ಚನ್ನಪಟ್ಟಣ, ಶಿಗ್ಗಾವಿ, ಸಂಡೂರು ಕ್ಷೇತ್ರಗಳಿಗೆ ನವೆಂಬರ್ 13ಕ್ಕೆ ಉಪ ಚುನಾವಣೆ
ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಹಾಗೂ ಇ. ತುಕರಾಮ್ ಲೋಕಸಭೆಗೆ ಆಯ್ಕೆಗೊಂಡ ಹಿನ್ನೆಲೆಯಲ್ಲಿ ಅವರಿಂದ ತೆರವಾಗಿರುವ ಚನ್ನಪಟ್ಟಣ ಶಿಗ್ಗಾವಿ, ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 13 ರಂದು ಚುನಾವಣೆ ಜರುಗಲಿದೆ.
ಮಹಾರಾಷ್ಟ್ರ ಹಾಗೂ ಜಾರ್ಖಂಡ್ ವಿಧಾನಸಭೆ ಹಾಗೂ ರಾಷ್ಟ್ರದ ವಿವಿಧಡೆ ತೆರವಾಗಿರುವ 43 ವಿಧಾಸಭಾ ಕ್ಷೇತ್ರಗಳಿಗೆ ಕೇಂದ್ರ ಚುನಾವಣಾ ಆಯೋಗ ದೆಹಲಿಯಲ್ಲಿಂದು ವೇಳಾಪಟ್ಟಿ ಪ್ರಕಟಿಸಿದೆ.
ರಾಜ್ಯದ ಮೂರು ವಿಧಾನಸಭೆ ಕ್ಷೇತ್ರಗಳಿಗೆ ನವೆಂಬರ್ 13ರಂದು ಚುನಾವಣೆ ನಡೆದರೂ, ಫಲಿತಾಂಶಕ್ಕಾಗಿ ನವೆಂಬರ್ 23ರವರೆಗೂ ಕಾಯಬೇಕಾಗಿದೆ.
ಈ ಕ್ಷೇತ್ರಗಳಿಗೆ ಅಕ್ಟೋಬರ್ 18ರಂದು ಅಧಿಸೂಚನೆ ಹೊರಡಲಿದ್ದು, ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಕಾರ್ಯ ಆರಂಭಗೊಳ್ಳಲಿದೆ.
ನಾಮಪತ್ರ ಸಲ್ಲಿಕೆಗೆ ಅಕ್ಟೋಬರ್ 25 ಕಡೇ ದಿನವಾಗಿದ್ದು, 28 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಅಕ್ಟೋಬರ್ 30 ರವರೆಗೆ ನಾಮಪತ್ರ ಹಿಂತೆಗೆದುಕೊಳ್ಳಲು ಕಾಲಾವಕಾಶ ನೀಡಲಾಗಿದೆ.
ಉಪಚುನಾವಣೆ ನಡೆಯುತ್ತಿರುವ ಮೂರು ಕ್ಷೇತ್ರಗಳಿಗೂ ಆಡಳಿತಾರೂಢ ಕಾಂಗ್ರೆಸ್, ಎನ್‌ಡಿಎ ಮೈತ್ರಿಕೂಟದ ಬಿಜೆಪಿ ಮತ್ತು ಜೆಡಿಎಸ್ ಉಪಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿವೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್, ಬಿಜೆಪಿ ಹಾಗೂ ಕಾಂಗ್ರೆಸ್ ತಲಾ ಒಂದು ಸ್ಥಾನದಲ್ಲಿ ಗೆದಿದ್ದವು.
ಚುನಾವಣಾ ವೇಳಾಪಟ್ಟಿ ಪ್ರಕಟಕ್ಕೂ ಮುನ್ನವೇ ರಾಜಕೀಯ ಪಕ್ಷಗಳು ಕ್ಷೇತ್ರಗಳಲ್ಲಿ ಕಾರ್ಯಕ್ರರ್ತರ ಸಭೆ ನಡೆಸಿದರೆ, ಆಡಳಿತಾರೂಢ ಕಾಂಗ್ರೆಸ್ ಅಭಿವೃದ್ಧಿಗೆ ಹಣವನ್ನು ಹರಿಸಿದ್ದಲ್ಲದೆ, ಬೃಹತ್ ಸಮಾವೇಶಗಳನ್ನು ನಡೆಸಿದೆ.
ಚನ್ನಪಟ್ಟಣದಿಂದ ಲೋಕಸಭೆಗೆ ಆಯ್ಕೆಗೊಂಡು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಈ ಕ್ಷೇತ್ರ ಪ್ರತಿಷ್ಠೆಯಾಗಿದೆ. ಈ ಕ್ಷೇತ್ರ ತಮಗೂ ಬೇಕೆಂದು ಬಿಜೆಪಿಯ ಒಂದು ವರ್ಗದ ನಾಯಕರು ಪಟ್ಟು ಹಿಡಿದಿದ್ದಾರೆ. ಆದರೆ ಎನ್‌ಡಿಎ ಮೈತ್ರಿ ಕೂಟದ ಪಾಲುದಾರಿಕೆ ಜೆಡಿಎಸ್‌ಗೆ ಚನ್ನಪಟ್ಟಣ ಕ್ಷೇತ್ರ ಬಿಟ್ಟುಕೊಟ್ಟಿದ್ದಾರೆ. ಉಳಿದ ಶಿಗ್ಗಾವಿ ಮತ್ತು ಸಂಡೂರು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿ ಕಣಕ್ಕಿಳಿಯಲಿದ್ದಾರೆ. ಕಾಂಗ್ರೆಸ್ ಮೂರು ಕ್ಷೇತ್ರಗಳಲ್ಲೂ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ.
ರಾಜ್ಯದಲ್ಲಿ ಮೂರು ಕ್ಷೇತ್ರಗಳಲ್ಲಿ ಉಪಚುನಾವಣೆ ವೇಳಾಪಟ್ಟಿ ಪ್ರಕಟಗೊಂಡಿರುವುದರಿಂದ ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯನವರ ರಾಜೀನಾಮೆ ವಿಚಾರವಾಗಿ ಆಂತರಿಕವಾಗಿ ನಡೆಯುತ್ತಿದ್ದ ಗೊಂದಲಗಳಿಗೆ ತಾತ್ಕಾಲಿಕ ಬ್ರೇಕಬಿದ್ದಂತಾಗಿದೆ. ರಾಜ್ಯದ ಈ ಮೂರು ವಿಧಾನಸಭಾ ಕ್ಷೇತ್ರಗಳ ಜೊತೆಗೆ ಕೇಂದ್ರ ಚುನಾವಣಾ ಆಯೋಗ ಮಹಾರಾಷ್ಟ್ರದ 288 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ನವೆಂಬರ್ 20ರಂದು ಚುನಾವಣೆ ನಡೆಯಲಿದೆ.
ಜಾರ್ಖಂಡ್ ವಿಧಾನಸಭೆಗೆ ನವೆಂಬರ್ 13 ಮತ್ತು 20 ರಂದು ಎರಡು ಹಂತದಲ್ಲಿ ಮತದಾನ ನಡೆಯಲಿದ್ದು, ನವೆಂಬರ್ 23 ಕ್ಕೆ ಫಲಿತಾಂಶ ಹೊರ ಬೀಳಲಿದೆ.