ಬೆಂಗಳೂರು:ಮುಂದಿನ ಎರಡು-ಮೂರು ತಿಂಗಳಲ್ಲಿ ಸ್ಥಳೀಯ ಸಂಸ್ಥೆ ಹಾಗೂ ಪಾಲಿಕೆ ಚುನಾವಣೆಗಳು ಎದುರಾಗುತ್ತಿದ್ದು ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ನ್ಯಾಯಾಲಯಕ್ಕೆ ಪ್ರಮಾಣಪತ್ರ ಸಲ್ಲಿಸಿದ್ದು, ಮೀಸಲಾತಿ, ಕ್ಷೇತ್ರ ಪುನರ್ ವಿಂಗಡಣೆ ನಡೆಯುತ್ತಿದೆ, ಕೆಲವೇ ದಿನಗಳಲ್ಲಿ ಚುನಾವಣೆ ನಡೆಸುವ ದಿನಾಂಕಗಳನ್ನು ಕೋರ್ಟ್‌ಗೆ ತಿಳಿಸಲಿದ್ದೇವೆ.
ಚುನಾವಣೆಯಲ್ಲಿ ಮಹಿಳೆಯರಿಗೆ ಶೇ.50 ಮೀಸಲಾತಿ ನೀಡಲಾಗುವುದು, ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ನಾಯಕತ್ವ ಹೆಚ್ಚಾಗಿ ಬೆಳೆಸಬೇಕಿದೆ.
ಬಿಬಿಎಂಪಿ ಚುನಾವಣೆ
ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆಗೆ ಸಂಬಂಧಿಸಿದಂತೆ ಶಾಸಕ ರಿಜ್ವಾನ್ ಆರ್ಷದ್ ನೇತೃತ್ವದಲ್ಲಿ ಸಮಿತಿ ಮಾಡಿ ಅಭಿಪ್ರಾಯ ಸಂಗ್ರಹಿಸಲಾಗುವುದು, ಎಲ್ಲರೂ ಬೂತ್ ಮಟ್ಟದಲ್ಲಿ ಸಜ್ಜಾಗಿ.
ನಮ್ಮ ರಾಜಕೀಯ ವಿರೋಧಿಗಳ ವಿರುದ್ಧ ಹೋರಾಟ ಮಾಡಬೇಕೇ ಹೊರತು ನಮ್ಮ ನಮ್ಮಲ್ಲೇ ಹೋರಾಟ ಮಾಡಬಾರದು ಎಂದು ಕರೆ ನೀಡಿದರು.
ಕೆಪಿಸಿಸಿ ಕಚೇರಿಯಲ್ಲಿ ಯುವ ಕಾಂಗ್ರೆಸ್ ಚುನಾವಣಾ ಫಲಿತಾಂಶ ಪ್ರಕಟಿಸಿ ಮಾತನಾಡಿದ ಅವರು, ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಉದಯ ಭಾನು, ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮಂಜುನಾಥ್‌ರನ್ನು ಆಯ್ಕೆ ಮಾಡಿದ್ದಾರೆ, ಚುನಾವಣಾ ಪ್ರಕ್ರಿಯೆಯಲ್ಲಿ ಕೆಪಿಸಿಸಿ ಹಸ್ತಕ್ಷೇಪ ಮಾಡಿಲ್ಲ ಎಂದರು.
ಯುವ ನಾಯಕರಿಗೆ ಜವಾಬ್ದಾರಿ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಮುಖಂಡತ್ವ ಹಾಗೂ ರಾಹುಲ್ ಗಾಂಧಿ ನಾಯಕತ್ವದಲ್ಲಿ ಮಂಜುನಾಥ್‌ಗೆ ಯುವ ಕಾಂಗ್ರೆಸ್ ಅಧ್ಯಕ್ಷ ಜವಾಬ್ದಾರಿ ವಹಿಸಲಾಗುತ್ತಿದೆ.
ಚುನಾವಣೆಯಲ್ಲಿ ಗೆಲ್ಲುವುದು ಮುಖ್ಯವಲ್ಲ, ಪಕ್ಷದಲ್ಲಿ ಗುಂಪುಗಾರಿಕೆ ಮಾಡದೆ, ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು, ಪಕ್ಷದ ಸಿದ್ಧಾಂತ ನಂಬಿ ಸದಸ್ಯತ್ವ ಪಡೆದಿರುವ ಎಲ್ಲರನ್ನು ಸೇರಿಸಿಕೊಂಡು ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಹೋರಾಟ ಮಾಡಬೇಕು.
ಕಾಲೇಜುಗಳಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆಗಳು ಇಲ್ಲದ ಕಾರಣ ಯುವ ನಾಯಕತ್ವ ಬೆಳೆಸಲು ಯುವ ಕಾಂಗ್ರೆಸ್ ಚುನಾವಣೆ ಮಾಡುತ್ತಿದ್ದೇವೆ.
ನೂತನ ಪದಾಧಿಕಾರಿಗಳು ಯಾವ ರೀತಿ ಕೆಲಸ ಮಾಡಬೇಕು ಎಂಬ ಬಗ್ಗೆ ಮುಂದಿನ ಮಾರ್ಗದರ್ಶನ ನೀಡಲಾಗುವುದು ಎಂದರು.