ಕೆಲವು ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ
ಬೆಂಗಳೂರು:ಕಾಮಗಾರಿಗಳಲ್ಲಿ ಮುಸ್ಲೀಮರಿಗೆ ಮೀಸಲಾತಿ ಕಲ್ಪಿಸುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಕೆಲವು ಮಾಧ್ಯಮಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿದ್ದಾರೆಂದು ಅವರ ಕಾರ್ಯಾಲಯದ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ.
ಬೇಡಿಕೆ ಬಂದಿರುವುದು ನಿಜ
ಮೀಸಲಾತಿ ನೀಡಬೇಕೆಂಬ ಬೇಡಿಕೆ ಬಂದಿರುವುದು ನಿಜ, ಆದರೆ, ಈ ಕುರಿತು ಸರ್ಕಾರದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 13ರಂದು ಉಪಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ತಪ್ಪಿಸಲು ಈ ಸ್ಪಷ್ಟನೆ ನೀಡಲಾಗಿದೆ ಎನ್ನಲಾಗಿದೆ.
ಆದರೆ, ಅಲ್ಪಸಂಖ್ಯಾತ ಸಮುದಾಯದ ಜನಪ್ರತಿನಿಧಿಗಳು ನೀಡಿದ ಮನವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಆರ್ಥಿಕ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ರವಾನೆ ಮಾಡಿ ಕಾನೂನಿನ ರೀತಿ 2ಬಿ ಅಡಿ ಈ ಸಮುದಾಯಕ್ಕೆ ಶೇಕಡ 4ರಷ್ಟು ಮೀಸಲಾತಿ ಕಲ್ಪಿಸುವಂತೆ ಆದೇಶಿಸಿದ್ದಾರೆ.