ಯುವಜನತೆ ದುಶ್ಚಟಕ್ಕೆ ಬಲಿಯಾಗದಂತೆ ದಂಧೆ ನಿಗ್ರಹ : ಸಿದ್ದರಾಮಯ್ಯ
ಬೆಂಗಳೂರು : ಮಾದಕವಸ್ತುಗಳ ನಿಯಂತ್ರಣಕ್ಕೆ ಕಾನೂನುಗಳಲ್ಲಿ ಸೂಕ್ತ ತಿದ್ದುಪಡಿಗಳನ್ನು ತರಲು ರಾಜ್ಯ ಸರ್ಕಾರ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ತಿಳಿಸಿದ್ದಾರೆ.
ಅವರು ಇಂದು ರಾಜ್ಯ ಎನ್ಎಸ್ಎಸ್ ಕೋಶ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಭಾಗಿತ್ವದಲ್ಲಿ ವಿಧಾನಸೌಧದ ಬ್ಯಾಕ್ವೆಟ್ಹಾಲ್ ನಲ್ಲಿ ಆಯೋಜಿಸಲಾಗಿದ್ದ ತಂಬಾಕು ಮುಕ್ತ ಯುವ ಅಭಿಯಾನ 2.0 ಬೃಹತ್ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಯುವಜನತೆ ಈ ದುಶ್ಚಟಕ್ಕೆ ಬಲಿಯಾಗದಂತೆ ಮಾದಕವಸ್ತುಗಳ ದಂಧೆಯನ್ನು ನಿಗ್ರಹಿಸುವುದೇ ಸರ್ಕಾರದ ಗುರಿ ಎಂದರು.
ವಿಶ್ವ ಆರೋಗ್ಯ ಸಂಸ್ಥೆಯವರ ವರದಿಯಂತೆ ಭಾರತದಲ್ಲಿ ಪ್ರತಿ ವರ್ಷ 13.5 ಲಕ್ಷ ಜನರು ತಂಬಾಕು ಸೇವನೆಯಿಂದ ಸಾವಿಗೆ ಈಡಾಗುತ್ತಿದ್ದಾರೆ ಎಂಬುದು ಆತಂಕಕಾರಿ ವಿಷಯ. ಯುವಜನತೆ ತಮ್ಮ ಭವಿಷ್ಯ ರೂಪಿಸಿಕೊಳ್ಳುವ ಬದಲು ಈ ದುಶ್ಚಟಗಳಿಗೆ ಬಲಿಯಾಗುತ್ತಿರುವುದರಿಂದ ಈ ಪ್ರಮಾಣದ ಸಾವು ಸಂಭವಿಸುತ್ತಿದೆ. ತಂಬಾಕು ಸೇವಿಸುತ್ತಿರುವವರಲ್ಲಿ ಶೇ.50 ರಷ್ಟು ಜನ ಕ್ಯಾನ್ಸರ್ ನಂತಹ ಮಾರಕ ಕಾಯಿಲೆಗೆ ತುತ್ತಾಗುತ್ತಿದ್ದಾರೆ. ಯುವಜನತೆಯು ತಂಬಾಕು ಸೇವನೆ ಹಾಗೂ ಮಾದಕವಸ್ತುಗಳ ವ್ಯಸನಕ್ಕೆ ಒಳಗಾಗಬಾರದು ಎಂದರು.
ಬೆಂಗಳೂರು, ಮಂಗಳೂರು, ಮೈಸೂರು, ಹುಬ್ಬಳ್ಳಿ ಧಾರವಾಡಗಳಲ್ಲಿ ಡ್ರಗ್ಸ್ ಹಾವಳಿ ಹೆಚ್ಚಿದ್ದು, ಇದನ್ನು ನಿಗ್ರಹಿಸಲು ಸರ್ಕಾರ ಅನೇಕ ಕಾನೂನುಗಳನ್ನು ರಚಿಸಿದೆ. ಯುವಕ ಯುವತಿಯರು ತಂಬಾಕು ಉತ್ಪನ್ನಗಳನ್ನು ಸೇವಿಸುತ್ತಿದ್ದಲ್ಲಿ, ಕೂಡಲೇ ದುಶ್ಚಟಗಳನ್ನು ನಿಲ್ಲಿಸಬೇಕೆಂದು ಕರೆ ನೀಡಿದರು. ರಾಜ್ಯದ ಎಲ್ಲ ಯುವಸಮುದಾಯಗಳು ದುಶ್ಚಟಗಳಿಂದ ದೂರವಾಗುವಂತೆ ಮುಖ್ಯಮಂತ್ರಿಗಳು ಮನವಿ ಮಾಡಿದರು. ರಾಜ್ಯದಲ್ಲಿ ಉತ್ತಮ ಮಳೆ ಬೆಳೆಯಾಗಿದ್ದು, ರೈತರ ಮೊಗದಲ್ಲಿ ಸಂತಸ ಮೂಡಿದಂತೆ, ದುಶ್ಚಟಗಳಿಗೆ ಬಲಿಯಾಗದೇ ಆರೋಗ್ಯಕರ ಜೀವನ ನಡೆಸಿ ಯುವ ಸಮುದಾಯದವರಲ್ಲೂ ಸಂತಸ ಮೂಡುವಂತಾಗಲಿ ಎಂದು ಹಾರೈಸಿದರು.