ಬೆಂಗಳೂರು:ಅಧಿಕಾರ ಹಂಚಿಕೆ ಒಪ್ಪಂದದ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದಿಲ್ಲಿ ಮತ್ತೆ ಪರೋಕ್ಷವಾಗಿ ಪುನರುಚ್ಚರಿಸಿದ್ದಾರೆ.
ಶಿವಕುಮಾರ್ ಮುಖ್ಯಮಂತ್ರಿ ಆಗುವುದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯಿಲಿ ನೀಡಿರುವ ಹೇಳಿಕೆ ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ತಲ್ಲಣ ಉಂಟು ಮಾಡಿದೆ.
ಪರ-ವಿರೋಧ ಚರ್ಚೆ
ಈ ಬಗ್ಗೆ ಪರ ಮತ್ತು ವಿರೋಧದ ಚರ್ಚೆ ಸಚಿವರು ಮತ್ತು ಶಾಸಕರಲ್ಲಿ ನಡೆದಿದೆ.
ಕೆಲವು ಸಚಿವರು, ಮೊಯಿಲಿ ಹೇಳಿದಂತೆ ಆಗುವುದಿಲ್ಲ ಎಂದರಾದರೂ, ವರಿಷ್ಠರ ತೀರ್ಮಾನವೇ ಅಂತಿಮ ಎಂದಿದ್ದಾರೆ.
ಮತ್ತೆ ಕೆಲವರು, ಸದ್ಯಕ್ಕೆ ಕುರ್ಚಿ ಖಾಲಿ ಇಲ್ಲ, ಮುಂದೆ ನೋಡೋಣ ಎಂದು ಬೀಸೋ ದೊಣ್ಣೆಯಿಂದ ತಪ್ಪಿಸಿಕೊಳ್ಳುವ ಪ್ರಯತ್ನ ಮಾಡಿದ್ದಾರೆ.
ಖರ್ಗೆ ಸ್ಪಷ್ಟ ಸೂಚನೆ
ಇದರ ನಡುವೆ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್, ಅಧಿಕಾರ ಹಂಚಿಕೆ ವಿಚಾರವಾಗಿ ಚರ್ಚೆ ಮಾಡದಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟ ಸೂಚನೆ ನೀಡಿದ್ದಾರೆ.
ಈ ಹಿಂದೆ ನಾನು ಏನು ಹೇಳಬೇಕೋ ಅದನ್ನು ಹೇಳಿದ್ದೇನೆ, ಈಗ ವರಿಷ್ಠರ ಮಾತಿಗೆ ಬದ್ಧನಾಗಿರುತ್ತೇನೆ.
ಇನ್ನು ವೀರಪ್ಪ ಮೊಯಿಲಿ ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ, ನಾನು, ಆ ಬಗ್ಗೆ ಚರ್ಚೆ ಮಾಡುವುದಿಲ್ಲ, ನನಗೆ ಅದರ ಅಗತ್ಯವೂ ಇಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.


