ಬೆಂಗಳೂರು:ಅತ್ಯಾಚಾರ ಆರೋಪ ಪ್ರಕರಣದಲ್ಲಿ ಜೈಲು ಪಾಲಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಜಾಗೊಳಿಸಿದೆ.
ನ್ಯಾಯಮೂರ್ತಿ ಸತೀಶ್‌ಚಂದ್ರ ವರ್ಮ ಮತ್ತು ಬೇಲಾ ಎಂ. ತ್ರಿವೇದಿ ಅವರನ್ನೊಳಗೊಂಡ ದ್ವಿಸದಸ್ಯ ನ್ಯಾಯಪೀಠ, ವಿಚಾರಣೆ ನಡೆಸಿ, ಜಾಮೀನು ಅರ್ಜಿ ವಜಾಗೊಳಿಸಿತು.
ಕಳೆದ ಅಕ್ಟೋಬರ್ 21ರಂದು ಪ್ರಜ್ವಲ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಸಹಾ ತಿರಸ್ಕರಿಸಿತ್ತು.
ಮಧ್ಯೆ ಪ್ರವೇಶಿಸುವುದಿಲ್ಲ
ಪ್ರಜ್ವಲ್ ಅತ್ಯಂತ ಪ್ರಭಾವಿ ವ್ಯಕ್ತಿ ಎಂಬುದನ್ನು ಗಮನಿಸಿದ ನ್ಯಾಯಾಲಯ, ಕರ್ನಾಟಕ ಹೈಕೋರ್ಟ್ ನೀಡಿರುವ ಆದೇಶದಲ್ಲಿ ತಾವು ಮಧ್ಯೆ ಪ್ರವೇಶಿಸುವುದಿಲ್ಲ ಎಂದು ಹೇಳುವ ಮೂಲಕ ನ್ಯಾಯಪೀಠ ಅರ್ಜಿ ವಜಾಗೊಳಿಸಿತು.
ಪ್ರಜ್ವಲ್ ರೇವಣ್ಣ ಪರ ವಾದ ಮಂಡಿಸಿದ ಹಿರಿಯ ನ್ಯಾಯವಾದಿ ಮುಕುಲ್ ರೋಹಟಗಿ, ಪ್ರಕರಣ ಸಂಬಂಧ ಈಗಾಗಲೇ ಆರೋಪ ಪಟ್ಟಿ ಸಲ್ಲಿಕೆಯಾಗಿದೆ.
ಪ್ರಜ್ವಲ್ ವಿರುದ್ಧದ ದೂರಿನಲ್ಲಿ ಐಪಿಸಿ 376ರ ಉಲ್ಲೇಖ ಇಲ್ಲ ಎಂದು ಹೇಳಿ ಜಾಮೀನು ನೀಡುವಂತೆ ಮನವಿ ಮಾಡಿದ್ದರು.
ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿತ್ತು
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿತ್ತು, ಹೈಕೋರ್ಟ್ ಆದೇಶ ಪ್ರಶ್ನಿಸಿ ಪ್ರಜ್ವಲ್ ಪರ ವಕೀಲರು ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.
ಪ್ರಜ್ವಲ್ 6 ತಿಂಗಳ ನಂತರ ಮತ್ತೆ ಜಾಮೀನು ಅರ್ಜಿ ಸಲ್ಲಿಸಬಹುದೆ ಎಂಬ ಮುಕುಲ್ ರೋಹಟಗಿ ಮನವಿಗೆ, ಈ ಬಗ್ಗೆ ನಾವೇನು ಹೇಳುವುದಿಲ್ಲ ಎಂದು ನ್ಯಾಯಪೀಠ ತಿಳಿಸಿತು.


