ಬೆಂಗಳೂರು:ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ಉಪಚುನಾವಣಾ ಕಣದಿಂದ ಆಯ್ಕೆ ಬಯಸಿ ನಾಳೆ ನಾಮಪತ್ರ ಸಲ್ಲಿಸುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ರಾಜ್ಯದ ಪ್ರಮುಖ ನಾಯಕರು ಉಪಸ್ಥಿತರಿರಲಿದ್ದಾರೆ.
ನಾಮಪತ್ರ ಸಲ್ಲಿಕೆ ಹಾಗೂ ಅದಕ್ಕೂ ಮುನ್ನ ನಡೆಯುವ ರೋಡ್ ಶೋನಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಅವರಷ್ಟೇ ಅಲ್ಲದೆ, ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಯನಾಡಿಗೆ ತೆರಳಲಿದ್ದಾರೆ.
ಸಂಪುಟ ಸಭೆ ಮುಂದೂಡಿಕೆ
ಇದೇ ಕಾರಣಕ್ಕಾಗಿ ಗುರುವಾರ ನಡೆಯಬೇಕಿದ್ದ ಸಂಪುಟ ಸಭೆಯನ್ನು ಅಕ್ಟೋಬರ್ 28ಕ್ಕೆ ಮುಂದೂಡಲಾಗಿದೆ.
ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ, ಈ ಲೋಕಸಭಾ ಸ್ಥಾನವನ್ನು ತೆರವು ಮಾಡಿ, ತಮ್ಮ ಸಹೋದರಿಗೆ ಬಿಟ್ಟುಕೊಟ್ಟಿದ್ದಾರೆ.
ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ ಹಾಗೂ ರೋಡ್ ಶೋ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಕಾಂಗ್ರೆಸ್ ಆಡಳಿತ ರಾಜ್ಯಗಳ ಮುಖ್ಯಮಂತ್ರಿಗಳು ಪಾಲ್ಗೊಳ್ಳಲಿದ್ದಾರೆ.