ಬೆಂಗಳೂರು:ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಕೋರಿರುವ ಅರ್ಜಿ ಪುರಸ್ಕರಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಸಿದ್ದರಾಮಯ್ಯ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ಮುಡಾ ಬಿಡಿ ನಿವೇಶನ ಹಂಚಿಕೆ ಹಗರಣವನ್ನು ಸಿಬಿಐಗೆ ವಹಿಸಬೇಕೆಂದು ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ, ಪ್ರತಿವಾದಿಗಳಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ ನೀಡಿ ನೋಟಿಸ್ ಜಾರಿ ಮಾಡಿದೆ.
ಎಲ್ಲ ಆರೋಪಿಗಳಿಗೂ ನೋಟಿಸ್
ಸಿದ್ದರಾಮಯ್ಯ ಅಲ್ಲದೆ, ಸಿಬಿಐ, ಮೈಸೂರು ಜಿಲ್ಲಾ ಲೋಕಾಯುಕ್ತ ಅಧಿಕಾರಿ, ಲೋಕಾಯುಕ್ತ ಎಡಿಜಿಪಿ, ವಿಜಯನಗರ ಪೋಲಿಸ್ ಠಾಣಾಧಿಕಾರಿ, ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ, ಮಲ್ಲಿಕಾರ್ಜುನಸ್ವಾಮಿ ಮತ್ತು ಜೆ.ದೇವರಾಜು ಅವರಿಗೂ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ನವೆಂಬರ್ 26ಕ್ಕೆ ಮುಂದೂಡಿದೆ.
ಸ್ನೇಹಮಯಿ ಕೃಷ್ಣ ಪರ ಹಿರಿಯ ವಕೀಲ ಕೆ.ಜಿ.ರಾಘವನ್, ಈ ಪ್ರಕರಣದ ಫಲಿತಾಂಶ ಏನೇ ಬಂದರೂ, ಸಾರ್ವಜನಿಕರ ವಿಶ್ವಾಸ ಉಳಿಸಿಕೊಂಡು ತನಿಖೆ ನಡೆಸಬೇಕಾಗುತ್ತದೆ.
ಆದ್ದರಿಂದ ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಮಾಡಿದ ಮನವಿಯನ್ನು ಪುರಸ್ಕರಿಸಿದ ನ್ಯಾಯಪೀಠ ನೋಟಿಸ್ ನೀಡಿದೆ.
ಕೇಂದ್ರ ಹಾಗೂ ರಾಜ್ಯ ಗೃಹ ಇಲಾಖೆ ಕಾರ್ಯದರ್ಶಿ, ಸಿಬಿಐ ನಿದೇರ್ಶಕರಿಗೂ ನೋಟಿಸ್ ಜಾರಿ ಮಾಡಲಾಗಿದೆ.
25ರೊಳಗೆ ತನಿಖಾ ವರದಿಗೆ ಆದೇಶ
ಅಷ್ಟೇ ಅಲ್ಲ, ಮುಖ್ಯಮಂತ್ರಿ ಕುಟುಂಬ ಪಡೆದಿರುವ 14 ಬಿಡಿ ನಿವೇಶನಗಳ ಸಂಬಂಧ ತನಿಖೆ ನಡೆಸುತ್ತಿರುವ ಲೋಕಾಯುಕ್ತ ನವೆಂಬರ್ 25ರೊಳಗೆ ತನ್ನ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಇದೇ ಸಂದರ್ಭದಲ್ಲಿ ಆದೇಶ ಮಾಡಿದೆ.
ಪ್ರಕರಣದ ಪ್ರಮುಖ ಆರೋಪಿ ಸಿದ್ದರಾಮಯ್ಯ ಹೊರತುಪಡಿಸಿ, ಉಳಿದೆಲ್ಲಾ ಆರೋಪಿಗಳಿಗೆ ತುರ್ತು ನೋಟಿಸ್ ಜಾರಿಗೊಳಿಸುವಂತೆ ಸೂಚಿಸಿದೆ.
ಸಿಬಿಐ ಪರ ಹಾಜರಿದ್ದ ಹಿರಿಯ ವಕೀಲ ಪಿ.ಪ್ರಸನ್ನಕುಮಾರ್, ರಾಜ್ಯ ಸರ್ಕಾರದ ಪರ ಹೆಚ್ಚುವರಿ ಅಭಿಯೋಜಕ ಬಿ.ಎನ್.ಜಗದೀಶ್ ನೋಟಿಸ್ ಪಡೆದುಕೊಂಡರು.
ಪ್ರಾಸಿಕ್ಯೂಷನ್ ನಿರ್ಧಾರ ತೀರ್ಪು
ಮುಡಾ ಬಿಡಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಪೀಠವೇ ಈ ಹಿಂದೆ ರಾಜ್ಯಪಾಲರ ಪ್ರಾಸಿಕ್ಯೂಷನ್ ನಿರ್ಧಾರವನ್ನು ಎತ್ತಿಹಿಡಿದು ತನಿಖೆಗೆ ಆದೇಶಿಸಿತ್ತು.
ತನಿಖೆಯನ್ನು ಮೂರು ತಿಂಗಳೊಳಗೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕೆಂದು ತನಿಖಾ ಸಂಸ್ಥೆಗೆ ಆದೇಶ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.