ಬೆಂಗಳೂರು:ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಹಾಗೂ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ.) ರಾಜಕೀಯ ಪಿತೂರಿಯಿಂದ ನೋಟಿಸ್ ನೀಡಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದಿಲ್ಲಿ ಟೀಕಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ವಿರುದ್ಧದ ಪ್ರಕರಣದಲ್ಲೂ ಹೀಗೆ ಆಗಿತ್ತು, ಒಂದು ಪ್ರಕರಣವನ್ನು ಒಂದೇ ಸಮಯದಲ್ಲಿ ಎರಡು ಸಂಸ್ಥೆಗಳು ತನಿಖೆ ನಡೆಸಲು ಸಾಧ್ಯವಿಲ್ಲ, ಲೋಕಾಯುಕ್ತ ಸಂಸ್ಥೆ ತನಿಖೆ ನಡೆಸುತ್ತಿರುವಾಗ ಬೇರೆ ಸಂಸ್ಥೆಗಳು ತನಿಖೆ ನಡೆಸಲು ಆಗುವುದಿಲ್ಲ ಎಂಬುದಾಗಿ ನ್ಯಾಯಾಲಯಗಳು ಅನೇಕ ತೀರ್ಪು ನೀಡಿವೆ, ಈ ವಿಚಾರವಾಗಿ ಸಂಪೂರ್ಣ ಮಾಹಿತಿ ಪಡೆದ ನಂತರ ನಾನು ಮಾತನಾಡುತ್ತೇನೆ ಎಂದರು.
ಎರಡು ಸಂಸ್ಥೆ ತನಿಖೆ ಮಾಡುವಂತಿಲ್ಲ
ನನ್ನ ಪ್ರಕರಣದಲ್ಲೂ ಸಿಬಿಐ ಹಾಗೂ ಇ.ಡಿ. ಒಟ್ಟಿಗೆ ತನಿಖೆ ಮಾಡುತ್ತಿದ್ದವು, ಒಟ್ಟಿಗೆ ಒಂದೇ ಪ್ರಕರಣವನ್ನು ಎರಡು ಸಂಸ್ಥೆಗಳು ತನಿಖೆ ಮಾಡುವಂತಿಲ್ಲ ಎಂಬುದಾಗಿ ನ್ಯಾಯಾಲಯದ ಮುಂದೆ ಪ್ರಸ್ತಾಪ ಮಾಡಿದ್ದೇನೆ.
ಮುಖ್ಯಮಂತ್ರಿ ಹುದ್ದೆ ವಿಚಾರವಾಗಿ ಯಾವ ಸಚಿವರೂ, ಏನೂ ಮಾತನಾಡಿಲ್ಲ, ಸರ್ಕಾರ ಸುಭದ್ರವಾಗಿದೆ, ನಾವೆಲ್ಲರೂ ಸಿದ್ದರಾಮಯ್ಯ ಅವರ ಕೆಳಗೆ ಕೆಲಸ ಮಾಡುತ್ತಿದ್ದೇವೆ ಎಂದರು.
