ಬೆಂಗಳೂರು:402 ಪೊಲೀಸ್ ಸಬ್ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಅಕ್ಟೋಬರ್ 3ರಂದು ಕ್ಯಾಮೆರಾ ಕಣ್ಗಾವಲಿನಲ್ಲಿ ಲಿಖಿತ ಪರೀಕ್ಷೆ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ವ್ಯಾಪಕ ಸಿದ್ಧತೆ ಮಾಡಿಕೊಂಡಿದೆ.
ಬೆಂಗಳೂರು, ವಿಜಯಪುರ, ಶಿವಮೊಗ್ಗ, ಕಲಬುರಗಿ, ಧಾರವಾಡ ಮತ್ತು ದಾವಣಗೆರೆಯಲ್ಲಿ ಒಟ್ಟು 163 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.
66,990 ಅಭ್ಯರ್ಥಿಗಳು
ಬೆಂಗಳೂರಿನಲ್ಲಿ ಅತಿ ಹೆಚ್ಚು ಅಂದರೆ 21,875 ಮಂದಿ ಸೇರಿದಂತೆ ಒಟ್ಟು 66,990 ಅಭ್ಯರ್ಥಿಗಳು ವಿವಿಧ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಪರೀಕ್ಷಾ ಅಕ್ರಮಗಳಿಗೆ ಅವಕಾಶ ಇಲ್ಲದಂತೆ ಬಿಗಿಕ್ರಮ ಕೈಗೊಳ್ಳಲಾಗಿದೆ, ಪರೀಕ್ಷೆ ಆರಂಭಕ್ಕೆ ಅರ್ಧ ಗಂಟೆ ಮೊದಲು ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದೊಳಗೆ ಕಡ್ಡಾಯವಾಗಿ ಇರಬೇಕು.
ಪರೀಕ್ಷಾ ಕೇಂದ್ರಕ್ಕೆ ಅಭ್ಯರ್ಥಿಗಳು ಬೇಗ ಆಗಮಿಸಿ ಪೊಲೀಸರ ತಪಾಸಣೆಗೆ ಒಳಪಡಬೇಕು, ತಡವಾಗಿ ಬರುವವರಿಗೆ ಪ್ರವೇಶ ಇರುವುದಿಲ್ಲ, ವಸ್ತ್ರ ಸಂಹಿತೆ ಕಡ್ಡಾಯವಾಗಿ ಪಾಲಿಸಬೇಕು.
ವೆಬ್ಕಾಸ್ಟಿಂಗ್ ವ್ಯವಸ್ಥೆ
ಪ್ರತಿಯೊಂದು ಪರೀಕ್ಷಾ ಕೊಠಡಿಯಲ್ಲೂ ಕ್ಯಾಮೆರಾ ಅಳವಡಿಸಿದ್ದು, ವೆಬ್ಕಾಸ್ಟಿಂಗ್ ಮೂಲಕ ಎಲ್ಲ ಬೆಳವಣಿಗೆ ವೀಕ್ಷಿಸುವ ವ್ಯವಸ್ಥೆ ಮಾಡಲಾಗಿದೆ, ಪ್ರತಿ ಕೇಂದ್ರದಲ್ಲಿ ಜಾಮರ್ ಅಳವಡಿಸಲು ಕ್ರಮ ತೆಗೆದುಕೊಂಡಿದ್ದು, ಆಸುಪಾಸಿನಲ್ಲಿ ಬ್ಲೂಟೂಥ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳು ಕಾರ್ಯನಿರ್ವಹಿಸದಂತೆ ಮಾಡಲಾಗಿದೆ.
ಬೆಂಗಳೂರಿನ ಕೆಇಎ ಕಚೇರಿಯಲ್ಲಿ ರಾಜ್ಯಮಟ್ಟದ ಕಮಾಂಡ್ ಸೆಂಟರ್ ಸ್ಥಾಪಿಸಿದ್ದು, ಪ್ರತಿಯೊಂದು ಪರೀಕ್ಷಾ ಕೊಠಡಿಯಲ್ಲಿ ಆಗುವ ಬೆಳವಣಿಗೆ ಗಮನಿಸಲು ಟಿವಿಗಳನ್ನು ಅಳವಡಿಸಲಾಗಿದೆ, ಜಿಲ್ಲಾ ಮಟ್ಟದಲ್ಲೂ ಒಂದು ನಿಯಂತ್ರಣ ಕೊಠಡಿ ಕಾರ್ಯನಿರ್ವಹಿಸಲಿದೆ.
ಪ್ರಶ್ನೆ ಪತ್ರಿಕೆ ಸ್ವೀಕಾರ ಮತ್ತು ಅದರ ಬಂಡಲ್ ತೆರೆಯುವ ಎಲ್ಲ ಪ್ರಕ್ರಿಯೆಯನ್ನೂ ವೆಬ್ ಕಾಸ್ಟಿಂಗ್ ಮಾಡಲಾಗುತ್ತದೆ, ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸುವ ಸಂದರ್ಭದಲ್ಲಿ ಅವರ ಬೆರಳಚ್ಚು ಮತ್ತು ಭಾವಚಿತ್ರ ತೆಗೆದುಕೊಂಡು, ಅವರು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಲಗತ್ತಿಸಿರುವ ಚಿತ್ರದ ಜತೆಗೆ ಸ್ಥಳದಲ್ಲೇ ಆನ್ಲೈನ್ನಲ್ಲಿ ಹೊಂದಾಣಿಕೆ ಮಾಡುವ ವ್ಯವಸ್ಥೆ ಮಾಡಲಾಗಿದೆ, ಇದರಿಂದ ಯಾರದೊ ಹೆಸರಿನಲ್ಲಿ ಇನ್ಯಾರೊ ಪರೀಕ್ಷೆ ಬರೆಯುವುದನ್ನು ತಡೆಯಬಹುದು.
ಬೇರೆ ಜಿಲ್ಲೆಗಳ ವಿಶೇಷ ವೀಕ್ಷಕರು
ಬೇರೆ ಜಿಲ್ಲೆಗಳ ವಿಶೇಷ ವೀಕ್ಷಕರನ್ನೂ ನಿಯೋಜಿಸಿದ್ದು, ಅವರು ಪರೀಕ್ಷಾ ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ನಿಗಾ ವಹಿಸಲಿದ್ದಾರೆ, ಈ ಹಿಂದೆ ಕಿವಿಯೊಳಗೆ ಅತಿಸೂಕ್ಷ್ಮ ಎಲೆಕ್ಟ್ರಾನಿಕ್ ಸಾಧನಗಳನ್ನು ಇಟ್ಟುಕೊಂಡು ಪರೀಕ್ಷೆಯಲ್ಲಿ ಅಕ್ರಮ ಎಸಗಲು ಪ್ರಯತ್ನಿಸಿದ ಪ್ರಕರಣಗಳು ವರದಿಯಾದ ಹಿನ್ನೆಲೆಯಲ್ಲಿ ಪ್ರತಿ ಪರೀಕ್ಷಾ ಕೇಂದ್ರದಲ್ಲೂ ಒಬ್ಬ ಇಎನ್ಟಿ ವೈದ್ಯರನ್ನು ನಿಯೋಜಿಸಿದ್ದು, ಅವರು ಅಭ್ಯರ್ಥಿಗಳ ಮೇಲೆ ನಿಗಾ ಇಡಲಿದ್ದಾರೆ.
ಪರೀಕ್ಷೆ ನಡೆಯುವ ಎಲ್ಲಾ ಆರು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆ ವಿಡಿಯೊ ಸಂವಾದ ನಡೆಸಿ ಬಿಗಿ ಕ್ರಮಗಳ ಬಗ್ಗೆ ವಿವರಿಸಲಾಗಿದೆ ಎಂದಿದ್ದಾರೆ.