪೊಲೀಸರ ಮೇಲೆ ಕಲ್ಲು, ಚಪ್ಪಲಿ ಎಸೆದು, ಪೆಟ್ರೋಲ್ ಬಾಂಬ್ ಸ್ಫೋಟಿಸಿ, ತಲ್ವಾರ್ ಝಳಪಿಸುವ ದುಸ್ಸಾಹಸಕ್ಕೆ ಕೈಹಾಕಿರುವುದು ಪಟ್ಟಣದಲ್ಲಿ ಶಾಂತಿ ಸುವ್ಯವಸ್ಥೆ ವೈಫಲ್ಯವಾಗಿರುವುದಕ್ಕೆ ಸಾಕ್ಷಿಯಾಗಿದೆ.
ಪೊಲೀಸ್ ಠಾಣೆ ಎದುರು ರಕ್ಷಣೆ ಕೊಡಿ ಎಂದು ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದವರ ಮೇಲೆಯೇ ಅನ್ಯ ಕೋಮಿನ ಪುಂಡರು ದಬ್ಬಾಳಿಕೆ ನಡೆಸುತ್ತಾರೆ ಎಂದರೆ ನಾವು ಎಲ್ಲಿದ್ದೇವೆ ಎನ್ನುವ ಅನುಮಾನ ಬರುತ್ತದೆ, ಇಲ್ಲಿ ಸ್ಥಳೀಯ ಪೊಲೀಸರ ವೈಫಲ್ಯವೂ ಎದ್ದು ಕಾಣುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಮತ್ತು ಆ ಪಕ್ಷದ ರಾಜ್ಯ ಸರ್ಕಾರ ತನ್ನ ರಾಜಕೀಯ ಸ್ವಾರ್ಥಕ್ಕಾಗಿ ಒಂದು ನಿರ್ದಿಷ್ಟ ಸಮುದಾಯವನ್ನು ಅತಿಯಾಗಿ ಓಲೈಸಿ ತುಷ್ಟೀಕರಣ ಮಾಡಿದ ಫಲವಾಗಿ ನಾಗಮಂಗಲದಲ್ಲಿ ಇಂತಹ ಹೇಯ ಘಟನೆ ನಡೆದಿದೆ, ಇಂತಹ ಓಲೈಕೆ, ತುಷ್ಟೀಕರಣ ರಾಜಕಾರಣ ನಿಲ್ಲಬೇಕು, ಇಲ್ಲದಿದ್ದರೆ ಕಾಂಗ್ರೆಸ್ ಪಕ್ಷಕ್ಕೆ ಕೆಟ್ಟ ದಿನಗಳು ದೂರವಿಲ್ಲ.
ಸಾರ್ವಜನಿಕರು ಶಾಂತಿ ಕಾಪಾಡಬೇಕು ಎನ್ನುವುದು ನನ್ನ ಕಳಕಳಿಯ ಮನವಿ. ತಕ್ಷಣವೇ ಪಟ್ಟಣದಲ್ಲಿ ಶಾಂತಿ ಮರುಸ್ಥಾಪನೆಗೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಈ ಪ್ರಕರಣ ನೆಪದಲ್ಲಿ ವಿರೋಧ ಪಕ್ಷಗಳ ಮುಖಂಡರು, ಕಾರ್ಯಕರ್ತರ ಮೇಲೆ ಪೊಲೀಸರು ದರ್ಪ ತೋರಿದರೆ ಸಹಿಸಲಾಗದು ಎಂದಿದ್ದಾರೆ.
ಜಿಹಾದಿ ಮುಳ್ಳುಗಳ ದುಸ್ಸಾಹಸ
ರಾಜ್ಯ ಬಿಜೆಪಿ ಈ ಸಂಬಂಧ ಮಾಧ್ಯಮ ಹೇಳಿಕೆ ನೀಡಿ, ಕಾಂಗ್ರೆಸ್ ಸರ್ಕಾರದಲ್ಲಿ ಮತಾಂಧಶಕ್ತಿಗಳು ಮತ್ತೊಮ್ಮೆ ಅಟ್ಟಹಾಸ ಮೆರೆದಿದ್ದು, ಸರ್ವಜನಾಂಗದ ಶಾಂತಿಯ ತೋಟವಾಗಿದ್ದ ಕರ್ನಾಟಕದಲ್ಲಿ ಜಿಹಾದಿ ಮುಳ್ಳುಗಳ ದುಸ್ಸಾಹಸ ಶಾಂತಿ ಕದಡುತ್ತಿದೆ ಎಂದಿದೆ.
ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆ ಅತ್ಯಂತ ಖಂಡನೀಯ, ಕಾಂಗ್ರೆಸ್ ಆಡಳಿತದಲ್ಲಿ ಕಣ್ಮರೆಯಾಗಿರುವ ಕಾನೂನು ಸುವ್ಯವಸ್ಥೆಗೆ ಇದು ಮತ್ತೊಂದು ನಿದರ್ಶನ.
ಕಳೆದ ವರ್ಷವೂ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಇಂತಹುದೇ ಘಟನೆ ನಡೆದಿದ್ದರೂ, ಈ ಬಾರಿ, ಪೊಲೀಸರು ಯಾವುದೇ ಮುಂಜಾಗ್ರತಾ ಕ್ರಮ ಕೈಗೊಳ್ಳದಿರುವುದು ಕಾಂಗ್ರೆಸ್ ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂಬುದಕ್ಕೆ ಸಾಕ್ಷಿಯಾಗಿದೆ.
ಕಾನೂನಿನ ಭಯವೇ ಇಲ್ಲ
ಶಾಂತಿಯುತವಾಗಿ ಸಾಗುತ್ತಿದ್ದ ಗಣೇಶ ವಿಸರ್ಜನೆ ಮೆರವಣಿಗೆಗೆ ಅಡ್ಡಿಪಡಿಸುವ ದುರುದ್ದೇಶದಿಂದ ಮುಸ್ಲಿಂ ಮತಾಂಧ ಪುಂಡರು ನಡೆಸಿದ ದಾಂಧಲೆ ಪೂರ್ವನಿಯೋಜಿತವಾಗಿದ್ದು ಸಾರ್ವಜನಿಕರು ಹಾಗೂ ಪೊಲೀಸರ ಮೇಲೆ ಕಲ್ಲು ತೂರಾಟ ಮಾಡುವುದು, ಚಪ್ಪಲಿ ಎಸೆಯುವುದು, ಪೆಟ್ರೋಲ್ ಬಾಂಬ್ ಸ್ಫೋಟಿಸುವುದು, ತಲ್ವಾರ್ ಝಳಪಿಸುವಂತಹ ದುಸ್ಸಾಹಸಕ್ಕೆ ಮುಂದಾಗುತ್ತಾರೆ ಎಂದರೆ ರಾಜ್ಯದಲ್ಲಿ ಇಂತಹ ಮತಾಂಧ ಪುಂಡರಿಗೆ, ಮುಸ್ಲಿಂ ಮೂಲಭೂತವಾದಿಗಳಿಗೆ ಕಾನೂನಿನ ಭಯವೇ ಇಲ್ಲವೆಂಬುದು ಸ್ಪಷ್ಟವಾಗುತ್ತದೆ ಎಂದು ಬಿಜೆಪಿ ಕಟುವಾಗಿ ಟೀಕಿಸಿದೆ.
ರಕ್ಷಣೆ ಕೋರಿ ಪೊಲೀಸ್ ಠಾಣೆಗೆ ಬಂದವರ ಮೇಲೆಯೇ ಮತಾಂಧ ಪುಂಡರು ಹಲ್ಲೆ, ದಬ್ಬಾಳಿಕೆ ನಡೆಸುತ್ತಾರೆಂದರೆ ಇಂತಹ ಮನಸ್ಥಿತಿಗೆ ಕಾಂಗ್ರೆಸ್ ಸರ್ಕಾರದಲ್ಲಿ ಎಷ್ಟು ಪ್ರೋತ್ಸಾಹ, ಪೋಷಣೆ ದೊರಕುತ್ತಿದೆ ಎಂಬುದಕ್ಕೆ ಸಾಕ್ಷಿಯಾಗಿದೆ.
ರಾಜ್ಯ ಸರ್ಕಾರದ ವೋಟ್ ಬ್ಯಾಂಕ್ ಓಲೈಕೆ ರಾಜಕಾರಣ, ತುಷ್ಟೀಕರಣವೇ ಇಂತಹ ಘಟನೆಗಳು ಪದೇ ಪದೇ ಮರುಕಳಿಸುತ್ತಿರುವುದಕ್ಕೆ ಕಾರಣ.
ಇಂತಹ ಮತಾಂಧ ಪುಂಡರ ಬಾಲ ಕತ್ತರಿಸದೆ ಹೀಗೇ ಬಿಟ್ಟರೆ ಇಂತಹವರು ನಾಳೆ ಉಗ್ರವಾದಿಗಳಾಗುವುದರಲ್ಲಿ ಸಂಶಯವೇ ಇಲ್ಲ, ಗಲಭೆಗೆ ಕಾರಣರಾದ ಸಮಾಜ ಘಾತುಕ ಶಕ್ತಿಗಳನ್ನು ಕೊಡಲೇ ಬಂಧಿಸಿ ಕಾನೂನು ವಶಕ್ಕೆ ಒಪ್ಪಿಸಿ ಕರ್ನಾಟಕದಲ್ಲಿ ಜಿಹಾದಿ ಮಾನಸಿಕತೆಗೆ ಜಾಗವಿಲ್ಲ ಎಂಬ ದಿಟ್ಟ ಸಂದೇಶ ರವಾನಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಬಿಜೆಪಿ ಒತ್ತಾಯಿಸಿದೆ.
